ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ.
ದೊಡ್ಡಬಳ್ಳಾಪುರ (ಜ.28): ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಜಾಗೃತಿ ಜಾಥದ ಸ್ತಬ್ಧ ಚಿತ್ರ ಜನವರಿ 26ರಿಂದ ಫೆಬ್ರವರಿ 23ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆರಂಭಿಸಲಾದ ಸಂವಿಧಾನ ಜಾಗೃತಿ ಜಾಥಾ, ಸ್ತಬ್ಧ ಚಿತ್ರದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸಂವಿಧಾನ ಅಂಗೀಕಾರಗೊಂಡು ಅಮೃತ ಮಹೋತ್ಸವ ವರ್ಷಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಯಶಸ್ವಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಜಾಗೃತಿ ಜಾಥಾದ ಸ್ತಬ್ಧ ಚಿತ್ರ ಮೆರವಣಿಗೆಯು ಸುಗಮವಾಗಿ ಸಂಚರಿಸಲು ಜಿಲ್ಲಾ ಮಟ್ಟದ, ತಾಲೂಕು ಮಟ್ಟದಲ್ಲಿ ಪ್ರಗತಿ ಚಿಂತಕರು, ಸಮುದಾಯ ಮುಖಂಡರು, ಸಾಮಾಜಿಕ ಕಾರ್ಯಕರ್ತರನ್ನೊಳಗೊಂಡ ಸಮಿತಿ ಕಾರ್ಯನಿರ್ವಹಣೆಯಲ್ಲಿದೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಿಗೆ ಮತ್ತು 6 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜನವರಿ 26 ರಿಂದ ಫೆಬ್ರವರಿ 23 ರವರೆಗೆ ಜಾಥಾ ನಡೆಯಲಿದ್ದು, ಜಾಗೃತಿ ಜಾಥಾ ಸಂಚರಿಸಲಿರುವ ಆಯಾ ವ್ಯಾಪ್ತಿಯಲ್ಲಿ ಪಂಚಾಯಿತಿ ಅಧ್ಯಕ್ಷರು, ಮುಖಂಡರು, ಅಧಿಕಾರಿಗಳು ಶಿಷ್ಟಾಚಾರದಂತೆ ಸಂವಿಧಾನ ಜಾಗೃತಿ ಜಾಥಾವನ್ನು ಸ್ವಾಗತಿಸಬೇಕು. ಹೀಗಾಗಿ ಸಂಚರಿಸುವ ಮಾರ್ಗ ವಿವರಣೆಯನ್ನು ಮೊದಲೇ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಿರಬೇಕು. ಯಾವುದೇ ಗೊಂದಲಗಳಿಲ್ಲದೇ ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.
ಅಧಿಕಾರಕ್ಕೆ ಬಂದು 7 ತಿಂಗಳಲ್ಲಿ ಸಿದ್ದರಾಮಯ್ಯನವರು ಏನು ಕಡಿದು ಕಟ್ಟೆಹಾಕಿಲ್ಲ: ಸಂಸದ ಪ್ರತಾಪ್ ಸಿಂಹ
ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್, ಜಿಪಂ ಸಿಇಒ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಅಪರ ಪೋಲಿಸ್ ವರಿಷ್ಠಾಧಿಕಾರಿ ಪುರುಷೋತ್ತಮ, ನಾಗರಾಜ್, ತಹಶೀಲ್ದಾರ್ ಶಿವರಾಜ್, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.