ಆಸ್ಪತ್ರೆಯಲ್ಲಿದ್ದೇನೆ, ಬರಲಾಗ್ತಿಲ್ಲ ನೆರೆ ಬಗ್ಗೆ ಎಚ್ಚರಿಕೆ ವಹಿಸಿ| ಬಾಗಲಕೋಟೆ ಡಿಸಿಗೆ ಸಿದ್ದರಾಮಯ್ಯ ಮನವಿ| ಕೊರೋನಾ ಸೋಂಕಿನಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ
ಬಾಗಲಕೋಟೆ(ಆ.10): ಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯ ಶಾಸಕರೂ ಆಗಿರುವ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಿದ್ದಾರೆ.
ಕೊರೋನಾ ಸೋಂಕಿನಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರು ಭಾನುವಾರ ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಈಗಾಗಲೇ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ನಾನು ಆಸ್ಪತ್ರೆಯಲ್ಲಿರುವ ಕಾರಣದಿಂದಾಗಿ ಬಾಗಲಕೋಟೆ ಜಿಲ್ಲೆಗೆ ಆಗಮಿಸಲು ಆಗುತ್ತಿಲ್ಲ. ಈಗಾಗಲೇ ಉಂಟಾಗಿರುವ ಕೊರೋನಾ ಸೋಂಕಿನ ಜೊತೆಗೆ ಪ್ರವಾಹ ಸಮಸ್ಯೆಯೂ ತಲೆದೋರುವ ಸಾಧ್ಯತೆ ಇದೆ. ಹೀಗಾಗಿ ಮತ್ತಷ್ಟು ಎಚ್ಚರಿಕೆಯಿಂದ ಕೆಲಸ ಮಾಡಬೇಕಿದೆ ಎಂದು ಸೂಚಿಸಿದರು.
ಬಿಎಸ್‌ವೈ, ಸಿದ್ದು ಬಹುತೇಕ ಚೇತರಿಕೆ: ಶೀಘ್ರದಲ್ಲೇ ಡಿಸ್ಚಾರ್ಜ್!
ಈ ವೇಳೆ ಸದ್ಯಕ್ಕೆ ಪ್ರವಾಹ ಸಾಧ್ಯತೆ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು ಎಂದು ತಿಳಿದುಬಂದಿದೆ.
ಇದೇ ವೇಳೆ ಬಾದಾಮಿ ತಹಶೀಲ್ದಾರರ ಜೊತೆಗೂ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತನಾಡಿದರು. ಮುಳುಗಡೆ ಭೀತಿ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ನಿಗಾ ವಹಿಸುವಂತೆ ಆದೇಶ ಮಾಡಿದರು.
ಜತೆಗೆ ಕೊರೋನಾ ಕುರಿತು ಮಾಹಿತಿ ಪಡೆದ ಅವರು, ಕೊರೋನಾ ಸೋಂಕಿತರ ಚಿಕಿತ್ಸೆಗೆ ಯಾವುದೇ ಲೋಪ ಆಗದಂತೆ ನೋಡಿಕೊಳ್ಳಬೇಕು. ಸೋಂಕು ಪರೀಕ್ಷೆಗಳನ್ನು ಹೆಚ್ಚಿಸಿ ಶೀಘ್ರವಾಗಿ ಪರೀಕ್ಷೆ ನಡೆಸಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು. ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.