ಪ್ರಧಾನಿ ಮೋದಿ ಜೊತೆ ವಿಡಿಯೋ ಸಂವಾದ: ರಾಜ್ಯದ ಸಚಿವರಿಗೆ ಸಿದ್ದರಾಮಯ್ಯ ಸಲಹೆ

By Suvarna NewsFirst Published Aug 10, 2020, 2:25 PM IST
Highlights

ರಾಜ್ಯದಲ್ಲಿ ತಲೆಧೋರಿರುವ ಪ್ರವಾಹದ ಕುರಿತಾಗಿ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಾಜ್ಯದ ಸಚವರ ಜೊತೆಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಇದಕ್ಕೆ ರಾಜ್ಯ ಸಚಿವರಿಗೆ ಸಲಹೆ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು, (ಆ.10): ರಾಜ್ಯದ ಅತಿವೃಷ್ಠಿ ಹಾನಿಯ ಬಗ್ಗೆ ರಾಜ್ಯದ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಧೈರ್ಯವಾಗಿ ವಿವರಿಸಿ ಹೆಚ್ಚಿನ ಪರಿಹಾರ ಪಡೆದುಕೊಳ್ಳಲು ಮತ್ತು ಕಳೆದ ವರ್ಷದ ಹಾನಿಯ ಪರಿಹಾರದ ಬಾಕಿಯನ್ನು ಬಿಡುಗಡೆ ಮಾಡಿಸಲು ಪ್ರಯತ್ನಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಈ ಕುರಿತು ಸರಣಿ  ಟ್ವಿಟ್ ಮಾಡಿರುವ ಅವರು, ಅತಿವೃಷ್ಟಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ. ಕಳೆದ ಬಾರಿ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿ ಎಚ್ಚೆತ್ತುಕೊಂಡಿದ್ದಾರೆ. ಈ ಅವಕಾಶವನ್ನು ರಾಜ್ಯ ಸರ್ಕಾರ ಸರಿಯಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಬಿಎಸ್‌ವೈ ಸರ್ಕಾರಕ್ಕೆ ಮತ್ತೆ ಸಂಕಷ್ಟ ತಂದಿಟ್ಟ ಸಿದ್ದರಾಮಯ್ಯ...

ಪ್ರಧಾನಿ ಮಂತ್ರಿ ನಡೆಸುವ ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್ ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ 1 ಲಕ್ಷ ಕೋಟಿ ರೂಪಾಯಿಗಳು, ರಾಜ್ಯಸರ್ಕಾರದ ವರದಿ ಪ್ರಕಾರ ನಷ್ಟ 50 ಸಾವಿರ ಕೋಟಿ ರೂಪಾಯಿಗಳು. ಪರಿಹಾರ ಕೇಳಿದ್ದು ರೂ.35,000 ಕೋಟಿ, ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ರೂ.1860 ಕೋಟಿ ಮಾತ್ರ. ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ ಎಂದಿದ್ದಾರೆ.

ಕಳೆದ ವರ್ಷ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅತಿವೃಷ್ಟಿಯ ವರದಿ ಕಳಿಸಿರುವುದು ಆಗಸ್ಟ್‍ವರೆಗಿನ ಹಾನಿ ಬಗ್ಗೆ ಮಾತ್ರ. ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅತಿವೃಷ್ಟಿ ವರದಿ ಕಳಿಸದೆ ಸರ್ಕಾರ ನೊಂದ ಜನತೆಗೆ ಮೋಸ ಮಾಡಿದೆ. ಈ ಬಾರಿ ಪರಿಹಾರವನ್ನು ಕೇಳುವಾಗ ಇದನ್ನು ಪ್ರಧಾನಿ ಅವರ ಗಮನಕ್ಕೆ ತರಬೇಕು.

ನಿನ್ನೆ ಪ್ರಧಾನಿ ಘೋಷಿಸಿರುವ ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಪ್ಯಾಕೇಜ್ ಕಳೆದ ಮೇ ತಿಂಗಳಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ ಘೋಷಿಸಿದ್ದ ಕೋವಿಡ್ ಪರಿಹಾರ ಯೋಜನೆಯ ಭಾಗವಾಗಿದೆ. ಅದನ್ನೇ ಹೊಸ ಪ್ಯಾಕೇಜ್ ಎಂದು ಬಿಂಬಿಸಿ ಪ್ರಧಾನಿಯವರು ರೈತರ ದಾರಿ ತಪ್ಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

click me!