ತೆಲಂಗಾಣ ಜನ ಬದಲಾವಣೆ ಬಯಸಿದ್ದಾರೆ, ಕಾಂಗ್ರೆಸ್ ಅಧಿಕಾರ ನಿಶ್ಚಿತ: ಡಿಕೆಶಿ

By Kannadaprabha News  |  First Published Nov 28, 2023, 4:00 AM IST

ತೆಲಂಗಾಣದ ಜನ ಈ ಬಾರಿ ಬದಲಾವಣೆ ಬಯಸಿದ್ದು, ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಪರ ಅಲೆಯಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಶಾಭಾವ ವ್ಯಕ್ತಪಡಿಸಿದ್ದಾರೆ. 


ನವದೆಹಲಿ (ನ.28): ತೆಲಂಗಾಣದ ಜನ ಈ ಬಾರಿ ಬದಲಾವಣೆ ಬಯಸಿದ್ದು, ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಪರ ಅಲೆಯಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಶಾಭಾವ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಕರ್ನಾಟಕ ಮಾದರಿಯಂತೆ ತೆಲಂಗಾಣದಲ್ಲಿ 6 ಗ್ಯಾರಂಟಿಗಳನ್ನು ನೀಡಲಾಗಿದೆ. ದಲಿತ ಸಿಎಂ ಮಾಡುವುದೂ ಸೇರಿದಂತೆ ಕೆಸಿಆರ್ ನೇತೃತ್ವದ ಸರ್ಕಾರ ಕಳೆದ 10 ವರ್ಷಗಳಲ್ಲಿ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ತೆಲಂಗಾಣ ರಾಜ್ಯ ರಚನೆಗೆ ಸೋನಿಯಾ ಗಾಂಧಿ ಅವರೇ ಕಾರಣ. ಹೀಗಾಗಿ, ತೆಲಂಗಾಣದ ಜನರಿಗೆ ಸೋನಿಯಾಗಾಂಧಿ ಅವರ ಋಣ ತೀರಿಸಬೇಕು ಎನ್ನುವ ಭಾವನೆ ಬಂದಿದೆ ಎಂದರು.

ತೆಲಂಗಾಣದಲ್ಲಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡುವುದು ನಿಶ್ಚಿತ. ನಮ್ಮ ಸರ್ಕಾರದ ಸಚಿವ ಸಂಪುಟದ ಮೊದಲ ಸಭೆಯಲ್ಲೇ ಡಿ.9 ರಂದು ಎಲ್ಲಾ 6 ಗ್ಯಾರಂಟಿಗಳನ್ನು ಜಾರಿಗೆ ತರಲು ಅನುಮೋದನೆ ನೀಡುತ್ತೇವೆ ಎಂದು ಹೇಳಿದರು. ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರು ಪ್ಲ್ಯಾನ್ ಮಾಡುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಆರ್.ಅಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿ, ಅವರು ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಮಾತನಾಡಲು ಆಗುವುದಿಲ್ಲ. ಅವರು ಅವರದೇ ಪಕ್ಷದ ವಕ್ತಾರರಾಗಿ ಅವರ ಪಕ್ಷದ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

Tap to resize

Latest Videos

ತೆಲಂಗಾಣದಲ್ಲಿ ಬಿಜೆಪಿ ಗೆದ್ದರೆ ಬಿಆರ್‌ಎಸ್‌ ನಾಯಕರು ಜೈಲಿಗೆ: ಪ್ರಧಾನಿ ಮೋದಿ

ಬೋಗಸ್ ಜನತಾ ದರ್ಶನ ಎಂಬ ಅಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿ, ಅವರು ಹೊಸದಾಗಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹೊಸದರಲ್ಲಿ ಜೋರಾಗಿ ಬಟ್ಟೆ ಒಗೆಯಲಿ. ನಾವೂ ಎಲ್ಲರ ಮನಸ್ಥಿತಿ ಅರಿಯುತ್ತಿದ್ದೇವೆ ಎಂದು ಛೇಡಿಸಿದರು. ಸೋಮಣ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗ್ತಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸೋಮಣ್ಣ ಅವರು ನನ್ನ ಬಳಿ ಏನೂ ಮಾತಾಡಿಲ್ಲ. ಮಾಧ್ಯಮಗಳಲ್ಲಿ ಅವರು ನೋವು ತೊಡಿಕೊಂಡಿರೋದನ್ನು ನೋಡಿದ್ದೇನೆ. ಅವರು ನಮ್ಮ ಜಿಲ್ಲೆಯವರು. ಯಾಕೆ ಬೇರೆ ಜಿಲ್ಲೆಗೆ ಹೋಗಿ ಚುನಾವಣೆಗೆ ನಿಂತರೋ ಗೊತ್ತಿಲ್ಲ ಎಂದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬಹುಮತ: ವೀರಪ್ಪ ಮೊಯ್ಲಿ ವಿಶ್ವಾಸ

ಸಿಬಿಐಗೆ ಅನುಮತಿ ವಾಪಸ್‌ ಬಗ್ಗೆ ಮುಂದೆ ಮಾತಾಡುವೆ: ಸಂಪುಟದಲ್ಲಿ ಸಿಬಿಐ ಕೇಸ್ ವಾಪಸ್ ಪಡೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ತನಿಖೆಗೆ ಅನುಮತಿ ವಾಪಸ್ ಪಡೆದಿರುವ ಬೆಳವಣಿಗೆಯಿಂದ ಎಲ್ಲರ ಮನಸ್ಥಿತಿಯೂ ಅರ್ಥವಾಗುತ್ತಿದೆ. ಯಾರ್‍ಯಾರು ಗೆಳೆಯರು, ಅವರ ಭಾವನೆ ಏನಿದೆ ಎಂಬುದು ಈಗ ತಿಳಿಯುತ್ತಿದೆ. ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿರುವ ಬಗ್ಗೆ ಈಗ ಮಾತನಾಡಲು ಹೋಗುವುದಿಲ್ಲ. ಮುಂದೆ ಅದರ ಬಗ್ಗೆ ಖಂಡಿತವಾಗಿಯೂ ಮಾತನಾಡುತ್ತೇನೆ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದರು.

click me!