
ಬೆಂಗಳೂರು (ಮೇ.08): ದೇಶದ ಯೋಧರು ಉಗ್ರರ ಮೇಲೆ ನಡೆಸಿದ ದಾಳಿ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ನಿಂದ ಬುಧವಾರ ರಾಯಚೂರಿನಲ್ಲಿ ಹಮ್ಮಿಕೊಂಡಿದ್ದ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆ ಹಾಗೂ ಸಂವಿಧಾನ ಉಳಿಸಿ ರ್‍ಯಾಲಿ ರದ್ದುಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಹಾಗೂ ಸಂವಿಧಾನ್ ಬಚಾವೋ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಂಡಿದ್ದೆವು. ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನೀತಿ ವಿರುದ್ಧ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ರದ್ದು ಮಾಡಿದ್ದೇವೆ ಎಂದರು.
ಕೇಂದ್ರ ಸರ್ಕಾರದ ಜತೆ ನಿಲ್ಲಿ: ನಮ್ಮ ದೇಶದ ಸೈನಿಕರಿಗಾಗಿ, ಸಿಂಧೂರ ದಾಳಿ ಸರಿಯಾದ ಕ್ರಮ ಎಂದು ತಿಳಿಸಲು ರಾಯಚೂರು ರ್‍ಯಾಲಿ ರದ್ದುಗೊಳಿಸಿದ್ದೇವೆ. ನಮ್ಮ ಎಲ್ಲಾ ಜನರೂ ಹಾಗೂ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ಜತೆ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ದತ್ತಾಂಶ ಬೇಕು: ‘ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಸಲುವಾಗಿ ರಾಜ್ಯ ಸರ್ಕಾರ ರಚಿಸಿರುವ ನ್ಯಾ. ನಾಗಮೋಹನ್‌ದಾಸ್ ನೇತೃತ್ವದ ಆಯೋಗ ಸೋಮವಾರದಿಂದ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ- 2025ಗೆ ಚಾಲನೆ ನೀಡಿದೆ. ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ನಡೆಯಲಿದ್ದು, ಎಲ್ಲರೂ ಭಾಗವಹಿಸಿ ಮಾಹಿತಿ ನೀಡಿ ಗೊಂದಲ ಬಗೆಹರಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಪರಿಶಿಷ್ಟ ಜಾತಿ/ಮೂಲ ಜಾತಿಗಳ ಸಮಗ್ರ ಸಮೀಕ್ಷೆ-2025 ಕುರಿತು ವಿವರಣೆ ನೀಡಿದರು.
ಬೆಂಗಳೂರು ನಗರದ ಅಭಿವೃದ್ಧಿಗೆ ನೆರವು ನೀಡಿ: ಕೇಂದ್ರ ಸರ್ಕಾರಕ್ಕೆ ಡಿಕೆಶಿ ಮನವಿ
ನಮ್ಮ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲೇ ಒಳ ಮೀಸಲಾತಿ ಜಾರಿ ಮಾಡುವುದಾಗಿ ಹೇಳಿತ್ತು. ಇದಕ್ಕೆ ಸುಪ್ರೀಂ ಕೋರ್ಟ್ ಸಹ ಹಸಿರು ನಿಶಾನೆ ತೋರಿದ್ದರಿಂದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗ ರಚಿಸಿದ್ದೆವು. ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕುರಿತು ಸಮಿತಿ ಮಧ್ಯಂತರ ವರದಿ ನೀಡಿದ್ದು, ಸಂವಿಧಾನದ 341ನೇ ವಿಧಿ ಅಡಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶ ಸಂಗ್ರಹಿಸಲು ಮನೆ-ಮನೆ ಸಮೀಕ್ಷೆ ನಡೆಸಲು ಸಮಿತಿ ಶಿಫಾರಸು ಮಾಡಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.