
ಬೆಂಗಳೂರು(ಜು.08): ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನ ಕಾರ್ಯಕ್ರಮವನ್ನು ಪಕ್ಷದ ವೇದಿಕೆಯಲ್ಲೇ ನಡೆಸಲು ತೀರ್ಮಾನಿಸಲಾಗಿದ್ದು, ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸಿದ್ದರಾಮಯ್ಯ ಅವರು 75ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಇದರ ಅಂಗವಾಗಿ ಪಕ್ಷದ ನಾಯಕರು ಒಂದು ಸಮಿತಿಯನ್ನು ಮಾಡಿಕೊಂಡು ಆ.3ರಂದು ದಾವಣಗೆರೆಯಲ್ಲಿ ಅವರ ಜನ್ಮ ದಿನ ಆಚರಿಸಲು ನಿರ್ಧರಿಸಿದ್ದಾರೆ. ನಾನು ಸೇರಿ ಪಕ್ಷದ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇವೆ. ಕಾರ್ಯಕ್ರಮ ಪಕ್ಷದ ಚೌಕಟ್ಟಿನಲ್ಲೇ ನಡೆಯಲಿದೆ ಎಂದು ಹೇಳಿದ್ದಾರೆ.
ಸಿದ್ದರಾಮೋತ್ಸವಕ್ಕೆ ಬೇಕಿದ್ರೆ ಸಹಕಾರ ನೀಡುತ್ತೇವೆ: ನಳೀನ್ ಕುಮಾರ್ ಕಟೀಲ್
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ. 15ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸ್ವಾತಂತ್ರ್ಯ ನಡಿಗೆ ಪಕ್ಷಾತೀತವಾಗಿ ನಡೆಯಲಿದೆ. ಆ.3 ರಂದು ನಡೆಯಲಿರುವ ಸಿದ್ದರಾಮಯ್ಯ ಜನ್ಮ ದಿನಾಚರಣೆ ಪಕ್ಷದ ಚೌಕಟ್ಟಿನಲ್ಲೇ ನಡೆಯಲಿದೆ. ಪಕ್ಷದ ನಾಯಕರಾದ ರಾಹುಲ್‌ಗಾಂಧಿ ಅವರು ಸಹ ಭಾಗವಹಿಸಲು ಒಪ್ಪಿದ್ದಾರೆ ಎಂದು ಹೇಳಿದರು.
ಜನ್ಮ ದಿನ ಆಚರಣೆ ಸಮಿತಿಯು ಪಕ್ಷಾತೀತವಾಗಿ ನಡೆಸುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಮಿತಿಯಲ್ಲಿ ಇರುವವರೆಲ್ಲರೂ ನಮ್ಮ ಪಕ್ಷದವರು. ನಮ್ಮ ಪಕ್ಷದಲ್ಲಿನ ಅವರ ಶ್ರೇಯೋಭಿಲಾಷಿಗಳೇ ಸಮಿತಿ ಮಾಡಿಕೊಂಡಿದ್ದಾರೆ. ಪಕ್ಷದ ಹೊರಗಿನವರನ್ನು ಆಹ್ವಾನಿಸುವ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ಸಮಿತಿಯವರನ್ನೇ ಕೇಳಿ ಎಂದಷ್ಟೇ ಹೇಳಿದರು.
ಎಲ್ಲರೂ ಭಾಗವಹಿಸಿ:
ಇದಕ್ಕೂ ಮೊದಲು ನಡೆದ ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಲ್ಲರೂ ಸಿದ್ದರಾಮಯ್ಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಸೂಚನೆ ನೀಡಿದರು ಎಂದು ತಿಳಿದು ಬಂದಿದೆ. ಸಿದ್ದರಾಮಯ್ಯ ಅವರ ಅಭಿಮಾನಿಗಳು, ಹಿತೈಷಿಗಳು ಜನ್ಮ ದಿನಾಚರಣೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಿದ್ದಾರೆ. ಅವರ ಜನ್ಮ ದಿನಾಚರಣೆಗೆ ನಾವೆಲ್ಲರೂ ಹೋಗಬೇಕು ಎಂದು ಕರೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.