ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ

Kannadaprabha News   | Kannada Prabha
Published : Jun 22, 2025, 07:03 AM IST
BY Vijayendra

ಸಾರಾಂಶ

ರಾಜ್ಯಾಧ್ಯಕ್ಷರ ಹುದ್ದೆ ಕುರಿತು ಪಕ್ಷ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರು (ಜೂ.22): ರಾಜ್ಯಾಧ್ಯಕ್ಷರ ಹುದ್ದೆ ಕುರಿತು ಪಕ್ಷ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲಾ ಜಿಲ್ಲಾಧ್ಯಕ್ಷರ ಅಭಿಪ್ರಾಯ ಪಡೆದು ಹಾಗೂ ಪಕ್ಷದ ಮುಖಂಡರ ಅಭಿಮತ ಪಡೆದ ಬಳಿಕ ಅಂತಿಮವಾಗಿ ಯಾರನ್ನು ರಾಜ್ಯಾಧ್ಯಕ್ಷರಾಗಿ ಮಾಡಿದರೆ ಒಳ್ಳೆಯದು ಎಂದು ಪಕ್ಷ ಶೀಘ್ರದಲ್ಲೇ ನಿರ್ಧರಿಸುವ ವಿಶ್ವಾಸವಿದೆ ಎಂದರು.

ನಾನು ಕಳೆದ ಒಂದೂಕಾಲು ವರ್ಷದಿಂದ ಕೊಟ್ಟಿರುವ ಜವಾಬ್ದಾರಿಯನ್ನು ಪಕ್ಷದ ಕಾರ್ಯಕರ್ತನಾಗಿ ಶ್ರದ್ಧೆಯಿಂದ ನಿರ್ವಹಿಸುತ್ತಿದ್ದೇನೆ. ಕೇಂದ್ರ ಮತ್ತು ರಾಷ್ಟ್ರೀಯ ನಾಯಕರಿಗೆ ಕೊಡಬೇಕಾದ ಮಾಹಿತಿ ಕೊಡುತ್ತಾ ಬಂದಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಕೇಂದ್ರ ಸಚಿವ ಅಮಿತ್‌ ಶಾ ಅವರ ಭೇಟಿ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಮತ್ತು ಪಕ್ಷದ ಕೆಲ ಹಿರಿಯ ಮುಖಂಡರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದೇವೆ. ಸುಮಾರು 20-25 ನಿಮಿಷಗಳ ಕಾಲ ರಾಜ್ಯದ ರಾಜಕಾರಣ, ಪ್ರಚಲಿತ ವಿದ್ಯಾಮಾನಗಳ ಕುರಿತು ಚರ್ಚಿಸಿರುವುದಾಗಿ ಹೇಳಿದರು.

ಒಟ್ಟಾಗಿ ಹೋಗುವಂತೆ ಶಾ ಕಿವಿಮಾತು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಡೆದಾಳುವ ನೀತಿ ಅನುಸರಿಸುತ್ತಿದೆ. ಈ ಸರ್ಕಾರ ರಾಜ್ಯದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದ ಕುರಿತು ಚರ್ಚೆ ಮಾಡಿದ್ದೇವೆ. ಅವರು ಸಮಾಧಾನದಿಂದ ಆಲಿಸಿದ್ದಾರೆ. ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಅವಕಾಶವಿದೆ. ಎಲ್ಲರೂ ವ್ಯತ್ಯಾಸಗಳನ್ನು ಮರೆತು ಒಟ್ಟಾಗಿ-ಒಂದಾಗಿ ಹೋಗಬೇಕೆಂದು ತಿಳಿಸಿದ್ದಾರೆ. ಆಗ ಮಾತ್ರ ಕಾರ್ಯಕರ್ತರಿಗೆ ಗೌರವ ಕೊಟ್ಟಂತಾಗುತ್ತದೆ. ಜನ ನಮ್ಮಲ್ಲಿ ವಿಶ್ವಾಸ ಇಡುತ್ತಾರೆ ಎಂದು ಕಿವಿಮಾತು ಹೇಳಿದ್ದಾಗಿ ತಿಳಿಸಿದರು.

ಅಮಿತ್‌ ಶಾ ಸಂತೋಷ: ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷಕ್ಕೆ ಎಷ್ಟು ಜವಾಬ್ದಾರಿ ಇದೆಯೋ ಅದಕ್ಕಿಂತ ಹೆಚ್ಚಿನ ಹೊಣೆಗಾರಿಕೆ ವಿಪಕ್ಷಕ್ಕಿದೆ. ರಾಜ್ಯ ಸರ್ಕಾರದ ಈಗಿನ ಕಾರ್ಯವೈಖರಿ, ಕಾಂಗ್ರೆಸ್ ಸರ್ಕಾರದ ಕರಾಳ ಮುಖವನ್ನು ಜನರ ಮುಂದೆ ಅನಾವರಣಗೊಳಿಸುವ ಕೆಲಸವನ್ನು ನಾವು ವಿಪಕ್ಷವಾಗಿ ಮಾಡುತ್ತಾ ಬಂದಿದ್ದೇವೆ ಎಂದು ವಿವರಿಸಿದಾಗ ಅಮಿತ್‌ ಶಾ ಅವರು ಸಂತೋಷ ವ್ಯಕ್ತಪಡಿಸಿದ್ದಾಗಿ ಹೇಳಿದರು. ಕೆ.ಎಸ್.ಈಶ್ವರಪ್ಪ ಅವರನ್ನು ಪಕ್ಷಕ್ಕೆ ಮರುಸೇರ್ಪಡೆ ಕುರಿತು ಪ್ರಶ್ನಿಸಿದಾಗ, ಈ ಬಗ್ಗೆ ರಾಜ್ಯಮಟ್ಟ ಅಥವಾ ಕೇಂದ್ರ ಮಟ್ಟದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಬಿ.ವೈ.ವಿಜಯೇಂದ್ರ ಉತ್ತರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!