ಕಾನೂನು ಹದಗೆಟ್ಟರೆ ಅಭಿವೃದ್ಧಿ ಅಸಾಧ್ಯ: ಸಿಎಂ ಸಿದ್ದರಾಮಯ್ಯ

Kannadaprabha News   | Kannada Prabha
Published : May 31, 2025, 04:23 AM IST
Karnataka Chief Minister Siddaramaiah (File Photo/ANI)

ಸಾರಾಂಶ

ರಾಜ್ಯದಲ್ಲಿ ಕೋಮು ಗಲಭೆ, ದ್ವೇಷ ಹರಡುವಿಕೆ ಹೆಚ್ಚಾಗುತ್ತಿದೆ. ಬಾಲಬಿಚ್ಚುತ್ತಿರುವ ಸಂವಿಧಾನ ವಿರೋಧಿ, ಜನವಿರೋಧಿ ದುಷ್ಟಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಿ.

ಬೆಂಗಳೂರು (ಮೇ.31): ‘ರಾಜ್ಯದಲ್ಲಿ ಕೋಮು ಗಲಭೆ, ದ್ವೇಷ ಹರಡುವಿಕೆ ಹೆಚ್ಚಾಗುತ್ತಿದೆ. ಬಾಲಬಿಚ್ಚುತ್ತಿರುವ ಸಂವಿಧಾನ ವಿರೋಧಿ, ಜನವಿರೋಧಿ ದುಷ್ಟಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲವಾದರೆ ನಾವು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು, ಪೊಲೀಸ್‌ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡಕ್ಕೂ ನೇರಾನೇರ ಸಂಬಂಧವಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ, ಅಭಿವೃದ್ಧಿ ಕುಂಠಿತವಾಗುತ್ತದೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆ ಎಂದು ಎಚ್ಚರಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ, ಜಿಪಂ ಸಿಇಓ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ವಸತಿ ಸೇರಿ ವಿವಿಧ ಇಲಾಖೆಗಳ ಕುರಿತು ಬೆಳಗ್ಗೆ 10.45 ಗಂಟೆಯಿಂದ ರಾತ್ರಿ 7.45 ಗಂಟೆವರೆಗೆ ಸತತ 9 ಗಂಟೆಗಳ ಕಾಲ ಸುದೀರ್ಘ ಸಭೆ ನಡೆಸಿ ಬಿಸಿ ಮುಟ್ಟಿಸಿದರು. ಮಂಗಳೂರು ಸೇರಿ ಕೆಲ ಕಡೆ ಕೋಮುಗಲಭೆ, ವೈಷಮ್ಯ ಹರಡುವ ಕೃತ್ಯಗಳು ನಡೆಯುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಇತ್ತೀಚಿನ ದಿನಗಳಲ್ಲಿ ಕೋಮುಗಲಭೆ ಸೃಷ್ಟಿಸುವ ಶಕ್ತಿಗಳು ತಲೆ ಎತ್ತುತ್ತಿವೆ. ಅಂಥ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳು ಯಾರೇ ಆಗಿದ್ದರೂ ಅವರನ್ನು ಮಟ್ಟಹಾಕುವುದು, ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದದ್ದು ಜಿಲ್ಲಾಧಿಕಾರಿ, ಜಿ.ಪಂ ಸಿಇಒ, ಎಸ್ಪಿಗಳ ಜವಾಬ್ದಾರಿ ಅಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.

ನಿರ್ದಾಕ್ಷಿಣ್ಯ ಕ್ರಮಕ್ಕೆ ನಿರ್ಧರಿಸಿದ್ದೇನೆ: ಜಿಲ್ಲಾ ಮಟ್ಟದ ಶಾಂತಿ ಸಮಿತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರುತ್ತಾರೆ. ಅವರು ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಶಾಂತಿಭಂಗ ಆದ ಮೇಲೆ ಪೋಸ್ಟ್‌ ಮಾರ್ಟಂ ಮಾಡುತ್ತಾ ಕೂರಬಾರದು. ಮೊದಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಏನು ಸಮಸ್ಯೆ ನಿಮಗೆ? ಎಂದು ತರಾಟೆಗೆ ತೆಗೆದುಕೊಂಡರು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರು ಮತ್ತು ಜನಪರ ಆಶಯಗಳಿಗೆ ಸ್ಪಂದಿಸದವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ಸಂವಿಧಾನ ಆಶಯ ಕಾರ್ಯರೂಪಕ್ಕೆ ತರುವಲ್ಲಿ ವಿಫಲರಾದವರ ವಿರುದ್ದ ನಾನು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇನೆ ಎಂದು ಸಿದ್ದರಾಮಯ್ಯ ಎಚ್ಚರಿಸಿದರು.

ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದು ಏಕಿಲ್ಲ?: ರಾಜ್ಯದಲ್ಲಿ ಸುಮಾರು ಶೇ.74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚಿಸಲಾಗಿತ್ತಾದರೂ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ ಏಕೆ ಎಂದು ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಳೆ ಹಾನಿ ಪ್ರದೇಶಕ್ಕೆ ತಕ್ಷಣ ಭೇಟಿ ನೀಡಿ: ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಓ ತಕ್ಷಣ ಕಡ್ಡಾಯವಾಗಿ ಭೇಟಿ ನೀಡಿ ಅಗತ್ಯ ಪರಿಹಾರ ಒದಗಿಸಬೇಕು. ಭೂಕುಸಿತದಂತಹ ಪ್ರಕರಣಗಳಲ್ಲಿ ಸಾವಿನ ಸಂಭಾವ್ಯತೆ ತಪ್ಪಿಸಲು ಜನರ ತೆರವು ಕಾರ್ಯ ಸೇರಿದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮೇನಲ್ಲಿ ಆಗಿದ್ದು 125 ವರ್ಷಗಳ ದಾಖಲೆ ಮಳೆ: ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ರಾಜ್ಯದಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ರಾಜ್ಯದ 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಮಳೆ ಹಾನಿಗೆ ಪರಿಹಾರ ಒದಗಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲೆಗಳಲ್ಲಿ ಎಸ್‌ಡಿಆರ್‌ಎಫ್‌ ಅಡಿ ಒಟ್ಟಾರೆಯಾಗಿ ಒಂದು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಲಭ್ಯವಿದೆ ಎಂದು ಸಿಎಂ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ