
ಸುವರ್ಣ ವಿಧಾನಸೌಧ (ಬೆಳಗಾವಿ) (ಡಿ.12): ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸಭೆಯಲ್ಲಿ ಬಿಜೆಪಿಯ ದೊಡ್ಡನಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಒಂದು ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1,500 ವೈದ್ಯರನ್ನು ನೇಮಿಸಲಾಗಿದೆ.
ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದರು. ದಿನದ 24 ಗಂಟೆಯೂ ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರು ಲಭ್ಯವಿದ್ದು, ಕಾರ್ಯನಿರ್ವಹಿಸುವಂತೆ ಕ್ರಮ ವಹಿಸಲಾಗುತ್ತಿದೆ. ಇದಕ್ಕಾಗಿ ಸದ್ಯ ತಾಲೂಕು ಆಸ್ಪತ್ರೆಗಳಿಗೆ ಹೆಚ್ಚುವರಿಯಾಗಿ ಒಬ್ಬ ಪ್ರಸೂತಿ ತಜ್ಞರು, ಅನಸ್ತೇಶಿಯಾ ತಜ್ಞರು ಸೇರಿ ಇತರೆ ತಜ್ಞ ವೈದ್ಯರನ್ನು ನೇಮಿಸಲಾಗುತ್ತಿದೆ ಎಂದರು.
ಎಲ್ಲೆಲ್ಲಿ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬ ಬಗ್ಗೆ ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳ ಅನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಡಾ.ಹಿಮಾಂಶು ಭೂಷಣ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು. ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಸಮಿತಿ ಶಿಫಾರಸಿನಂತೆ ಮೊದಲ ಹಂತದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ವಿಭಾಗದಲ್ಲಿ ಆಸ್ಪತ್ರೆಗಳನ್ನು ಮಂಜೂರು ಮಾಡಲು ಅಥವಾ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 120 ತಜ್ಞ ವೈದ್ಯರು ಮತ್ತು 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ. ಈ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ. ತಜ್ಞ ವೈದ್ಯರ ನೇಮಕ ಕುರಿತು ಹೈಕೋರ್ಟ್‍ನಲ್ಲಿದ್ದ ಪ್ರಕರಣ ಶೀಘ್ರ ಇತ್ಯರ್ಥಗೊಳ್ಳುವ ನಿರೀಕ್ಷೆಯಿದೆ. 600 ಶುಶ್ರೂಷಾಧಿಕಾರಿಗಳು, 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಹಾಗೂ 400 ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದರ ಜೊತೆ ವಿವಿಧ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿದ್ದ ವೈದ್ಯರು, ಆಹಾರ ಗುಣಮಟ್ಟ ಸುರಕ್ಷತಾ ಅಧಿಕಾರಿಗಳ ನಿಯೋಜನೆ ರದ್ದುಗೊಳಿಸಿ, ಇಲಾಖೆಗೆ ವಾಪಸ್ ಪಡೆದು ಅಗತ್ಯ ಇರುವೆಡೆ ಸೇವೆಗೆ ನಿಯೋಜಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.