
ಬೆಂಗಳೂರು (ಮಾ.26): ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇಬ್ಬರು ಮಾಜಿ ಸಚಿವರು ಹಾಗೂ ಮೂವರು ಹಾಲಿ ಶಾಸಕರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ಮುಖಂಡರಿಗೂ ನೋಟಿಸ್‌ನ ಬಿಸಿ ತಟ್ಟಿದೆ. ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಯ ನಾಯ್ಡು, ಹಾಲಿ ಶಾಸಕರಾದ ಬಿ.ಪಿ.ಹರೀಶ್, ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರಿಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಮಂಗಳವಾರ ಶೋಕಾಸ್ ನೋಟಿಸ್ ನೀಡಿದ್ದು, 72 ಗಂಟೆಯೊಳಗಾಗಿ ವಿವರಣೆ ಕೊಡುವಂತೆ ಗಡುವು ನೀಡಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕಳೆದ ತಿಂಗಳು ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿಗೊಳಿಸಿದ್ದು. ಬಳಿಕ ಅದಕ್ಕೆ ಯತ್ನಾಳ ಅವರು ವಿವರಣೆಯನ್ನೂ ನೀಡಿದ್ದರು. ಈಗ ನೋಟಿಸ್ ನೀಡಿರುವವರ ಪೈಕಿ ರೇಣುಕಾಚಾರ್ಯ ಮತ್ತು ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬೆಂಬಲಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡಿದ್ದರು.
ಶಾಸಕ ಬಿ.ಪಿ.ಹರೀಶ್ ಅವರು ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡು ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಹೇಳಿಕೆ ಕೊಟ್ಟಿದ್ದರು. ಇನ್ನು ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರು ಈಗಾಗಲೇ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿದ್ದು, ಕಳೆದ ಲೋಕಸಭಾ ಚುನಾವಣೆಗೂ ಮೊದಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಂದಿಗೆ ಪರೋಕ್ಷವಾಗಿ ಹೆಜ್ಜೆ ಹಾಕುತ್ತಿದ್ದಾರೆ. ಸಂದರ್ಭ ಬಂದಾಗಲೆಲ್ಲ ಬಿಜೆಪಿಗೆ ಇರಿಸು ಮುರಿಸುವಾಗುವಂತೆ ನಡೆದುಕೊಳ್ಳುತ್ತಿದ್ದಾರೆ.
ಸಂವಿಧಾನ ಬದಲು ಹೇಳಿಕೆ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ: ಬಿಜೆಪಿಗರಿಗೆ ಡಿಕೆಶಿ ಸವಾಲ್
ನೋಟಿಸ್‌ನಲ್ಲಿ ಏನಿದೆ?: ಐವರು ಮುಖಂಡರಿಗೂ ನೀಡಿರುವ ನೋಟಿಸ್‌ಗಳಲ್ಲಿ ಒಂದೇ ರೀತಿಯ ಒಕ್ಕಣೆ ಇದೆ. ‘ಪಕ್ಷದ ಬೆಳವಣಿಗೆಗಳ ಬಗ್ಗೆ ಬಹಿರಂಗ ವೇದಿಕೆಗಳಲ್ಲಿ ಅನಗತ್ಯ ಹೇಳಿಕೆಗಳನ್ನು ನೀಡುವ ಮೂಲಕ ನೀವು ಪಕ್ಷದ ಸಂವಿಧಾನ ಮತ್ತು ನಿಯಮಗಳಲ್ಲಿ ನಮೂದಿಸಿರುವ ಶಿಸ್ತನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದೀರಿ. ನಿಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ಕಾರಣ ಕೊಡಿ. ಈ ನೋಟಿಸ್ ತಲುಪಿದ 72 ಗಂಟೆಯೊಳಗಾಗಿ ನಿಮ್ಮ ವಿವರಣೆ ತಲುಪಬೇಕು. ಒಂದು ವೇಳೆ ನಿಗದಿತ ಸಮಯದಲ್ಲಿ ನಿಮ್ಮ ವಿವರಣೆ ತಲುಪದೇ ಇದ್ದಲ್ಲಿ ನೀವು ಏನನ್ನೂ ಹೇಳುವುದಿಲ್ಲ ಎಂದು ಊಹಿಸಿ ಪಕ್ಷದ ಶಿಸ್ತು ಸಮಿತಿ ತನ್ನ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಮುಂದಾಬಹುದು’ ಎಂದು ನೋಟಿಸ್‌ನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.