
ಮೈಸೂರು (ನ.11) ಸ್ಟಿಂಗ್ ಆಪರೇಷನ್ ವಿವಾದ(Sting Opoeration row) ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಹಾಗೂ ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK Shivakumar) ಇಂದು ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಮಾಜಿ-ಹಾಲಿ ಮುಖ್ಯಮಂತ್ರಿಗಳಿಬ್ಬರೂ ಪರಸ್ಪರ ಮುಖಾ ಮುಖಿಯಾಗುತ್ತಾರಾ? ಮಾತುಕತೆಯಾಡುತ್ತಾರಾ? ಇಂದಿನ ಕಾರ್ಯಕ್ರಮದಲ್ಲಿ ಇಬ್ಬರು ಮಹಾನ್ ನಾಯಕರ ನಡೆ ಹೇಗಿರಲಿದೆ? ಭಾಷಣದಲ್ಲೂ ಸ್ಟಿಂಗ್ ಬಗ್ಗೆ ಪ್ರಸ್ತಾಪವಾಗುತ್ತಾ? ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಇಂದು ಮೈಸೂರು ಸಾಕ್ಷಿಯಾಗಲಿದೆ.
ಇಂದು (ನವೆಂಬರ್ 11) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಒಂದೇ ದಿನ, ಒಂದೇ, ಸಮಯ, ಒಂದೇ ಕಾರ್ಯಕ್ರಮಕ್ಕೆ ಹೋಗುತ್ತಿದ್ದರೂ ಇಬ್ಬರು ನಾಯಕರು ಪ್ರತ್ಯೇಕ ವಿಮಾನ, ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಲಿದ್ದಾರೆ. ಏಕೆಂದರೆ ಇಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಬರೆದಿರುವ 'ವಿಶ್ವಸಂಸ್ಕೃತಿಯ ಮಹಾಯಾನ ಗದ್ಯ ಮಹಾಕಾವ್ಯ' ಕೃತಿ ಲೋಕಾರ್ಪಣೆ ಕಾರ್ಯಕ್ರಮ ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಾಲೇಜಿನಲ್ಲಿ ಬೆಳಗ್ಗೆ 10.50ಕ್ಕೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಡಿಕೆ ಶಿವಕುಮಾರ, ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ಕುತೂಹಲಕ್ಕೆ ಇನ್ನಷ್ಟು ಕಾರಣವಾಗಿದ್ದಂದರೆ ಒಂದೇ ಪಕ್ಷದ ನಾಯಕರಾದರೂ ಪ್ರತ್ಯೇಕ ಪ್ರಯಾಣ ಮಾಡುತ್ತಿರುವುದು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಳಗ್ಗೆ 10.45ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಪ್ರಯಾಣ ಬೆಳೆಸಿದರೆ, ಇತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 10.40ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಬರಲಿದ್ದಾರೆ. ಇಬ್ಬರೂ ನಾಯಕರು ಪ್ರತ್ಯೇಕವಾಗಿ ಮೈಸೂರಿಗೆ ಆಗಮಿಸುತ್ತಿದ್ದರೂ, ಒಂದೇ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ವೀರಪ್ಪ ಮೊಯ್ಲಿ ಕೃತಿ ಲೋಕಾರ್ಪಣೆ ಕಾರ್ಯಕ್ರಮದ ಬಳಿಕ ಸಿದ್ದರಾಮಯ್ಯ ಉತ್ತರನಹಳ್ಳಿ ಬಳಿಯ ಏಳಿಗೆಹುಂಡಿ ಗ್ರಾಮದಲ್ಲಿರುವ ಶ್ರೀ ಕಾರ್ಗಳ್ಳು ಮಹಾಲಕ್ಷ್ಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ 4.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಇತ್ತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸಂಜೆ 4 ಗಂಟೆಗೆ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ನಡೆಯಲಿರುವ 'ಚಲಿಸುವ ಬಂಡೆ' ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ 5.40ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಇತ್ತೀಚೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ, ಅದರ ಬೆನ್ನಲ್ಲೇ ಸ್ಟಿಂಗ್ ಆಪರೇಷನ್ ವಿವಾದ ಬಳಿಕ ಸಿದ್ದರಾಮಯ್ಯ ಡಿಕೆ ಶಿವಕುಮಾರ ನಡುವೆ ಅಂತರ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರು, ಪಕ್ಷ ನಮ್ಮದಾದರೂ ಸರ್ಕಾರ ನಮ್ಮದಲ್ಲ ಎಂಬಂತೆ ಹಿಂದೆ ಹೇಳಿಕೆ ನೀಡಿದ್ದರು. ಹೆಚ್‌ಡಿ ಕುಮಾರಸ್ವಾಮಿ ಅವರು ಕೂಡ ಸಿದ್ದರಾಮಯ್ಯರ ಬೆಂಬಲಕ್ಕೆ ನಿಂತುಕೊಂಡು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಇದರ ಬೆನ್ನಲ್ಲೇ ಇಬ್ಬರೂ ನಾಯಕರು ಒಂದೇ ವೇದಿಕೆ ಹಂಚಿಕೊಳ್ಳುತ್ತಿರುವುದು ಗಮನ ಸೆಳೆದಿದೆ. ಕಾರ್ಯಕ್ರಮದಲ್ಲಿ ಇಬ್ಬರ ನಡುವೆ ಮಾತುಕತೆ ನಡೆಯುತ್ತದೆಯೇ? ಪರಸ್ಪರ ಹೇಗೆ ವರ್ತಿಸಲಿದ್ದಾರೆ? ರಾಜಕೀಯ ಬೆಳವಣಿಗೆಗಳ ಬಗ್ಗೆ ಯಾವುದೇ ಚರ್ಚೆ ನಡೆಯುತ್ತದೆಯೇ? ಎಂಬ ಪ್ರಶ್ನೆಗಳು ಇದೀಗ ಕುತೂಹಲ ಮೂಡಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.