
ಬೆಂಗಳೂರು (ಸೆ.17): ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಂಬಂಧಿಸಿದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸೌಧದಲ್ಲಿ ಮಂಗಳವಾರ ಮಹತ್ವದ ಸಭೆ ನಡೆಸಿದರು. ಬೆಂಗಳೂರು ಮಹಾನಗರದ ಸ್ವಚ್ಛತೆ, ಸುಗಮ ಸಂಚಾರ, ರಸ್ತೆ ಗುಂಡಿ ಮುಚ್ಚುವುದು ಸೇರಿದಂತೆ ಎಲ್ಲ ಸಮಸ್ಯೆಗಳ ಪರಿಹಾರ, ಸಮಗ್ರ ಅಭಿವೃದ್ಧಿಗೆ ಟೊಂಕ ಕಟ್ಟಿ ಕಾರ್ಯನಿರ್ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಉಪಸ್ಥಿತಿಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ, ಜಿಬಿಎ ವ್ಯಾಪ್ತಿಯ ಎಲ್ಲಾ ಐದೂ ಪಾಲಿಕೆಗಳ ಆಯುಕ್ತರು, ನಗರ ಪೊಲೀಸ್ ಆಯುಕ್ತರು, ಸಂಚಾರ ವಿಭಾಗದ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಉಪಮುಖ್ಯಮಂತ್ರಿ ಅವರು ನಗರದ ಅಭಿವೃದ್ಧಿಗೆ ಹಲವು ಸಲಹೆ, ಸೂಚನೆಗಳನ್ನು ನೀಡಿದ್ದಾರೆ.
ಪಾಲಿಕೆಗಳ ಆಯುಕ್ತರು ಪ್ರತಿದಿನ ಬೆಳಗ್ಗೆ ನಗರ ಸಂಚಾರದ ಬಗ್ಗೆ ನನಗೆ ಮಾಹಿತಿ ನೀಡಬೇಕು, ಯಾವುದೇ ಕೆಲಸ ತೆಗೆದುಕೊಂಡರೂ ಗುಣಮಟ್ಟ ಕಾಯ್ದುಕೊಳ್ಳಬೇಕು. ಅಲ್ಲಿಂದ ಇಲ್ಲಿ, ಇಲ್ಲಿಂದ ಅಲ್ಲಿ ಕೆಲಸ ಮಾಡಲಾಗಿದೆ ಎಂದು ಯಾರೂ ಬೋಗಸ್ ಬಿಲ್ ಬರೆಯುವಂತಿಲ್ಲ. ಒಂದೊಮ್ಮೆ ಈ ರೀತಿಯಾದರೆ ಇದಕ್ಕೆಲ್ಲಾ ಅಧಿಕಾರಿಗಳೇ ಹೊಣೆ. ಯಾವುದೇ ಇಂಜಿನಿಯರ್ ಗಳನ್ನು ನಂಬಬೇಡಿ ಎಂದು ಹೇಳಿದ್ದೇನೆ ಎಂದು ಇದೇ ವೇಳೆ ಉಪಮುಖ್ಯಮಂತ್ರಿ ತಿಳಿಸಿದರು.
ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆಗೆ ನ್ಯಾಯಾಲಯ ಆದೇಶ ಮಾಡಿರುವುದು ಆಶ್ಚರ್ಯ ತಂದಿದೆ. ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಮರು ಮತ ಎಣಿಕೆ ನಡೆದರೂ ನಮ್ಮ ಪಕ್ಷದ ಶಾಸಕ ನಂಜೇಗೌಡ ಅವರು ಮತ್ತೆ ಗೆಲ್ಲುವ ವಿಶ್ವಾಸವಿದೆ. ಆದೇಶದ ಪೂರ್ಣ ಮಾಹಿತಿ ಪಡೆದು ಸೂಕ್ತ ನಿರ್ಧಾರ ಮಾಡುತ್ತೇವೆ.
- ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.