
ಬೆಂಗಳೂರು (ಮೇ 30): ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ಅಧ್ಯಾಯ ಆರಂಭವಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (Karnataka New Chief Minister DK Shivakumar) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ, ಹೈಕಮಾಂಡ್ (Congress Highcommand) ಸೂಚನೆಯಂತೆ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಘೋಷಿಸಲಾಗಿದೆ.
ಶನಿವಾರ ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯನ್ನು ಏರ್ಪಡಿಸಲಾಗಿತ್ತು. ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರು ಹಾಜರಿದ್ದರು. ಸಭೆಯ ಆರಂಭದಲ್ಲಿಯೇ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಪ್ರಸ್ತಾಪಿಸಿದರು. ಈ ಪ್ರಸ್ತಾವನೆಯನ್ನು ಕೇಳುತ್ತಿದ್ದಂತೆಯೇ ಸಭೆಯಲ್ಲಿದ್ದ ಶಾಸಕರು ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದರು. ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಎಲ್ಲಾ ಶಾಸಕರು ಡಿ.ಕೆ. ಶಿವಕುಮಾರ್ ಅವರ ಆಯ್ಕೆಯನ್ನು ಅನುಮೋದಿಸಿದರು.
ಸಿದ್ದರಾಮಯ್ಯ ಅವರ ರಾಜೀನಾಮೆ ಬಳಿಕ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಹೈಕಮಾಂಡ್ ಈಗಾಗಲೇ ತೆರೆ ಎಳೆದಿತ್ತು. ಡಿ.ಕೆ. ಶಿವಕುಮಾರ್ ಅವರ ಸಂಘಟನಾ ಶಕ್ತಿ ಮತ್ತು ಪಕ್ಷಕ್ಕೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಎಐಸಿಸಿ ನಾಯಕತ್ವ ಅವರ ಹೆಸರನ್ನು ಸೂಚಿಸಿತ್ತು. ಇಂದು ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಈ ಹೆಸರನ್ನು ಅಧಿಕೃತವಾಗಿ ಮಂಡಿಸುವ ಮೂಲಕ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡಿದರು. ತಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಶಾಸಕರಿಗೆ ಮತ್ತು ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಈ ಸಂದರ್ಭದಲ್ಲಿ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದರು.
ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿ ಮಾಡಲು ರಾಜಭವನಕ್ಕೆ ತೆರಳಲಿದ್ದಾರೆ. ಶಾಸಕಾಂಗ ಪಕ್ಷದ ನಿರ್ಣಯದ ಪತ್ರದೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿ, ತಮಗೆ ಬಹುಮತ ಇರುವ ಬಗ್ಗೆ ಮಾಹಿತಿ ನೀಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಈ ಪ್ರಕ್ರಿಯೆಯು ಮುಗಿದ ಕೂಡಲೇ ರಾಜಭವನದಿಂದ ಅಧಿಕೃತ ಆಹ್ವಾನ ಹೊರಬೀಳಲಿದೆ.
ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಈಗಾಗಲೇ ದಿನಾಂಕ ಮತ್ತು ಸಮಯ ನಿಗದಿಯಾಗಿದೆ. ಬರುವ ಬುಧವಾರ (ಜೂನ್ 3, 2026) ಸಂಜೆ 4.05 ಗಂಟೆಗೆ ಬೆಂಗಳೂರಿನ ಲೋಕಭವನದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ದೆಹಲಿಯ ಹೈಕಮಾಂಡ್ ನಾಯಕರು ಹಾಗೂ ನೆರೆಯ ರಾಜ್ಯಗಳ ಗಣ್ಯರು ಸಾಕ್ಷಿಯಾಗಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.