
ಬೆಳಗಾವಿ (ಡಿ.10): ರಾಜ್ಯಕ್ಕೆ ಅನ್ಯಾಯವಾಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ನಗರದಲ್ಲಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು, ಮೆಕ್ಕೆಜೋಳ, ಸಕ್ಕರೆ, ಎಥೆನಾಲ್ ಸೇರಿದಂತೆ ಪ್ರತಿ ವಿಚಾರದಲ್ಲಿ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನೀಡಬೇಕಾದ ಅನುದಾನ ಸರಿಯಾಗಿ ನೀಡುತ್ತಿಲ್ಲ. ರೈತರಿಗೆ ಸಹಾಯ ಮಾಡಲು ಮಹದಾಯಿ ಯೋಜನೆ ಬಗ್ಗೆ ತೀರ್ಮಾನ ಮಾಡಲು ಇದುವರೆಗೂ ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದರು.
ಮೇಕೆದಾಟು ವಿಚಾರದಲ್ಲಿ ನಮ್ಮ ಹೋರಾಟದಿಂದ ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಕ್ಕಿದೆ. ಒಂದೇ ದಿನದಲ್ಲಿ ಅನುಮತಿ ಕೊಡಿಸುತ್ತೇವೆ ಎಂದು ಹೇಳಿದ್ದರು. ಆದರೆ, ಇನ್ನೂ ಕೊಡಿಸಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಘೋಷಿಸಿದ ₹5,400 ಹಣವನ್ನು ಇದುವರೆಗೂ ಕೊಟ್ಟಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಭೂ ಸಂತ್ರಸ್ತ ರೈತರಿಗೆ ₹76 ಸಾವಿರ ಕೋಟಿ ಪರಿಹಾರ ನೀಡಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ.
ಹೀಗಾಗಿ ಬಿಜೆಪಿಯವರು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು. ಬಿಜೆಪಿಯ ಯಾವೊಬ್ಬ ಸಂಸದರು ಕೇಂದ್ರ ಸರ್ಕಾರದ ಜೊತೆ ಈ ವಿಚಾರವಾಗಿ ಮಾತನಾಡಿಲ್ಲ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ತಿರುಗೇಟು ನೀಡಿದರು. ಸರ್ವಪಕ್ಷ ನಿಯೋಗ ಭೇಟಿ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಡಿ.8ರಂದು ಸಭೆ ಮಾಡಲು ನಾವು ನಿರ್ಧರಿಸಿದ್ದೇವು. ಆದರೆ ಅವರು ಸಮಯದ ಇಕ್ಕಟ್ಟಿದೆ ಎಂದು ನಮಗೆ ಪತ್ರ ಬರೆದರು. ಹೀಗಾಗಿ, ಅವರು ನಾವು ಅವರಿಗೆ ಸಮಯ ನಿಗದಿ ಮಾಡಲು ಹೇಳಿದ್ದು, ಅವರು ಹೇಳಿದ ದಿನ ಸಭೆ ಮಾಡಲು ಸಿದ್ಧ ಇರುವುದಾಗಿ ಅವರು ತಿಳಿಸಿದರು.
ನನ್ನ, ಸಿಎಂ ಮಧ್ಯ ಭಿನ್ನಾಭಿಪ್ರಾಯವಿಲ್ಲ: ನನ್ನ ಹಾಗೂ ಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಮ್ಮಲ್ಲಿ ಈ ಹಿಂದೆಯೂ ಗೊಂದಲವಿಲ್ಲ, ಈಗಲೂ ಇಲ್ಲ, ಮುಂದೆಯೂ ಇರಲ್ಲ. ಅವರು ಯಾವ ರೀತಿ ಹೇಳಿದ್ದಾರೆ ನನಗೆ ಗೊತ್ತಿಲ್ಲ. ನಾನು ಅವರ ಜೊತೆ ಮಾತನಾಡುವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದರು. ಹೈಕಮಾಂಡ್ ನಮ್ಮನ್ನು ಯಾವಾಗ ಕರೆಯುತ್ತದೆ ಎಂಬುದು ನನಗೆ ಗೊತ್ತಿಲ್ಲ. ಅವರು ನನ್ನ ಜೊತೆ ಚರ್ಚೆ ಮಾಡಿರುವ ವಿಚಾರವನ್ನು ನಿಮ್ಮ (ಮಾಧ್ಯಮಗಳ) ಮುಂದೆ ಬಹಿರಂಗಪಡಿಸುವುದಿಲ್ಲ ಎಂದರು.
ಬೆಳಗಾವಿಗೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸ್ವಾಗತಿಸಿದರು. ಶಿವಕುಮಾರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಅವರ ಪರವಾಗಿ ಘೋಷಣೆ ಮೊಳಗಿದವು. ಈ ವೇಳೆ ಅವರ ಬೆಂಬಲಿಗರು ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಎಂದು ಘೋಷಣೆ ಕೂಗಿ ಸ್ವಾಗತಿಸಿದರು. ಬಳಿಕ ಅವರಿಗೆ ಪುಷ್ಪಗುಚ್ಚ ನೀಡಿ ಬರಮಾಡಿಕೊಂಡರು. ಈ ವೇಳೆ ಶಾಸಕ ಆಸಿಫ್ ಸೇಠ್, ಮಾಜಿ ಶಾಸಕ ಶ್ಯಾಮ್ ಘಾಟಗೆ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವಿನಯ ನಾವಲಗಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.