
ಬೆಂಗಳೂರು (ಡಿ.14): ‘ನಾನು ಯಾರೆಂದು ಕೆಲವರಿಗೆ ಗೊತ್ತಿಲ್ಲ ಅಂತ ಕಾಣುತ್ತದೆ. ಬೇಸಿಕ್ ಕಾಮನ್‌ಸೆನ್ಸ್ ಇಟ್ಕೊಂಡು ನನ್ನ ಹತ್ರ ಡೀಲ್ ಮಾಡಬೇಕು. ನನಗೆ ವಾರ್ನ್ ಮಾಡೋದು, ಎಚ್ಚರಿಕೆ ಕೊಡೋದು ನಡೆಯಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಪಾರ್ಟ್‌ಮೆಂಟ್ ಅಸೋಸಿಯೇಷನ್ ಅಧ್ಯಕ್ಷರೊಬ್ಬರಿಗೆ ಬಹಿರಂಗವಾಗಿ ಎಚ್ಚರಿಕೆ ನೀಡಿದ ಘಟನೆ ನಡೆದಿದೆ.
ವಿಧಾನಸೌಧದಲ್ಲಿ ಆಯೋಜಿಸಿದ್ದ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ಪದಾಧಿಕಾರಿಗಳೊಂದಿಗಿನ ಸಭೆಯಲ್ಲಿ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ಒಂದರ ಅಧ್ಯಕ್ಷ ಕಿರಣ್ ಹೆಬ್ಬಾರ್ ಎಂಬುವವರು ಬರೆದ ಪತ್ರವನ್ನು ಬಹಿರಂಗವಾಗಿ ಓದಿದ ಶಿವಕುಮಾರ್ ಅವರು, ಪ್ರಧಾನ ಮಂತ್ರಿ, ಗೃಹ ಸಚಿವರಿಗೆ ಹೆದರದೇ ಜೈಲಿಗೆ ಹೋಗಿ ಬಂದಿದ್ದೇನೆ. ಅವನ್ಯಾರೋ ಹೆಬ್ಬಾರ್ ಎಂಬುವವನಿಗೆ ಹೆದರುತ್ತೇನೆಯೇ? ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ. ಯಾರೇ ಆಗಲಿ ಯಾರ ಜತೆಗೆ ಮಾತನಾಡುತ್ತಿದ್ದೇವೆ ಎಂಬ ಬಗ್ಗೆ ಕನಿಷ್ಠ ಪರಿಜ್ಞಾನ ಇಟ್ಟುಕೊಳ್ಳಬೇಕು. ಯಾವನೇ ಆಗಿರಲಿ, ಸರ್ಕಾರಕ್ಕೆ ಎಚ್ಚರಿಕೆ ನೀಡಲು ಆಗುವುದಿಲ್ಲ ಎಂದು ಕಿಡಿಕಾರಿದರು.
ನಾನು ಇರುವುದು ನಿಮಗಾಗಿ. ನಾನು ನಿಮ್ಮನ್ನು ಕರೆದು ಅಭಿಪ್ರಾಯ ಪಡೆಯುವ ಅಗತ್ಯವಿರಲಿಲ್ಲ. ನಿಮ್ಮ ಮೇಲೆ ಪ್ರೀತಿ- ವಿಶ್ವಾಸವಿಟ್ಟು ಕರೆದಿದ್ದೇವೆ. ‘ನಿಮ್ಮನ್ನು ನೀವು ನಿಯಂತ್ರಿಸಬೇಕಾದರೆ ನಿಮ್ಮ ಮೆದುಳನ್ನು ಪ್ರಯೋಗಿಸಿ, ಬೇರೆಯವರನ್ನು ನಿಯಂತ್ರಿಸಬೇಕಾದರೆ ನಿಮ್ಮ ಹೃದಯವನ್ನು ಪ್ರಯೋಗಿಸಿ’ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದಾರೆ. ನಾನು ನನ್ನ ಹೃದಯದಿಂದ ಜನರ ಮನಸ್ಸು ಗೆದ್ದಿದ್ದೇನೆ. ಸತತ 8 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದೇನೆ. ಕಳೆದ ಚುನಾವಣೆಯಲ್ಲಿ ನಾನು ಪ್ರಚಾರಕ್ಕೆ ಹೋಗಲಿಲ್ಲ. ವಿರೋಧ ಪಕ್ಷದ ನಾಯಕ ಅಶೋಕ್ ನನ್ನ ವಿರುದ್ಧ ಸ್ಪರ್ಧಿಸಿದ್ದರೂ ಜನ ನನ್ನನ್ನು 1.23 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಅಂತರದ ಗೆಲುವು ಎಂದು ತಿಳಿಸಿದರು.
ನಮ್ಮ ಜತೆ ಆಟ ಸಾಧ್ಯವಿಲ್ಲ-ಡಿಕೆಶಿ: ನಿಮ್ಮ ಸೇವೆ ಮಾಡಿದರೆ ನಮಗೆ ಮತ ಹಾಕುತ್ತೀರಿ ಎಂಬುದಷ್ಟೇ ನಮ್ಮ ಆಸೆ. ಅದನ್ನು ಬಿಟ್ಟು ನಿಮ್ಮನ್ನು ಬೇರೆ ಏನು ಕೇಳುತ್ತೇವೆಂದು ಪ್ರಶ್ನಿಸಿದ ಅವರು, ನಾವು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಅಪಾರ್ಟ್‌ಮೆಂಟ್ ನಿವಾಸಿಗಳಿಗೆ 200 ಯುನಿಟ್‌ವರೆಗೂ ಉಚಿತ ವಿದ್ಯುತ್ ನೀಡಿದ್ದೇವೆ. ಈ ಯೋಜನೆ ಜಾರಿ ಅಸಾಧ್ಯ ಎಂದು ಪ್ರಧಾನಿ ಹೇಳಿದರು. ಆದರೀಗ ಬೇರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳೇ ಅವರನ್ನು ಕಾಪಾಡುತ್ತಿದೆ. ಇದನ್ನು ನೀವು ಅರಿಯಬೇಕು. ಎಲ್ಲರನ್ನು ಆಟವಾಡಿಸಿದಂತೆ ನಮ್ಮನ್ನು ಆಟವಾಡಿಸಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಗುಡುಗಿದರು.
ಚುನಾವಣೆಗಳನ್ನು ಹೇಗೆ ನಡೆಸಬೇಕು ಎಂಬುದು ಗೊತ್ತಿದೆ. ಪ್ರತಿ ಅಪಾರ್ಟ್‌ಮೆಂಟ್‌ನಲ್ಲಿ ಯಾರಿಗೆ ಎಷ್ಟು ಮತ ಬೀಳುತ್ತದೆ ಎಂದೂ ಗೊತ್ತಿದೆ. ಆದರೂ ನಾವು ನಿಮ್ಮ ಸೇವೆ ಮಾಡಿ ನಿಮ್ಮ ವಿಶ್ವಾಸ ಗೆಲ್ಲಲು ಬಯಸುತ್ತೇನೆ. ನೀವು ಬಲಿಷ್ಠವಾಗಿದ್ದರೆ, ನಾವು ಬಲಿಷ್ಠ, ನೀವು ದುರ್ಬಲರಾದರೆ, ನಾವು ದುರ್ಬಲ ಎಂದು ಭಾವಿಸಿದ್ದೇನೆ. ನಾನು ನೇರವಾಗಿ, ಕಟುವಾಗಿ ಹಾಗೂ ದಿಟ್ಟವಾಗಿ ಮಾತನಾಡಿದ್ದೇನೆ. ಇದಕ್ಕೆ ಯಾರೂ ಬೇಸರ ಮಾಡಿಕೊಳ್ಳಬೇಡಿ. ಬೆದರಿಸಿದರೆ ನಡೆಯುತ್ತದೆ ಎಂಬ ಭ್ರಮೆ ಬೇಡ ಎಂದರು.
‘ನಮ್ಮಲ್ಲಿ ಬಹುದೊಡ್ಡ ಮತದಾರರ ಸಮೂಹವಿದ್ದು, ಬೆಂಗಳೂರಿನ 1.30 ಕೋಟಿ ಮತದಾರರ ಮೇಲೆ ಪರಿಣಾಮ ಬೀರಬಲ್ಲೆವು. ಸರ್ಕಾರಗಳು ನಮ್ಮನ್ನು ನಿರ್ಲಕ್ಷಿಸಿದ್ದು, ಆಡಳಿತ ಪಕ್ಷ ನಮ್ಮ ಮನವಿ ನಿರ್ಲಕ್ಷಿಸಿದರೆ ಸದ್ಯದಲ್ಲೇ ಜಿಬಿಎ ಚುನಾವಣೆ ಬರುತ್ತಿದೆ’ ಎಂಬ ಎಚ್ಚರಿಕೆ ಸಾಲುಗಳನ್ನು ಹೊಂದಿರುವ ಪತ್ರವನ್ನು ಅಪಾರ್ಟ್‌ಮೆಂಟ್ ಅಸೋಸಿಯೇಷನ್ ಒಂದರ ಅಧ್ಯಕ್ಷ ಕಿರಣ್ ಹೆಬ್ಬಾರ್ ಎಂಬುವವರು ಬರೆದಿದ್ದರು. ಇದನ್ನು ಗಮನಿಸಿದ ಡಿ.ಕೆ.ಶಿವಕುಮಾರ್ ಅವರು ವೇದಿಕೆಯಲ್ಲೇ ಪತ್ರ ಓದಿ ಕಿರಣ್ ಹೆಬ್ಬಾರ್‌ಗೆ ಈ ರೀತಿ ವಾರ್ನಿಂಗ್ ಕೊಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.