
ಬೆಂಗಳೂರು (ಡಿ.15): ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಈ ಕುರಿತು ಪರಿಶೀಲನೆ ನಡೆಸಿ ಅಗತ್ಯ ಬಿದ್ದರೆ ಮೊಟ್ಟೆಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ನಿರ್ದಿಷ್ಟ ಸಂಸ್ಥೆಯೊಂದಕ್ಕೆ ಸೇರಿದ ಕೋಳಿ ಮೊಟ್ಟೆ ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಕಂಡು ಬಂದಿವೆ ಎಂದು ಯುಟ್ಯೂಬ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದೆ.
ಆದರೆ, ಆ ಪರೀಕ್ಷೆ ವರದಿಯ ನೈಜತೆಯನ್ನು ಕೂಡ ಪರಿಶೀಲನೆ ಮಾಡಬೇಕು. ಅದರ ಬಗ್ಗೆ ಪರಿಶೀಲಿಸುವಂತೆ ಇಲಾಖೆ ಆಯುಕ್ತರಿಗೆ ಸೂಚನೆ ನೀಡುತ್ತೇನೆ. ನೈಜತೆ ಕಂಡು ಬಂದರೆ ಬೇರೆ ಮೊಟ್ಟೆಗಳನ್ನು ಪರೀಕ್ಷೆಗೆ ಒಳಪಡಿಸುತ್ತೇವೆ ಎಂದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಕ್ಯಾನ್ಸರ್‌ಕಾರಕ ಅಂಶ ಇದ್ದರೆ ನಾವು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಆದರೆ, ಜನ ಅನಗತ್ಯವಾಗಿ ಆತಂಕಕ್ಕೆ ಒಳಗಾಗುವುದು ಬೇಡ. ಪರೀಕ್ಷೆಗೆ ಒಳಪಡಿಸುವ ಕುರಿತು ಎರಡ್ಮೂರು ದಿನಗಳಲ್ಲಿ ಸೂಕ್ತ ನಿರ್ಧಾರ ಪ್ರಕಟಿಸುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸಭೆಯಲ್ಲಿ ಬಿಜೆಪಿಯ ದೊಡ್ಡನಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಒಂದು ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1,500 ವೈದ್ಯರನ್ನು ನೇಮಿಸಲಾಗಿದೆ. ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ದಿನದ 24 ಗಂಟೆಯೂ ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರು ಲಭ್ಯವಿದ್ದು, ಕಾರ್ಯನಿರ್ವಹಿಸುವಂತೆ ಕ್ರಮ ವಹಿಸಲಾಗುತ್ತಿದೆ. ಇದಕ್ಕಾಗಿ ಸದ್ಯ ತಾಲೂಕು ಆಸ್ಪತ್ರೆಗಳಿಗೆ ಹೆಚ್ಚುವರಿಯಾಗಿ ಒಬ್ಬ ಪ್ರಸೂತಿ ತಜ್ಞರು, ಅನಸ್ತೇಶಿಯಾ ತಜ್ಞರು ಸೇರಿ ಇತರೆ ತಜ್ಞ ವೈದ್ಯರನ್ನು ನೇಮಿಸಲಾಗುತ್ತಿದೆ ಎಂದರು. ಎಲ್ಲೆಲ್ಲಿ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬ ಬಗ್ಗೆ ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳ ಅನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಡಾ.ಹಿಮಾಂಶು ಭೂಷಣ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.