ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ ಸಾಧ್ಯತೆ: ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗದ ಪತ್ರ

Published : Mar 24, 2023, 11:37 AM IST
ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ ಸಾಧ್ಯತೆ: ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗದ ಪತ್ರ

ಸಾರಾಂಶ

ಯಾವುದೇ ಕ್ಷಣದಲ್ಲಿ ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡುವ ಸಾಧ್ಯತೆಯಿದ್ದು, ತುರ್ತು ಕಾರ್ಯಗಳನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗವು ಪತ್ರ ಬರೆದಿದೆ. 

ಬೆಂಗಳೂರು (ಮಾ.24): ಯಾವುದೇ ಕ್ಷಣದಲ್ಲಿ ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡುವ ಸಾಧ್ಯತೆಯಿದ್ದು, ತುರ್ತು ಕಾರ್ಯಗಳನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗವು ಪತ್ರ ಬರೆದಿದೆ. ಹೀಗಾಗಿ ಕರ್ನಾಟಕ ವಿಧಾನಸಭೆ ಚುನಾವಣೆ 2023 ಘೋಷಣೆ ಆದ ಕೂಡಲೇ ಅಗತ್ಯವಾಗಿ ಮತ್ತು ತುರ್ತಾಗಿ ಬಿಬಿಎಂಪಿ ಮತ್ತು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳೊಂದಿಗೆ ಸನ್ನದ್ಧರಾಗಿರಬೇಕು ಎಂಬ ಸೂಚನೆ ಸಂಬಂಧಪಟ್ಟ ಸ್ಥಳೀಯಾಡಳಿತ ಸಂಸ್ಥೆಗಳ ಉನ್ನತಾಧಿಕಾರಿಗಳಿಗೆ ರವಾನೆ ಆಗಿದೆ.

ಮೇ 2ನೇ ವಾರ ವಿಧಾನಸಭೆ ಚುನಾವಣೆ?: ವಿಧಾನಸಭೆಯ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಸಂಪೂರ್ಣ ಸಿದ್ಧತೆಗಳನ್ನು ಈಗಾಲೇ ಕೈಗೊಂಡಿದ್ದು, ಬಹುತೇಕ ಇದೇ ತಿಂಗಳ ಕೊನೆಯ ವಾರದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಮೇ 2ನೇ ವಾರ ಚುನಾವಣೆ ನಡೆವ ನಿರೀಕ್ಷೆಯಿದೆ.

ಅನ್ನದಾತರಿಗೆ ಕುಮಾರಣ್ಣ ಪತ್ರ: ಜಾತಿ, ಧರ್ಮ ಮೀರಿ 1 ಅವಕಾಶಕ್ಕೆ ಮನವಿ

ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ರಾಜ್ಯ ಮುಖ್ಯಚುನಾವಣಾಧಿಕಾರಿ ಕಚೇರಿಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಅಲ್ಲದೇ, ಇತ್ತೀಚೆಗಷ್ಟೇ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ರಾಜ್ಯಕ್ಕೆ ಆಗಮಿಸಿ ಮೂರು ದಿನಗಳ ಸಿದ್ಧತೆಗಳ ಕುರಿತು ಸಂಪೂರ್ಣವಾಗಿ ಪರಿಶೀಲನೆ ನಡೆಸಿದೆ. ದೆಹಲಿಯಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿ ದಿನಾಂಕವನ್ನು ಅಂತಿಮಗೊಳಿಸುವ ಕಾರ್ಯ ನಡೆಯುತ್ತಿದ್ದು, ಇದೇ ತಿಂಗಳ ಕೊನೆಯ ವಾರದಲ್ಲಿ ಅಥವಾ ಏಪ್ರಿಲ್‌ನ ಮೊದಲ ವಾರದಲ್ಲಿ ಅಧಿಕೃತವಾಗಿ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ ಎಂದು ಮೂಲಗಳು ಹೇಳಿವೆ.

ಪ್ರಸಕ್ತ ಸರ್ಕಾರದ ಕಾರ್ಯಾವಧಿ ಮೇ 24ಕ್ಕೆ ಮುಕ್ತಾಯವಾಗುವ ಕಾರಣ 2018ರ ವೇಳಾಪಟ್ಟಿಯಂತೆಯೇ ಈ ಬಾರಿಯೂ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕಳೆದ ಬಾರಿ ಮೇ 12ರಂದು ಮತದಾನ ನಡೆದಿದ್ದು, ಈ ಬಾರಿಯೂ ಮೇ ಎರಡನೇ ವಾರದಲ್ಲಿ ಮತದಾನ ನಡೆಸುವ ನಿರೀಕ್ಷೆ ಇದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಅಂದಾಜಿಸಿದೆ. ಈ ಲೆಕ್ಕಾಚಾರದಲ್ಲಿಯೇ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಏಪ್ರಿಲ್‌ ತಿಂಗಳ ಎರಡನೇ ವಾರದಲ್ಲಿ ಅಧಿಸೂಚನೆ ಹೊರಡಿಸಿ ಏಪ್ರಿಲ್‌ ತಿಂಗಳಾಂತ್ಯ ಅಥವಾ ಮೇ ಮೊದಲ ವಾರದ ವೇಳೆಗೆ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಲು ಆಯೋಗವು ಚಿಂತನೆ ನಡೆಸಿದೆ ಎನ್ನಲಾಗಿದೆ.

ಯಡಿಯೂರಪ್ಪರನ್ನು ಬಿಜೆಪಿ ಹೆದರಿಸುತ್ತಿದೆ: ಡಿ.ಕೆ.ಶಿವಕುಮಾರ್‌

ಈಗಾಗಲೇ ಪಿಯುಸಿ ಪರೀಕ್ಷೆಯು ಆರಂಭಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.31ರಿಂದ ಏ.15ರವರೆಗೆ ನಡೆಯಲಿದೆ. ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಕ್ತಾಯಗೊಳ್ಳುವುದರಿಂದ ಚುನಾವಣೆ ನಡೆಸಲು ಯಾವುದೇ ಸಮಸ್ಯೆಯಾಗುವುದಿಲ್ಲ. ಶಿಕ್ಷಕರು, ಉಪನ್ಯಾಸಕರನ್ನು ಸಹ ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳುವುದಕ್ಕೂ ಯಾವುದೇ ಅಡ್ಡಿಗಳಿರುವುದಿಲ್ಲ ಎಂಬುದು ಆಯೋಗದ ಅಧಿಕಾರಿಗಳ ಲೆಕ್ಕಾಚಾರವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌
ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌