
ಬೆಂಗಳೂರು (ಸೆ.29) : ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು (BY Election) ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಿಗೆ ಶೀಘ್ರದಲ್ಲಿಯೇ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತೇವೆ. ಉಪ ಚುನಾವಣೆಯನ್ನು ನಾನು ಎನ್ನುವುದಕ್ಕಿಂತ ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಬಲಿಷ್ಠವಾದ ಕಾರ್ಯಕರ್ತರ ಪಡೆ, ಬೂತ್ ಮಟ್ಟದಲ್ಲಿಯೂ ಪಕ್ಷದ ಸಂಘಟನೆ ಪ್ರಬಲವಾಗಿರುವುದರಿಂದ ಸಿಂದಗಿ ಮತ್ತು ಹಾನಗಲ್‌ನಲ್ಲಿ ನಮ್ಮ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕೆಂದರೆ ಅಭ್ಯರ್ಥಿ ಬದಲಾವಣೆ ಆಗಲೇಬೇಕು'
ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ಕೋರ್ ಸಮಿತಿಯಲ್ಲಿ ಎರಡು ಕ್ಷೇತ್ರಗಳ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗಿದೆ. ಎರಡು ಕ್ಷೇತ್ರಗಳಿಗೆ ಯಾರನ್ನು ವೀಕ್ಷಕರನ್ನಾಗಿ ನಿಯೋಜಿಸಬೇಕು ಎಂಬುದರ ಕುರಿತು ಸಮಾಲೋಚನೆ ನಡೆಸಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಎರಡು ಕ್ಷೇತ್ರಗಳಿಗೆ ವೀಕ್ಷಕರನ್ನು ಕಳುಹಿಸಿ ಸ್ಥಳೀಯರಿಂದ ಮಾಹಿತಿ ಪಡೆಯುತ್ತಾರೆ. ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಕೆಲಸ ಮಾಡುತ್ತೇವೆ. ಹಾನಗಲ್‌ನಲ್ಲಿ ಮಾಜಿ ಸಚಿವ ಸಿ.ಎಂ.ಉದಾಸಿ ಅವರು ಆರು ಬಾರಿ ಗೆದ್ದು ಸಾಕಷ್ಟುಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹೀಗಾಗಿ ನಮ್ಮ ಗೆಲುವಿಗೆ ಇದು ಸಹಕಾರಿಯಾಗಲಿದೆ. ಅದೇ ರೀತಿ ಸಿಂಧಗಿ ಕ್ಷೇತ್ರದಲ್ಲಿ ಈ ಮೊದಲು ನಮ್ಮ ಪಕ್ಷದ ಅಭ್ಯರ್ಥಿಯೇ ಗೆಲುವು ಸಾಧಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಕೆಲವೇ ಮತಗಳ ಅಂತರದಲ್ಲಿ ಸೋಲುಂಟಾಯಿತು ಎಂದರು.
ಶೀಘ್ರದಲ್ಲಿಯೇ ಪಕ್ಷದ ಮುಖಂಡರು ಮತ್ತೊಮ್ಮೆ ಸಭೆ ಸೇರಿ ಅಭ್ಯರ್ಥಿಗಳ ಹೆಸರನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲಾಗುವುದು. ಮತದಾರರು ಬುದ್ಧಿವಂತರಾಗಿದ್ದು, ಯಾರನ್ನು ಆಯ್ಕೆ ಮಾಡಬೇಕು ಎಮಬುದು ಅವರಿಗೆ ಗೊತ್ತಿದೆ. ಉಪಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು.
ಉಸ್ತುವಾರಿ ನೇಮಕ
ಹಾನಗಲ್ ಹಾಗೂ ಸಿಂದಗಿ (Sindagi) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ (By Election) ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುತ್ತಿದ್ದಂತೆಯೇ ಬಿಜೆಪಿ(BJP), ಸಿಂದಗಿ ವಿಧಾನಸಭೆ ಕ್ಷೇತ್ರಕ್ಕೆ ಉಸ್ತುವಾರಿಯನ್ನ ನೇಮಿಸಿದೆ. ಪರಿಷತ್ ಸದಸ್ಯ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ (Laxman Savadi) ಅವರನ್ನ ಉಸ್ತುವಾರಿಯಾಗಿ ಮಾಡಿದೆ.
ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಗೆ ಬಿಜೆಪಿ ಇಂದು (ಸೆ.28) ಸಂಜೆಯೊಳಗೆ ಉಸ್ತುವಾರಿಯನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ.
ಸಿಂದಗಿ ವಿಧಾನಸಭೆ ಬೈ ಎಲೆಕ್ಷನ್ಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಲಕ್ಷ್ಮಣ ಸವದಿ, ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಗೆ ನಾನು ಬಿಜೆಪಿಯ ಉಸ್ತುವಾರಿ. ನಾನು ಬಿಜೆಪಿಯಿಂದ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇನೆ. ಉಪ-ಚುನಾವಣೆಯನ್ನು ಎದುರಿಸುತ್ತೇನೆ. ಆದ್ರೆ, ನಾನು ಅಭ್ಯರ್ಥಿಯಾಗುವುದಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.