ಎಚ್.ಡಿ.ಕುಮಾರಸ್ವಾಮಿ ಮತ್ತು ಸಿ.ಪಿ.ಯೋಗೇಶ್ವರ್ ಎರಡೂ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನೆಂಟಸ್ಥನ ಬೆಳೆಸಿದ್ದಾರೆ. ಇದರಿಂದ ಉಭಯ ಪಕ್ಷಗಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದು, ಈ ರೀತಿ ರಾಜ್ಯಾದ್ಯಂತ ಮೈತ್ರಿಯಿಂದ ಬೇಸತ್ತಿರುವ ಎಲ್ಲಾ ಕಾರ್ಯಕರ್ತರಿಗೂ ಕಾಂಗ್ರೆಸ್ ಪಕ್ಷಕ್ಕೆ ಮುಕ್ತ ಆಹ್ವಾನ ನೀಡುತ್ತಿದ್ದೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.
ಬೆಂಗಳೂರು (ಫೆ.26) : ‘ಎಚ್.ಡಿ.ಕುಮಾರಸ್ವಾಮಿ ಮತ್ತು ಸಿ.ಪಿ.ಯೋಗೇಶ್ವರ್ ಎರಡೂ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನೆಂಟಸ್ಥನ ಬೆಳೆಸಿದ್ದಾರೆ. ಇದರಿಂದ ಉಭಯ ಪಕ್ಷಗಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದು, ಈ ರೀತಿ ರಾಜ್ಯಾದ್ಯಂತ ಮೈತ್ರಿಯಿಂದ ಬೇಸತ್ತಿರುವ ಎಲ್ಲಾ ಕಾರ್ಯಕರ್ತರಿಗೂ ಕಾಂಗ್ರೆಸ್ ಪಕ್ಷಕ್ಕೆ ಮುಕ್ತ ಆಹ್ವಾನ ನೀಡುತ್ತಿದ್ದೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.
ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚನ್ನಪಟ್ಟಣದ ಬಿಜೆಪಿ ಮುಖಂಡರಾದ ಮಲವೇಗೌಡ ಹಾಗೂ ಇತರೆ ನಾಯಕರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆ ಮಾತ್ರವಲ್ಲದೆ ರಾಜ್ಯಾದ್ಯಂತ ಮೈತ್ರಿಯಿಂದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಬೇಸತ್ತಿದ್ದಾರೆ. ಅಂತಹವರಿಗೆ ನಾನು ಆಹ್ವಾನ ನೀಡುತ್ತಿದ್ದೇನೆ. ನೀವೆಲ್ಲರೂ ಸ್ಥಳೀಯವಾಗಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದವರನ್ನು ಸೇರಿಸಿಕೊಳ್ಳಬೇಕು ಎಂದು ಪಕ್ಷದ ಕಾರ್ಯಕರ್ತರಿಗೂ ಸಲಹೆ ನೀಡಿದರು.
ಯಾರೇ ಒಂದಾದರೂ ಅವರನ್ನು ಧಿಕ್ಕರಿಸಿ ಮತದಾನ ಮಾಡಲು ಚನ್ನಪಟ್ಟಣದ ಕ್ಷೇತ್ರದ ಜನ ಸಿದ್ಧರಿದ್ದಾರೆ. ಈ ಹಿಂದೆ ಸುರೇಶ್ ಅವರು ಮೊದಲ ಬಾರಿಗೆ ಸಂಸತ್ ಚುನಾವಣೆಗೆ ಸ್ಪರ್ಧಿಸಿದಾಗ ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿತ್ತು. ಆಗಲೂ ಈ ಜನ ಅವರ ಮೈತ್ರಿ ಧಿಕ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಸುರೇಶ್ ಅವರನ್ನು 1.31 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿದ್ದರು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುವ ಯೋಗೇಶ್ವರ್ ಹಾಗೂ ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರದಲ್ಲಿ ಈ ಗ್ಯಾರಂಟಿ ಯೋಜನೆ ತೆಗೆದುಕೊಳ್ಳಬೇಡಿ ಎಂದು ತಮ್ಮ ಕಾರ್ಯಕರ್ತರಿಗೆ ಹೇಳಲಿ ನೋಡೋಣ. ಅವರಿಗೆ ಧೈರ್ಯ ಇದ್ದರೆ, ಅವರ ಪಕ್ಷಕ್ಕೆ ಸ್ವಾಭಿಮಾನ ಇದ್ದರೆ ಈ ರೀತಿ ಹೇಳಲಿ ಎಂದು ಸವಾಲು ಹಾಕಿದರು.