2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ 26 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇದು ಜನರ ಸಂಕಲ್ಪ ಶಕ್ತಿಯಾಗಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮ್ಮದೇ ಆದ ಕೊಡುಗೆ ನೀಡಬೇಕಿದೆ ಎಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು(ಜ.28): ಲೋಕಸಭಾ ಸಮರವು ನಮ್ಮೆಲ್ಲರಿಗೆ ಬಹುದೊಡ್ಡ ತಿರುವಿನ ಸತ್ವ ಪರೀಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಶನಿವಾರ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ 26 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇದು ಜನರ ಸಂಕಲ್ಪ ಶಕ್ತಿಯಾಗಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮ್ಮದೇ ಆದ ಕೊಡುಗೆ ನೀಡಬೇಕಿದೆ ಎಂದರು.
ರಾಜ್ಯದ ಜನತೆಯ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಲಹದಲ್ಲಿ ತೊಡಗಿದೆ. ಇವರ ಕಚ್ಚಾಟದಿಂದ ಆಡಳಿತ ಕುಸಿದಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇದರ ನಡುವೆಯೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದುರ್ಮಾರ್ಗದಲ್ಲಿ ಮತ ಗಳಿಸುವ ಕುತಂತ್ರ ನಡೆಸಿದೆ. ಜನರಿಗೆ ವಾಸ್ತವ ಮನವರಿಕೆ ಮಾಡಿಕೊಡುವ ಸವಾಲು ನಮ್ಮ ಮುಂದಿದೆ ಎಂದು ತಿಳಿಸಿದರು.
ಇಂಡಿಯಾ ಮೈತ್ರಿಕೂಟ ಛಿದ್ರವಾಗಿದೆ, ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ: ಬಿಎಸ್‌ವೈ
ಕಾಂಗ್ರೆಸ್ ಸರ್ಕಾರ ಬಗ್ಗೆ ಆಗಲೇ ಜನತೆ ಬೇಸತ್ತು ಹಿಡಿಶಾಪ ಹಾಕುತ್ತಿದ್ದಾರೆ. ಸರ್ಕಾರಕ್ಕೆ ಬರಗಾಲದಲ್ಲಿ ರೈತರ ಕಣ್ಣೀರೊರೆಸಲು ಸಾಧ್ಯವಾಗಿಲ್ಲ. ಅರಾಜಕತೆ ರಾಜ್ಯದಲ್ಲಿ ತಾಂಡವವಾಡುತ್ತಿದೆ. ಇದೆಲ್ಲವನ್ನು ನೋಡುತ್ತಾ ಸುಮ್ಮನಿರಲು ಅಸಾಧ್ಯ. ಜನರ ಪರವಾಗಿ, ರಾಜ್ಯದ ಪರವಾಗಿ ನಿಂತು ಹೋರಾಟ ಮಾಡಬೇಕಿದೆ ಎಂದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಆಗಮಿಸಿದ್ದು ನಮಗೆ ದೊಡ್ಡ ಶಕ್ತಿ ಬಂದಂತಾಗಿದೆ. ಪಕ್ಷಕ್ಕೆ ಮರಳಿರುವುದಕ್ಕೆ ಅವರನ್ನು ಸ್ವಾಗತಿಸುತ್ತೇನೆ ಎಂದು ಹೇಳಿದರು.