
ಬೆಂಗಳೂರು(ಜು.28): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಹಾಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ 1 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ಇಂದು ಹಮ್ಮಿಕೊಂಡಿದ್ದ ‘ಜನೋತ್ಸವ’ ಸಮಾವೇಶವನ್ನ ರದ್ದು ಮಾಡಲಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ.. ರಾಜ್ಯ ಬಿಜೆಪಿ ಸರಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ. ʼಸಾವುಗಳನ್ನೇ ಸಾಧನೆʼಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರಕಾರ ಮುಖ ಉಳಿಸಿಕೊಂಡಿದೆ ಅಂತ ಸರ್ಕಾರಕ್ಕೆ ತಿವಿದಿದ್ದಾರೆ.
ಇಂದು(ಗುರುವಾರ) ಅವರ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿದ ಎಚ್‌ಡಿಕೆ, ನಡುರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರಕಾರ ಬದುಕಿದೆಯಾ? ಸತ್ತಿದೆಯಾ?. ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ. ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ ಅಂತ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಸಿಎಂ ಬೊಮ್ಮಾಯಿ ತುರ್ತು ಸುದ್ದಿಗೋಷ್ಠಿ: ಬಿಜೆಪಿ ಜನೋತ್ಸವ ಕಾರ್ಯಕ್ರಮ ರದ್ದು
ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ?. ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಸರಕಾರ ಮೈಮರೆತಿದ್ದು ಯಾಕೆ? ಅಂತ ಬೊಮ್ಮಾಯಿ ಸರಕಾರಕ್ಕೆ ಪ್ರಶ್ನಿಸಿದ್ದಾರೆ.
ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ. ಶಾಂತಿ, ಸುವ್ಯಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ ಆಗುತ್ತಾರೆ? ನಿರುದ್ಯೋಗವೇ ಇಂಥ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಅಂತ ಬರೆದುಕೊಂಡಿದ್ದಾರೆ.
ಇನ್ನು ಮಂಗಳೂರಿನಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯನ್ನ ಖಂಡಿಸಿದ ರಾಜ್ಯದ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಸ್ವಪಕ್ಷದ ವಿರುದ್ಧವೇ ಸಿಡಿದೆದ್ದು ರಾಜೀನಾಮೆಗೆ ಮುಂದಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.