* ಇಂದಿರಾ ಗಾಂಧಿ, ಮನಮೋಹನ್ ಸಿಂಗ್ ಇದ್ದಾಗ ಎಷ್ಟುಜನರಿಗೆ ಉದ್ಯೋಗ ನೀಡಿದ್ದಾರೆ?
* 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ
* ಕಾಂಗ್ರೆಸ್ ಸಂಪೂರ್ಣವಾಗಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ
ಹುಬ್ಬಳ್ಳಿ(ಜು.13): ದೇಶದಲ್ಲಿ ಕಾಂಗ್ರೆಸ್ ಕ್ಷೀಣಿಸುತ್ತಿದ್ದು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಕನಸು ಕಾಣುತ್ತಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಕನಸು ನನಸಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಮಂಗಳವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಪೂರ್ಣವಾಗಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇತ್ತೀಚೆಗೆ ತೆಲಂಗಾಣ ಪ್ರವಾಸಕ್ಕೆ ಹೋದಾಗ ಅಲ್ಲಿ ಕಾಂಗ್ರೆಸ್ ನಾಯಕರು ಪಕ್ಷವನ್ನು ತೊರೆದು ಬಿಜೆಪಿ ಸೇರುತ್ತಿರುವುದನ್ನು ಗಮನಿಸಿದ್ದೇವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಡುತ್ತಿದ್ದಾರೆ. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಆ ಕನಸು ಯಾವತ್ತು ಸತ್ಯವಾಗಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ನಾಯಕರು ಸಿಎಂ ಸ್ಥಾನ ಪಡೆಯಲು ಏನೇ ಪ್ರಯತ್ನ ಮಾಡಿದರು ಆಗುವುದಿಲ್ಲ ಎಂದರು.
ಅಗ್ನಿಪಥ ಹಿಂಸಾಚಾರಕ್ಕೆ ಕಾಂಗ್ರೆಸ್ ಕುಮ್ಮಕ್ಕು: ಜಗದೀಶ್ ಶೆಟ್ಟರ್
ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯಮಿಗಳಿಗೆ ಪ್ರೋತ್ಸಾಹಿಸುವ ಹಾಗೂ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆ ರೂಪಿಸಿದ್ದಾರೆ. ಆದರೆ, ಇಂದಿರಾ ಗಾಂಧಿ, ಮನಮೋಹನ್ ಸಿಂಗ್ ಇದ್ದಾಗ ಎಷ್ಟುಜನರಿಗೆ ಉದ್ಯೋಗ ನೀಡಿದ್ದಾರೆ ? ಎನ್ನುವುದನ್ನು ಅವಲೋಕನ ಮಾಡಬೇಕು. ಅದನ್ನು ಬಿಟ್ಟು ವಿರೋಧ ಪಕ್ಷದ ನಾಯಕನಾಗಿದ್ದೇನೆ ಎಂದು ವ್ಯರ್ಥ ಟೀಕೆ ಮಾಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.