ರಾಜ್ಯದ ಕಾಂಗ್ರೆಸ್ ಸರ್ಕಾರ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಆಶಯಗಳನ್ನು ಸಾಕಾರಗೊಳಿಸಿದೆ ಎನ್ನುವುದಕ್ಕೆ ಬಡವರ ಪರವಾದ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನವೇ ಸಾಕ್ಷಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.
ಬಂಟ್ವಾಳ (ಮಾ.10): ರಾಜ್ಯದ ಕಾಂಗ್ರೆಸ್ ಸರ್ಕಾರ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಆಶಯಗಳನ್ನು ಸಾಕಾರಗೊಳಿಸಿದೆ ಎನ್ನುವುದಕ್ಕೆ ಬಡವರ ಪರವಾದ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನವೇ ಸಾಕ್ಷಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು. ಬಿ.ಸಿ.ರೋಡಿನ ಸರ್ಕಲ್ ಬಳಿ ಇರುವ ಗೋಲ್ಡನ್ ಮೈದಾನದಲ್ಲಿ ಸಂಜೆ ಆಯೋಜಿಸಲಾದ ಬಂಟ್ವಾಳ ತಾಲೂಕಿನ ಗ್ಯಾರಂಟಿ ಫಲಾನುಭವಿಗಳ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಎಲ್ಲ ಬಡವರಿಗೆ ಶಿಕ್ಷಣ, ಆಹಾರ, ಆರೋಗ್ಯ ಸಿಗಬೇಕು ಎಂಬ ಯೋಚನೆಯಿಂದ ಸರ್ಕಾರ ಯೋಜನೆ ಜಾರಿ ಮಾಡಿದೆಯಾದರೂ, ನೂರಾರು ಟೀಕೆ ಟಿಪ್ಪಣಿಗಳನ್ನು ಎದುರಿಸಬೇಕಾಯಿತು.
ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ಜನರು ಬೇವರು ಸುರಿಸಿದ ಹಣ ಮತ್ತೆ ಜನರಿಗೆ ಸಿಗಬೇಕು ಎಂಬ ಯೋಚನೆಯಿಂದ, ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯ ಮಾತಿನಂತೆ ಎಲ್ಲ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇವೆ, ನುಡಿದಂತೆ ನಡೆದಿದ್ದೇವೆ ಎಂದರು. ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ ಭಂಡಾರಿ ಮಾತನಾಡಿದರು. ವೇದಿಕೆಯಲ್ಲಿ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಾಜಿ ಸಚಿವ ಬಿ.ರಮಾನಾಥ ರೈ, ಜಿ.ಪಂ. ಸಿ.ಇ.ಒ. ಡಾ.ಆನಂದ್, ಸಹಾಯಕ ಆಯುಕ್ತ ರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಉಸ್ಮಾನ್ ಉಪಸ್ಥಿತರಿದ್ದರು.
ಬಿಜೆಪಿ-ಜೆಡಿಎಸ್‌ನವರಿಗೆ ಅಧಿಕಾರ ಸಿಕ್ಕರೂ ಏನೂ ಮಾಡಲಿಲ್ಲ: ಡಿ.ಕೆ.ಶಿವಕುಮಾರ್
ಬಂಟ್ವಾಳ ಸಿಡಿಪಿಒ ಮುಮ್ತಾಜ್, ಕೌಶಲ್ಯ ಅಭಿವೃದ್ಧಿ ಯೋಜನೆ ಇಲಾಖೆ ಅಧಿಕಾರಿ ಪ್ರದೀಪ್ ಡಿ.ಸೋಜ, ಮೆಸ್ಕಾಂ ಎ.ಇ.ಇ.ನಾರಾಯಣ ಭಟ್, ಕೆ.ಎಸ್.ಆರ್.ಟಿ.ಸಿ.ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ್ ಶೆಟ್ಟಿ, ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ವಿವಿಧ ಗ್ಯಾರಂಟಿ ಯೋಜನೆ ಹಾಗೂ ವಿವಿಧ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು. ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಸ್ವಾಗತಿಸಿದರು. ಬಂಟ್ವಾಳ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ವಂದಿಸಿದರು. ಬಾಲಕೃಷ್ಣ ಕೊಡಾಜೆ ಮತ್ತು ರಾಜೀವ ಕಕ್ಯಪದವು ಕಾರ್ಯಕ್ರಮ ನಿರೂಪಿಸಿದರು.