
ಬೆಂಗಳೂರು, (ಏ.24): ಇದೇ ಮೇ ತಿಂಗಳ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರಕಾರ ತೆಗೆದುಕೊಂಡಿರುವ ತೀರ್ಮಾನದಂತೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರುವರೆ ಕೋಟಿ ಜನತೆಗೂ ಉಚಿತವಾಗಿ ಲಸಿಕೆಯನ್ನು ನೀಡುವ ಮೂಲಕ ನೆರವಿಗೆ ಧಾವಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್‌ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಈಗ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ನನ್ನ ಕೋರಿಕೆ ಎಂದಿದ್ದಾರೆ.
ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಆದ್ರೂ ಸಾರ್ವಜನಿಕರ ಭೇಟಿಗೆ ಅವಕಾಶ ಇಲ್ಲ
ಈಗಿನ ಸಂದರ್ಭದಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರಕಾರವೇ ಮುಂದೆ ಬಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಪ್ರಕಟಿಸಬೇಕೆಂಬುದು ಆಗ್ರಹಿಸಿದ್ದಾರೆ.
ಸುಮಾರು ಒಂದು ಕೋಟಿ ಡೋಸ್ ಲಸಿಕೆ ಕೊಳ್ಳಲು 400 ಕೋಟಿ ರೂ ಮೀಸಲಿಡಲಾಗಿದೆ. ಸರಿಸುಮಾರು 2.50 ಲಕ್ಷ ಕೋಟಿ ರೂ. ಬಜೆಟ್ ಮಂಡನೆ ಮಾಡುವ ಸರಕಾರಕ್ಕೆ ಕನಿಷ್ಠ ಪಕ್ಷ 2 ಸಾವಿರ ಕೋಟಿ ರೂ. ಹಣವನ್ನು ಲಸಿಕೆ ಖರೀದಿ ಮಾಡಲು ಮೀಸಲಿಡುವುದರಿಂದ ಬೊಕ್ಕಸಕ್ಕೆ ಭಾರೀ ಹೊರೆಯಾಗದು. ಬಡವ-ಬಲ್ಲಿದನೆಂಬ ತಾರತಮ್ಯ ತೋರದೆ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಎಚ್ ಡಿಕೆ ಒತ್ತಾಯಿಸಿದರು.
ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.