ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ಬೆಳಗಾವಿಯಲ್ಲಿ ಆಗಸ್ಟ್ 17 ಅಥವಾ 18ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು (ಜೂ.09): ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ಬೆಳಗಾವಿಯಲ್ಲಿ ಆಗಸ್ಟ್ 17 ಅಥವಾ 18ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜೂ.2ರಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಆ.15ರಂದು ಸ್ವಾತಂತ್ರ್ಯ ದಿನಾಚರಣೆ ದಿನ ಗೃಹಲಕ್ಷ್ಮೀ ಯೋಜನೆಗೆ ಫಲಾನುಭವಿಗಳ ಖಾತೆಗೆ ಹಣ ಬೀಳಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸ್ವಾತಂತ್ರ್ಯ ದಿನಾಚರಣೆ ದಿನ ಅತ್ತ ರಾಷ್ಟ್ರಧ್ವಜ ಹಾರುತ್ತಿದ್ದಂತೆ ಇತ್ತ ಗೃಹಲಕ್ಷ್ಮೀ ಹಣ ಖಾತೆಗೆ ಬೀಳಲಿದೆ ಎಂದಿದ್ದರು.
ಆದರೆ, ಬೇರೆ ಬೇರೆ ಕಾರಣಗಳಿಂದಾಗಿ ಯೋಜನೆಗೆ ಚಾಲನೆ ನೀಡುವ ದಿನವನ್ನು ಬದಲಿಸುವ ಬಗ್ಗೆ ಚರ್ಚಿಸಲಾಗಿದೆ. ಗುರುವಾರ ಬೆಂಗಳೂರಿನ ಕೆಪಿಟಿಸಿಎಲ್ ಶಕ್ತಿ ಭವನದಲ್ಲಿ ಗೃಹಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿ ಚರ್ಚಿಸಿದರು. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 15ರಿಂದ ಪ್ರಾರಂಭಿಸಬೇಕು. ಈ ಯೋಜನೆಗೆ ಆನ್‌ಲೈನ್‌ನಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು. ಅಂತೆಯೇ ನಾಡಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿವರಾಮ ಕಾರಂತ ಲೇಔಟ್‌ಗೆ ಜಾಗ ಕೊಟ್ಟವರು, ಬಿಡಿಎಗೂ ಲಾಭ ಆಗುವಂತೆ ಕ್ರಮ: ಡಿಕೆಶಿ
ಅರ್ಜಿದಾರರು ರೇಷನ್ ಕಾರ್ಡ್ ಸಂಖ್ಯೆ, ಯಜಮಾನಿಯ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಆಧಾರ್ ಸಂಯೋಜನೆಯಾಗಿರುವ ಬ್ಯಾಂಕ್ ಖಾತೆಯ ವಿವರವನ್ನು ಒದಗಿಸಬೇಕು. ಈ ದಾಖಲೆಗಳ ಪ್ರತಿಗಳನ್ನು ಆಫ್‌ಲೈನ್ ಅರ್ಜಿಗಳೊಂದಿಗೂ ಸಲ್ಲಿಸಬಹುದು. ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್ ಖಾತೆಗೆ ನೆರವಿನ ಮೊತ್ತ ಜಮೆ ಆಗಲಿದೆ. ಈ ಯೋಜನೆಯು ರಾಜ್ಯದ ಶೇ.85ಕ್ಕೂ ಹೆಚ್ಚು ಕುಟುಂಬಗಳನ್ನು ತಲುಪಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಪಾವತಿದಾರರಲ್ಲದ ಎಪಿಎಲ್ ಕಾರ್ಡುದಾರರಿಗೂ ಈ ಸೌಲಭ್ಯ ನೀಡಲು ನಿರ್ಧರಿಸಲಾಗಿದೆ.
ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾಜ್‌ರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ ಸೇರಿದಂತೆ ಹಲವರು ಹಾಜರಿದ್ದರು.
ಹಜ್ ಭವನಕ್ಕೆ ಸಿದ್ದರಾಮಯ್ಯ 5000 ಕೋಟಿ ನೀಡಿಲ್ಲ: ಜಮೀರ್ ಅಹಮದ್ ಖಾನ್
ನೀವು ನೋಡಿದ ಗೃಹಲಕ್ಷ್ಮೀ ಅರ್ಜಿ ನಕಲಿ!: ಗೃಹ ಲಕ್ಷ್ಮೀ ಯೋಜನೆಗೆ ಪ್ರತ್ಯೇಕ ಲೋಗೋ ಸಿದ್ಧಪಡಿಸಿ ಅಧಿಕೃತವಾಗಿ ಅರ್ಜಿ ನಮೂನೆ ಬಿಡುಗಡೆ ಮಾಡಲಾಗುವುದು. ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಅರ್ಜಿ ನಮೂನೆ ನಕಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಡಾ.ಎನ್. ಮಂಜುಳಾ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.