
ಚನ್ನಪಟ್ಟಣ (ನ.11): ರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆಯನ್ನು ದಿವಾಳಿ ಎಬ್ಬಿಸಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣವಿಲ್ಲ, ಆದರೆ ಉಪಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪಿಸಿದರು.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಸುಳ್ಳೇರಿಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಅಪರಿಮಿತವಾಗಿ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು. ಈ ಸರ್ಕಾರ ದಿವಾಳಿಯಾಗಿದ್ದು, ಚುನಾವಣೆ ಮುಗಿದ ಮೇಲೆ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ. ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದುಕೊಂಡು ಹೋಗಿದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚೋಕೆ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚನ್ನಪಟ್ಟಣಕ್ಕೆ ಯಾರು ಭಗೀರಥ?: ನಿಖಿಲ್ ಅವರನ್ನು ವಿಧಾನಸೌಧಕ್ಕೆ ಕಳಿಸಿ. ಆ ಹುಡುಗ ನಿಮ್ಮ ಪರವಾಗಿ ದನಿ ಎತ್ತುತ್ತಾನೆ. ಇದರಲ್ಲಿ ನಿಮಗೆ ಯಾವುದೇ ಸಂಶಯ ಬೇಡ. ನಾನು ಒಬ್ಬ ರೈತನ ಮಗ, ನೀವು ರೈತನ ಮಕ್ಕಳು. ಇಗ್ಗಲೂರು ಅಣೆಕಟ್ಟೆಯನ್ನು ದೇವೇಗೌಡರು ಕಟ್ಟಿಸಿದರು. 17 ಕೆರಗಳಿಗೆ ನೀರು ಹರಿಸಿದ್ದ ವ್ಯಕ್ತಿಯನ್ನು ಭಗೀರಥ ಅಂತಾರೆ. ಈ ಅಣೆಕಟ್ಟು ಕಟ್ಟಿಲ್ಲ ಅಂದರೆ ನೀರು ಹರಿಸೋಕೆ ಸಾಧ್ಯ ಆಗುತ್ತಿತ್ತಾ? ಎಂದು ಪ್ರಶ್ನೆ ಮಾಡಿದರು.
ನಿಖಿಲ್‌ನ ಗೆಲ್ಲಿಸಿದ್ರೆ ಮೇಕೆದಾಟು ಯೋಜನೆ ಕೇಳ್ಬಹುದು: ಎಚ್.ಡಿ.ದೇವೇಗೌಡ
ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರು 1600 ಕೋಟಿಯಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈಗಿರುವ ಸರ್ಕಾರ ಸಣ್ಣಪುಟ್ಟ ಕೆಲಸ ಮಾಡುತ್ತಿದೆ. ಪ್ರತಿ ಗ್ರಾಮಕ್ಕೆ ನೀರಾವರಿ ಸೌಲಭ್ಯ ಕೊಡಬೇಕಾದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಇಷ್ಟು ಹಣವನ್ನು ಕ್ಷೇತ್ರಕ್ಕೆ ಕೊಟ್ಟರು. ರಾಷ್ಟ್ರದ ಹಿತದೃಷ್ಟಿಯಿಂದ, ಮೋದಿ ಅವರ ಒತ್ತಾಸೆಯಿಂದ ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ ಎಂದು ದೇವೇಗೌಡ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.