
ಮೈಸೂರು (ಜು.20): ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇರುವುದರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಿದೆ. ನಮ್ಮ ಗ್ಯಾರಂಟಿ ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಹಾರಾಜ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ. ಈ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿಗಳಿಂದ ಹಿಡಿದು ರಾಜ್ಯದ ಬಿಜೆಪಿ ನಾಯಕರವರೆಗೂ ಎಲ್ಲರೂ ಟೀಕಿಸಿದರು. ನಂತರ ನಡೆದ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಹರಿಯಾಣ ಸೇರಿದಂತೆ ಬೇರೆ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗಿಂತ ಮೊದಲೇ ಗ್ಯಾರಂಟಿ ಯೋಜನೆ ಘೋಷಿಸಿದರು. ಇತ್ತೀಚೆಗೆ ಬಿಹಾರದಲ್ಲೂ ನಮ್ಮದೇ ಗ್ಯಾರಂಟಿ ಯೋಜನೆ ನಕಲು ಮಾಡಿದ್ದಾರೆ ಎಂದು ಟೀಕಿಸಿದರು. ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು.
ನಾವು ಮಾಡಿದ ಕೆಲಸಗಳು ಜನರ ಕಣ್ಣಿಗೆ ಕಾಣುತ್ತಿವೆ. ನಾವು ಇಲ್ಲಿಗೆ ಜನರಿಂದ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ. ನಿಮ್ಮ ಋಣ ತೀರಿಸಲು ಬಂದಿದ್ದೇವೆ ಎಂದರು. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರುವ ಕಾರಣ ಜನರ ಬದುಕಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಆ ಮೂಲಕ ರಾಜ್ಯದ ಜನರ ಋಣ ತೀರಿಸಲಾಗುತ್ತಿದೆ ಎಂದರು.
ನಮ್ಮ ಸರ್ಕಾರ ಬಂದ ನಂತರ ನಾನು ಹಾಗೂ ಸಿದ್ದರಾಮಯ್ಯ ಅವರು ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಿ ಐದು ವರ್ಷದ ಗೃಹಲಕ್ಷ್ಮೀ ಯೋಜನೆ ಹಣವನ್ನು ತಾಯಿಯ ಪಾದಕ್ಕೆ ಅರ್ಪಿಸಿ ಆಶೀರ್ವಾದ ಪಡೆದೆವು ಎಂದು ಅವರು ಸ್ಮರಿಸಿದರು. ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ನಡೆಸಿದರು. ನಮ್ಮ ರಾಜ್ಯದಲ್ಲಿ ರಾಹುಲ್ ಗಾಂಧಿ ಯಾತ್ರೆ ನಡೆಸಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದರು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.