
ಬೆಂಗಳೂರು, (ಸೆ.29): ಬೆಂಗಳೂರು ಉಗ್ರರ ಕೇಂದ್ರವಾಗಿದೆ ಎಂಬ ಹೇಳಿಕೆಗೆ ಬಿಜೆಪಿ ನಾಯಕರು ಕ್ಷಮೆ ಕೇಳಿಸಬೇಕೆಮದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು ಉಗ್ರ ಚಟುವಟಿಕೆಗಳ ಕೇಂದ್ರಸ್ಥಾನವಾಗುತ್ತಿದೆ. ಉಗ್ರಗಾಮಿ ಕೃತ್ಯಗಳ, ಸ್ಲೀಪರ್ ಸೆಲ್ ಕೇಂದ್ರವಾಗಿ ಪರಿಣಮಿಸುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ನೀಡಿದ್ದರು. ಈ ಬಗ್ಗೆ ಸರಣಿ ಟ್ವೀಟ್ಗಳ ಮೂಲಕ, ತೇಜಸ್ವಿ ಸೂರ್ಯ ಅವರ ಹೆಸರು ಉಲ್ಲೇಖಿಸದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಮಿತ್ ಶಾ ಭೇಟಿಯಾದ ತೇಜಸ್ವಿ ಸೂರ್ಯ: ಮಹತ್ವದ ಚರ್ಚೆ..!
ಬೆಂಗಳೂರು ಉಗ್ರರ ಕೇಂದ್ರವಾಗುತ್ತಿದೆ ಎಂದು ಬಿಜೆಪಿಯೊಳಗಿನ ಕೆಲವು ಅಪ್ರಬುದ್ಧರು ಹೇಳಿಕೆ ನೀಡುವ ಮೂಲಕ ಬೆಂಗಳೂರಿಗೆ ಅಪಮಾನ ಮಾಡುತ್ತಿದ್ದಾರೆ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೆ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮಗಳ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು ಎಂದಿದ್ದಾರೆ.
ಡಿಜೆ ಹಳ್ಳಿ ಗಲಭೆಯಲ್ಲಿ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲವರು ಸಿಕ್ಕಿಬಿದ್ದಿದ್ದರು. ಒಪ್ಪಿಕೊಳ್ಳೋಣ..ಆದರೆ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕೇ ಹೊರತು, ಬೆಂಗಳೂರಿನ ವಿರುದ್ಧ ಇರಬಾರದು. ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಟೀಕೆ ಸರಿಯಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು ಎಂದು ಕಿಡಿಕಾರಿದ್ದಾರೆ.
ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು 4 ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು ಎಂದು ಒತ್ತಾಯಿಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.