
ಕಮತಗಿ (ಏ.07): ಈ ನಾಡಿನ ಜನತೆಗಾಗಿ ಬಿಜೆಪಿ ಜೆಡಿಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಮತ್ತು ಬಿ.ಎಸ್.ಯಡಿಯೂರಪ್ಪನವರು ಸೇರಿಕೊಂಡು ಸಾಕಷ್ಟು ಕಾರ್ಯಕ್ರಮ ನೀಡಿದ್ದೇವೆ. ಆದರೆ ಅವುಗಳ ಕುರಿತು ಪ್ರತಿ ದಿನ ಜನರ ಮುಂದೆ ಹೇಳುವುದಕ್ಕೆ ಹೋಗಿಲ್ಲ. ಅದು ನಮ್ಮ ಕರ್ತವ್ಯ. ಕಾಂಗ್ರೆಸ್‌ನವರು ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳ ಕುರಿತು ಪ್ರತಿ ದಿನ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಪಟ್ಟಣದಲ್ಲಿನ ಬಸ್ ನಿಲ್ದಾಣದ ಹತ್ತಿರದ ಆವರಣದಲ್ಲಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ, ನುಡಿದಂತೆ ನಡೆದಿದ್ದೇವೆ ಎಂದು ಹೇಳುವುದನ್ನು ಬಿಟ್ಟರೆ ಇನ್ಯಾವುದೇ ಬಡವರ ಪರವಾದ ಯೋಜನೆ ಜಾರಿ ಬಗ್ಗೆ ಎಲ್ಲಿಯೂ ಹೇಳಿಲ್ಲ. ರಾಜ್ಯದ ಅನೇಕ ಕಡೆ ಆಲಿಕಲ್ಲು ಮಳೆಯಿಂದ ದ್ರಾಕ್ಷಿ, ದಾಳಿಂಬೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಅವರ ಜಮೀನುಗಳಿಗೆ ತೆರಳಿ ಸಾಂತ್ವನ ಹೇಳದ ಮುಖಮಂತ್ರಿಗಳು, ಐದು ದಿನಗಳಿಂದ ಪ್ರಚಾರದಲ್ಲಿ ಬ್ಯುಜಿಯಾಗಿದ್ದಾರೆ ಎಂದು ಟೀಕಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ರಾಜ್ಯದ ಜನರಿಗೆ, ರೈತರಿಗೆ, ನೇಕಾರರಿಗೆ ಕೊಟ್ಟ ಭರವಸೆಯಂತೆ ಕೆಲಸ ಮಾಡಿದ್ದರೆ ಇವತ್ತು ಮನೆ ಮನೆಗಳಿಗೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ. ನಮ್ಮ ಸರಕಾರದ ಅವಧಿಯಲ್ಲಿ ನೇಕಾರರು ಹಾಗೂ ರೈತರಿಗೆ ಜಾರಿಗೆ ತಂದಿದ್ದ ಯೋಜನೆಗಳು ಹಾಗೂ ಭಾಗ್ಯಲಕ್ಷ್ಮೀ ಯೋಜನೆ ಬಂದ್ ಮಾಡಿದ್ದೀರಿ. ತಾವು ಇಲ್ಲೇ 3-4 ದಿನ ಉಳಿದರೂ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ₹10 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ, ಮಲ್ಲೇಶ ಬಾಬು, ರಾಜ್ಯಸಭಾ ಸದಸ್ಯ ನಾರಾಯಣಸಾಬ ಬಾಂಡಗೆ, ಶಾಸಕ ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ಸಿ.ಸಿ. ಪಾಟೀಲ, ಜನಾರರ್ದನರೆಡ್ಡಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ, ಮಾಜಿ ಸಂಸದ ರಮೇಶ ಕತ್ತಿ, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ, ಎಂ.ಡಿ. ಲಕ್ಷ್ಮೀನಾರಾಯಣ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.