
ವಿಜಯಪುರ (ಮೇ.24): ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒಬ್ಬ ಮೆಂಟಲ್. ಅವರ ಮಾನಸಿಕ ಆರೋಗ್ಯ ಹದಗೆಟ್ಟಿರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹರಿಹಾಯ್ದಿದ್ದಾರೆ. ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆಯ ಪ್ರಕರಣದ ಮಾಹಿತಿಯನ್ನು ಪ್ರಭಾವಿ ವ್ಯಕ್ತಿ, ಮಹಾನಾಯಕಯೊಬ್ಬರು ನೀಡಿದ್ದಾರೆ ಎಂದಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಕ್ಕೆ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಅವರಿಗೆ ತಲೆ ಕೆಟ್ಟು ಹೋಗಿದೆ. ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ನವ ದೆಹಲಿಯಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ಡಿಕೆಶಿ ಅವರ ಹೆಸರು ಹೇಳದೆ ಸಚಿವ ಡಾ। ಜಿ.ಪರಮೇಶ್ವರ್ ಅವರ ವಿರುದ್ಧ ಅವರದ್ದೇ ಪಕ್ಷದ ಪ್ರಭಾವಿಯೊಬ್ಬರು ಷಡ್ಯಂತ್ರ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಚಿನ್ನ ಅಕ್ರಮ ಸಾಗಣೆಯಲ್ಲಿ ಬಂಧನ ಆಗಿರುವ ನಟಿ ರನ್ಯಾ ರಾವ್‌ರನ್ನು ಹಿಡಿದುಕೊಟ್ಟಿದ್ದೇ ಪ್ರಭಾವಿ ನಾಯಕರು ಎಂದು ದೂರಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಎಚ್.ಡಿ.ಕುಮಾರಸ್ವಾಮಿ ಮೆಂಟಲ್, ಮಾನಸಿಕ ಆರೋಗ್ಯ ಹದಗೆಟ್ಟಿರುವ ವ್ಯಕ್ತಿ ಎಂದು ದೂರಿದರು.
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ: ಬಿಜೆಪಿಯವರು ಜನರ ಭಾವನೆಗಳ ಮೇಲೆ ರಾಜಕೀಯ ಮಾಡುತ್ತಾರೆ. ಆದರೆ ಕಾಂಗ್ರೆಸ್‌ನವರು ಜನರ ಬದುಕಿನ ಮೇಲೆ ರಾಜಕೀಯ ಮಾಡುತ್ತೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಾದಾಗ ಬಿಜೆಪಿಯವರು ಆಕ್ರೋಶ ವ್ಯಕ್ತಪಡಿಸಲಿಲ್ಲ. ಈಗ ಕಾಂಗ್ರೆಸ್ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರೈತರಿಗಾಗಿ ಹಾಲಿನ ಬೆಲೆ ಹೆಚ್ಚಳ ಮಾಡಿದ್ದೇವೆ. ಈ ಹಣವನ್ನು ಸರ್ಕಾರ ಏನಾದರೂ ತೆಗೆದುಕೊಂಡಿದೆಯೇ ಎಂದು ಪ್ರಶ್ನಿಸಿದರು. ಆ ಹಣವನ್ನು ರೈತರಿಗೆ ನೀಡಿದ್ದೇವೆ. ಬಿಜೆಪಿಯವರು ಯಾವಾಗ ನಮ್ಮ ಮೇಲೆ ಆಕ್ರೋಶ ವ್ಯಕ್ತಪಡಿಸಿದರೋ ಅದೇ ದಿನ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿತು.
ಅಧಿಕಾರದಲ್ಲಿ ಇರುವ ನಾವು ನಿಮ್ಮ ನೆರವಿಗೆ ನಿಲ್ಲಬೇಕೆ ಹೊರತು ಪಿಕ್ ಪಾಕೆಟ್ ಮಾಡಲು ಅಲ್ಲ ಎಂದರು. ನಾವು ಅಧಿಕಾರಕ್ಕೆ ಬರುವ ಮುಂಚೆ ಆಶ್ವಾಸನೆ ಕೊಟ್ಟ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದೇವೆ. ಬೆಲೆ ಏರಿಕೆಯಿಂದ ತತ್ತರಿಸಿದ್ದ ನಿಮಗೆ ನಾವು ಆಸರೆಯಾಗಿ ನಿಂತು ಆಧಾರವಾಗಿದ್ದೇವೆ. ಕೇಂದ್ರ ಸರ್ಕಾರ ನಮ್ಮ ರಾಜ್ಯದಿಂದ ಹೋದ ತೆರಿಗೆಯಲ್ಲಿ ಕೇವಲ ಶೇ.13ರಷ್ಟನ್ನು ಮಾತ್ರ ವಾಪಸ್ ಕೊಡುತ್ತಿದೆ. ಆದರೂ ನಾವು ₹4 ಲಕ್ಷ ಕೋಟಿಗೂ ಅಧಿಕ ಗಾತ್ರದ ಬಜೆಟ್ ಅನ್ನು ರಾಜ್ಯದ ಅಭಿವೃದ್ಧಿಗಾಗಿ ಮಂಡನೆ ಮಾಡಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.