
ಮದ್ದೂರು (ಮಾ.08): ಶಾಸಕ ಕೆ.ಎಂ.ಉದಯ್ ನನ್ನ ಮೇಲೆ ವ್ಯಕ್ತಿಗತ ಟೀಕೆ, ಆರೋಪಕ್ಕೆ ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಪಟ್ಟಣದ ಲೀಲಾವತಿ ಬಡಾವಣೆಯ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನಿವಾಸದಲ್ಲಿ ನಡೆದ ಉಪಾಹಾರ ಕೂಟದಲ್ಲಿ ಪಾಲ್ಗೊಂಡ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜಕಾರಣದಲ್ಲಿ ಆರೋಪ, ಪ್ರತ್ಯಾರೋಪಗಳು ಮತ್ತು ಟೀಕೆಗಳು ಸಹಜ. ಆದರೆ, ಶಾಸಕ ಉದಯ್ ನನ್ನನ್ನು ವ್ಯಕ್ತಿಗತವಾಗಿ ಟೀಕೆ ಮಾಡುತ್ತಿದ್ದಾರೆ. ಈ ಎಲ್ಲವನ್ನೂ ಕ್ಷೇತ್ರದ ಜನತೆ ಗಮನಿಸುತ್ತಿದ್ದಾರೆ ಎಂದರು. ಅಭಿವೃದ್ಧಿ ಎನ್ನುವುದು ಒಬ್ಬರಿಂದ ಮಾಡಲು ಸಾಧ್ಯವಿಲ್ಲ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು. ನಾನು ಮಂಡ್ಯ ಜಿಲ್ಲೆಗೆ ಕಾರ್ಖಾನೆಗಳನ್ನು ತರಲು ಸಿದ್ಧನಿದ್ದೇನೆ. ಇದಕ್ಕೆ ಭೂಮಿ ಅಗತ್ಯವಿದೆ, ಇಂಥ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿದಾಗ ಮಾತ್ರ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಮದ್ದೂರು ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ ಗ್ರಾಪಂ ಸೇರ್ಪಡೆ ಮಾಡುವುದನ್ನು ವಿರೋಧಿಸಿ ಗ್ರಾಮಸ್ಥರು ಕಳೆದ ಎರಡೂವರೆ ತಿಂಗಳಿಂದ ಧರಣಿ ನಡೆಸುತ್ತಿದ್ದಾರೆ. ನಾನು ಸಹ ಗ್ರಾಮಕ್ಕೆ ಭೇಟಿ ನೀಡಿ ಚಳವಳಿ ನಿರತ ಮುಖಂಡರ ಅಹವಾಲು ಆಲಿಸಿ ಬೆಂಬಲ ಸೂಚಿಸಿದ್ದೇನೆ ಎಂದರು. ಗೆಜ್ಜಲಗೆರೆ ಗ್ರಾಮವನ್ನು ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಆ ಭಾಗದ ಜನರ ತೀವ್ರ ವಿರೋಧವಿದೆ. ಈ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದೇನೆ. ಅವರಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಉತ್ತರಿಸಿದರು.
ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನಗರದ ಬಸ್ ನಿಲ್ದಾಣ ಸಮೀಪ ನೂತನ ಆಟೋ ನಿಲ್ದಾಣ ಮತ್ತು ಟ್ಯಾಕ್ಸಿ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿರುವ ಬ್ರಿಡ್ಜ್ ಆ್ಯಂಡ್ ರೂಫ್ಸ್ ಕಂಪನಿಯ ₹40 ಲಕ್ಷ ಸಿಎಸ್ ಆರ್ ನಿಧಿಯಿಂದ ಬಸ್ ನಿಲ್ದಾಣದ ಸಮೀಪದಲ್ಲಿ ಆಟೋ ನಿಲ್ದಾಣ ಹಾಗೂ ಸಂಸದರ ಪ್ರದೇಶಾಭಿವೃದ್ಧಿ ನಿಧಿ ₹30 ಲಕ್ಷ ಅನುದಾನದಿಂದ ಟ್ಯಾಕ್ಸಿ ನಿಲ್ದಾಣವನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.