
ಶಿವಮೊಗ್ಗ (ಡಿ.01): ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕನಕಪುರ ಬಂಡೆ ಎಂದು ಹೇಳಿಕೊಂಡು ಎಲ್ಲೆಲ್ಲಿ ನನ್ನ ವಿರುದ್ಧ ಕೆಲಸ ಮಾಡಿದರು ಎಂಬುದು ನನಗೆ ಗೊತ್ತು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ‘ನಾನು ಕುಮಾರಸ್ವಾಮಿ ಜೊತೆಯಲ್ಲಿ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ’ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ಅವರೆಷ್ಟು ಲಾಯಲಾಗಿ ಇದ್ದರು ಎಂಬುದು ನನಗೆ ಗೊತ್ತು. ಮಂಡ್ಯ ಲೋಕಸಭಾ ಚುನಾವಣೆಯನ್ನು ಯಾವ ರೀತಿ ನಡೆಸಿದರು, ನನ್ನ ಪರ ಎಷ್ಟು ನಿಷ್ಠೆಯಿಂದ ಕೆಲಸ ಮಾಡಿದರು ಎಂಬುದೂ ಗೊತ್ತು. ಒಳಗಡೆ ನಾಟಕ ಮಾಡಿ, ಕನಕಪುರ ಬಂಡೆ ಎಂದು ಹೇಳಿಕೊಂಡು ಎಲ್ಲೆಲ್ಲಿ ನನ್ನ ವಿರುದ್ಧ ಕೆಲಸ ಮಾಡಿದರು ಎಂಬುದೂ ಗೊತ್ತು ’ಎಂದು ತಿರುಗೇಟು ನೀಡಿದರು.
ಕುಮಾರಸ್ವಾಮಿ ವಿಶ್ವಮಾನವ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಡಿಕೆಶಿ ಹೇಳಿಕೆಯಲ್ಲಿ ಸತ್ಯ ಇದೆ. ನಾನು ಡಿಕೆಶಿ ಹಾಗೆ ಸರ್ವಜ್ಞನ ವಚನ ಹೇಳುವುದಿಲ್ಲ. ನಾನು ವಿಶ್ವಮಾನವ ಎಂದು ಹೇಳಿಕೊಂಡಿಲ್ಲ, ನನ್ನದು ತಾಯಿ ಹೃದಯ ಇದ್ದ ಹಾಗೆ. ಅಧಿಕಾರದಲ್ಲಿ ಇರಲಿ, ಬಿಡಲಿ ಜನರ ಕಷ್ಟ-ಸುಖಕ್ಕೆ ಸ್ಪಂದಿಸುತ್ತೇನೆ ಎಂದು ಹೇಳಿದರು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಹಿಂದಿದ್ದೇವೆ. ನೀರಾವರಿ ಸಚಿವರು ವೈಯಕ್ತಿಕವಾಗಿ ಬೆಂಗಳೂರಿನಲ್ಲಿ ಏನು ಸಂಪಾದನೆ ಮಾಡಬಹುದು ಎಂಬ ಬಗ್ಗೆಯೇ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದರು.
ಅಧಿವೇಶನದಲ್ಲಿ ಒಗ್ಗಟ್ಟಿನ ಹೋರಾಟಕ್ಕೆ ವಿಪಕ್ಷ ಪಣ: ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲ ರಂಗದಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿದ್ಧ ಬಿಜೆಪಿ-ಜೆಡಿಎಸ್ ಮೈತ್ರಿಪಕ್ಷಗಳು ಒಗ್ಗಟ್ಟಿನಿಂದ ಹೋರಾಡಲು ತೀರ್ಮಾನಿಸಿವೆ. ಬೆಳಗಾವಿ ಅಧಿವೇಶನ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಉಭಯ ಪಕ್ಷಗಳ ಪ್ರಮುಖ ನಾಯಕರು ಅಧಿವೇಶನದಲ್ಲಿ ಒಟ್ಟಾಗಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಸುಮಾರು ಒಂದು ತಾಸು ಚರ್ಚಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಬೆಳಗಾವಿ ಅಧಿವೇಶನದಲ್ಲಿ ಎರಡೂ ಪಕ್ಷಗಳು ಪರಿಣಾಮಕಾರಿಯಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಲಿವೆ ಎಂದರು. ಅಲ್ಲದೆ, ಸಿದ್ದರಾಮಯ್ಯ ಸಿಎಂ ಆದಾಗ ಪೊಲೀಸರೇ ದರೋಡೆ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅವರು ಮೊದಲ ಬಾರಿಗೆ ಸಿಎಂ ಆಗಿದ್ದಾಗ ಮೈಸೂರಿನ ಬಿಳಿಕೆರೆಯಲ್ಲಿ ಬಸ್ಸಿನಲ್ಲಿ ಹಣ ದರೋಡೆ ಮಾಡಲಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರು. ದರೋಡೆ ಮಾಡಲಾಗಿದೆ. ಎರಡೂ ಪ್ರಕರಣದಲ್ಲೂ ಪೊಲೀಸರು ಭಾಗಿಯಾಗಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.