ಕರ್ನಾಟಕದಲ್ಲಿ ಕೊರೋನಾ ಹೆಚ್ಚಳದಿಂದ ಬೆಡ್, ಆಕ್ಸಿಜನ್ ಹಾಗೂ ಔಷಧ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು, (ಮೇ.04): ರಾಜ್ಯದ ಕರೋನಾ ನಿರ್ವಹಣೆ ವಿಚಾರದಲ್ಲಿ ಪ್ರಧಾನಿ ಮೋದಿ ತುರ್ತು ಮಧ್ಯ ಪ್ರವೇಶಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಪ್ರಧಾನಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಕೊರತೆ ಎದುರಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
undefined
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಒಂದೇ ದಿನ ಆಕ್ಸಿಜನ್ ಕೊರತೆಯಿಂದ 24 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಅದೇ ರೀತಿ ಕಲಬುರಗಿಯಲ್ಲಿ ನಾಲ್ಕಕ್ಕಿಂತ ಹೆಚ್ಚು ಮಂದಿ ಆಕ್ಸಿಜನ್ ಕೊರತೆಯಿಂದ ಅಸುನೀಗಿದ್ದಾರೆ. ಸರ್ಕಾರ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದರೆ ಈ ಸಾವುಗಳನ್ನು ತಡೆಯಬಹುದಿತ್ತು. ಈ ಘಟನೆಗಳಿಂದ ರಾಜ್ಯದ ಇತರ ಜಿಲ್ಲೆಗಳಲ್ಲೂ ಜನರಲ್ಲಿ ಆತಂಕ ಮನೆ ಮಾಡಿದೆ.
ಸಚಿವ ಸುಧಾಕರ್ಗೆ ಮುಖಭಂಗ: ಎಲ್ಲ ಜವಾಬ್ದಾರಿ ಕಿತ್ತುಕೊಂಡ ಸಿಎಂ
ಬೆಂಗಳೂರಿನ ಕೆಲವು ಆಸ್ಪತ್ರೆಗಳು ತಮ್ಮಲ್ಲಿ ಆಕ್ಸಿಜನ್ ಕೊರತೆ ಇದೆ ಎಂಬುದನ್ನು ಹೇಳುತ್ತಿವೆ. ಆದರೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್‌ನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಅವಕಾಶ ನೀಡಿದರೆ ಯಾವುದೇ ಕೊರತೆ ಇರುವುದಿಲ್ಲ ಎಂದು ಹೇಳಿದ್ದಾರೆ. ಇಂತಹ ಸಂಕೀರ್ಣ ಸ್ಥಿತಿಯಲ್ಲಿ ಯಾವುದೇ ಪರಿಹಾರ ಕಾಣುತ್ತಿಲ್ಲ. ಹಾಗಾಗಿ ತಾವು ತಕ್ಷಣ ಮಧ್ಯ ಪ್ರವೇಶಿಸಬೇಕು ಎಂದು ಕೋರಿದ್ದಾರೆ.
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಪ್ರತಿ ನಿತ್ಯ 70 ಟನ್ ಆಕ್ಸಿಜನ್ ಅವಶ್ಯಕತೆಯಿದೆ. ಇದು ಆ ಜಿಲ್ಲೆಗಳ ಕರೊನಾ ಸೋಂಕಿತರ ಪ್ರಮಾಣ ಹಾಗೂ ಸೋಂಕಿನ ತೀವ್ರತೆಯನ್ನು ಪ್ರತಿಬಿಂಬಿಸುತ್ತಿದೆ. ಆದರೆ, ಆ ಜಿಲ್ಲೆಗಳಿಗೆ ಸರಾಸರಿ 20 ಟನ್ ಆಕ್ಸಿಜನ್ ಲಭ್ಯವಿದೆ ಎಂದು ತಿಳಿದಿದೆ. ಇದನ್ನು ತಾವು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.
ರಾಜ್ಯದ ಜನರು ಮತ್ತು ತುಮಕೂರು, ಬೆಳಗಾವಿ, ಧಾರವಾಡ ಮತ್ತು ಹಾಸನ ಜಿಲ್ಲೆಗಳಿಂದ ಜನರಿಂದ ತಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಸೋಂಕು ವ್ಯಾಪಕವಾಗುವ ಲಕ್ಷಣಗಳು ಗೋಚರಿಸುತ್ತಿವೆ ಮತ್ತು ಸೋಂಕು ವೇಗವಾಗಿ ಪಸರಿಸುವ ಆತಂಕವೂ ಇದೆ. ಇಂತಹ ಸಂಕಷ್ಟ ಸಂದರ್ಭದಲ್ಲಿ ರಾಜ್ಯ ಸರ್ಕಾರ ಚುರುಕಾಗಿ ಕಾರ್ಯ ನಿರ್ವಹಿಸದೇ ಇದ್ದಲ್ಲಿ ಮತ್ತು ಕೇಂದ್ರ ಬೆಂಬಲಿಸದೇ ಇದ್ದಲ್ಲಿ ದೊಡ್ಡ ದುರಂತ ಸಂಭವಿಸುವ ಸಾಧ್ಯತೆಗಳಿವೆ. ಆದ್ದರಿಂದ ಕೇಂದ್ರ ಸರ್ಕಾರ ರಾಜ್ಯಕ್ಕೆ ಆಮ್ಲಜನಕ ಹಾಗೂ ನಿರ್ದೇಶನಗಳನ್ನು ನೀಡಿ ಜನರ ಜೀವ ರಕ್ಷಣೆಗೆ ಮುಂದಾಗಬೇಕು ಎಂದು ಕುಮಾರಸ್ವಾಮಿ ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.