
ಬೆಂಗಳೂರು : ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆ ಮತ್ತು ಗೊಂದಲಗಳಿಗೆ ಹೈಕಮಾಂಡ್ ನಾಯಕರು ಪೂರ್ಣ ವಿರಾಮ ಹಾಕಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತ ವಿಚಾರವನ್ನು ಹೈಕಮಾಂಡ್ ಸ್ಪಷ್ಟಪಡಿಸಬೇಕು. ಆ ಮೂಲಕ ಎಲ್ಲ ಗೊಂದಲಗಳಿಗೂ ಪೂರ್ಣ ವಿರಾಮ ಹಾಕಬೇಕು. ಇಲ್ಲದಿದ್ದರೆ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗುವ ಸಾಧ್ಯತೆಯಿದೆ ಹಾಗೂ ಪಕ್ಷದಲ್ಲಿ, ಅಧಿಕಾರಿಗಳಲ್ಲೂ ಗೊಂದಲ ಮೂಡಲಿದೆ ಎಂದರು.
ವಾಲ್ಮೀಕಿ ಸಮುದಾಯಕ್ಕೆ ಸಚಿವ ಸ್ಥಾನ ನೀಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಅವರು ಈಗಾಗಲೇ ಆ ಬಗ್ಗೆ ತಿಳಿಸಿದ್ದಾರೆ. ಆದಷ್ಟು ಬೇಗ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂದು ಸಿಎಂ ಹೇಳಿದ್ದಾರೆ. ಆಗ ವಾಲ್ಮೀಕಿ ಸಮುದಾಯಕ್ಕೆ ಎರಡು ಸ್ಥಾನ ನೀಡಬೇಕು ಎಂದು ಕೋರಿದ್ದೇವೆ. ಅದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ಬೆಂಬಲಿಗರ ಘೋಷಣೆ ಕುರಿತ ಪ್ರಶ್ನೆಗೆ ಉತ್ತರಿಸಿ, ಘೋಷಣೆ ಕೂಗಿದ ಕೂಡಲೇ ಯಾರೂ ಮುಖ್ಯಮಂತ್ರಿಗಳಾಗುವುದಿಲ್ಲ. ಎಲ್ಲ ಕಡೆಯಲ್ಲೂ ಘೋಷಣೆ ಕೂಗುತ್ತಾರೆ. ಅಲ್ಲದೆ, ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ ಮತ್ತು ರೇಸ್‌ನಲ್ಲೂ ಇಲ್ಲ. ಅದನ್ನು ಬಿಟ್ಟು ಬೇರೇನೂ ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸತೀಶ್ ಹೇಳಿದ್ದು ಸರಿ. ವರಿಷ್ಠರು ಮಧ್ಯಪ್ರವೇಶಿಸಲಿ: ಡಾ। ಪರಂ
ಬೆಂಗಳೂರು : ಅಧಿಕಾರ ಹಂಚಿಕೆಯ ಬಗ್ಗೆ ಪ್ರತಿನಿತ್ಯ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ಹೈಕಮಾಂಡ್ ಮಧ್ಯಪ್ರವೇಶಿಸಿ ಗೊಂದಲ ನಿವಾರಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆಯ ಗೊಂದಲವನ್ನು ಹೈಕಮಾಂಡ್ ಪರಿಹರಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆ ಸರಿ ಇದೆ. ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಪ್ರತಿನಿತ್ಯ ಮಾಧ್ಯಮದಲ್ಲಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಇದನ್ನು ಹೈಕಮಾಂಡ್ ಗಮನಿಸುತ್ತಿದೆ. ಆದ್ದರಿಂದ ಇದನ್ನು ಬಗೆಹರಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.ಯಾವಾಗ ಯಾವ ಔಷಧಿ ಕೊಡಬೇಕು ಎಂದು ಹೈಕಮಾಂಡ್‌ಗೆ ತಿಳಿದಿದೆ. ಅದನ್ನು ಅವರು ಮಾಡುತ್ತಾರೆ. ರಾಜ್ಯದಲ್ಲಿ ರಾಜಕೀಯ ಬದಲಾವಣೆ ಮಾಡುವುದಾದರೆ ಅದಕ್ಕಾಗಿ ಬಿಹಾರ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ಕಾಯುವುದಿಲ್ಲ. ಅದು ಯಾವಾಗ ಬೇಕಾದರೂ ಆಗಬಹುದು ಎಂದು ಸ್ಪಷ್ಟಪಡಿಸಿದರು.
ಮೋದಿ, ಅಮಿತ್ ಶಾಗೆ ಪತ್ರ:ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅಪಮಾನ ಮಾಡಿರುವುದು ಖಂಡನೀಯ. ಶೂ ಎಸೆಯಲು ಯತ್ನಿಸಿದ ವಕೀಲನನ್ನು ಬಿಟ್ಟು ಕಳುಹಿಸಿರುವುದು ಸರಿಯಲ್ಲ. ತಕ್ಷಣ ಆತನನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಇದೊಂದು ಗಂಭೀರ ಭದ್ರತಾ ಲೋಪವಾಗಿದ್ದು ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.