ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾಗಿದೆ. ಇದೇ ಬೆನ್ನನ್ನೇ ಸಂಪುಟ ವಿಸ್ತರಣೆ ಚರ್ಚೆಗಳು ನಡೆಯುತ್ತಿದ್ದು ಮೂವರು ಮಂತ್ರಿಗಿರಿ ಪಡೆವ ಹಾದಿ ಸುಗಮವಾದಂತಾಗಿದೆ.
ಬೆಂಗಳೂರು (ನ.12): ಬಿಜೆಪಿ ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಎಚ್. ವಿಶ್ವನಾಥ್ ಮತ್ತು ಆರ್. ಶಂಕರ್ ಅವರಿಗೆ ಸಚಿವ ಸ್ಥಾನ ನೀಡದಂತೆ ಸರ್ಕಾರಕ್ಕೆ ನಿರ್ಬಂಧ ವಿಧಿಸಲು ನಿರಾಕರಿಸಿರುವ ಹೈಕೋರ್ಟ್, ಈ ಮೂವರಿಗೂ ಸಚಿವ ಸ್ಥಾನ ನೀಡಿದರೆ ಅದು ನ್ಯಾಯಾಲಯದ ಮುಂದಿನ ಆದೇಶಗಳಿಗೆ ಒಳಪಟ್ಟಿರಲಿದೆ ಎಂದು ಸ್ಪಷ್ಟಪಡಿಸಿದೆ.
ಈ ಕುರಿತು ಬೆಂಗಳೂರಿನ ವಕೀಲ ಎ. ಹರೀಶ ಹಾಗೂ ಜಿ. ಮೋಹನ್‌ಕುಮಾರ್ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು, ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
undefined
ಕೊಲೆಯಾದ ಬಿಜೆಪಿಗ ಯೋಗೇಶ್ ಪತ್ನಿ ಕೈ ಸೇರ್ಪಡೆ : ಮೂಲ ಕಾರಣ ಏನು..?
ಕೆಲ ಕಾಲ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಮೂವರೂ ವಿಧಾನ ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಅರ್ಜಿದಾರರು ಹೇಳುತ್ತಿದ್ದಾರೆ. ಆದರೆ, ಅರ್ಜಿ ಕುರಿತು ಆದೇಶ ಹೊರಡಿಸುವ ಮುನ್ನ ಪ್ರತಿವಾದಿಗಳ ವಾದ ಸಹ ಆಲಿಸಬೇಕಿದೆ. ಆದ್ದರಿಂದ, ಸರ್ಕಾರ ವಿಳಂಬ ಮಾಡದೇ ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು. ಪರಿಷತ್‌ಗೆ ಅವರನ್ನು ಆಯ್ಕೆ ಮಾಡಿದ ಪ್ರಕ್ರಿಯೆಗೆ ಸಂಬಂಧಿಸಿದ ಕಡತಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ಸೂಚಿಸಿತು.
ಅಲ್ಲದೆ, ಮೂವರಿಗೆ ಸಚಿವ ಸ್ಥಾನ ನೀಡುವ ವಿಚಾರದ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಆದ ಕಾರಣ ಈ ವಿಚಾರದಲ್ಲಿ ಸರ್ಕಾರ ಕೈಗೊಳ್ಳುವ ಕ್ರಮಗಳು ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಮುಂದಿನ ಆದೇಶಗಳಿಗೆ ಒಳಪಟ್ಟಿರಲಿದೆ ಎಂದು ಸ್ಪಷ್ಟಪಡಿಸಿದ ನ್ಯಾಯಪೀಠ ವಿಚಾರಣೆಯನ್ನು ನ.19ಕ್ಕೆ ಮುಂದೂಡಿತು.