
ಬೆಂಗಳೂರು (ಸೆ.13): ಮದ್ದೂರು ಪ್ರಕರಣದಲ್ಲಿ ಪ್ರಚೋದನಾಕಾರಿ ಭಾಷಣ ಮಾಡುವುದು ಸರಿಯಲ್ಲ. ಪೊಲೀಸರಿಗೆ ತಮ್ಮ ಜವಾಬ್ದಾರಿ ನಿರ್ವಹಿಸಲು ಬಿಟ್ಟರೆ ಯಾರು ಕಲ್ಲು ಹೊಡೆದಿದ್ದಾರೆಯೋ ಅವರನ್ನು ಹಿಡಿದು ಬಂಧಿಸುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಮದ್ದೂರಲ್ಲಿ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲು ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮದ್ದೂರು ಘಟನೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ.
ಪೊಲೀಸರಿಗೆ ಬಿಡಿ, ಕಲ್ಲು ಹೊಡೆದವರನ್ನು ಹಿಡಿದು, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಮೊದಲಿನಿಂದಲೂ ಹೇಳುತ್ತಿದ್ದೇವೆ. ಮುಸಲ್ಮಾನ ಆಗಿರಲಿ, ಹಿಂದುವೇ ಆಗಿರಲಿ. ಮತ್ತೊಬ್ಬ ಆಗಿರಲಿ, ಯಾರೇ ಕಾನೂನು ವಿರುದ್ಧವಾಗಿ ನಡೆದುಕೊಂಡಿದ್ದರೆ ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರವನ್ನು ಪೊಲೀಸರಿಗೆ ಬಿಟ್ಟುಬಿಡಬೇಕು. ಅದೆಲ್ಲ ಬಿಟ್ಟು, ಇವರು ಹೋಗಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿ, ಮತ್ತೆ ಜನರನ್ನೆಲ್ಲ ಎಬ್ಬಿಸುವುದು ಸರಿಯಲ್ಲ ಎಂದರು.
ರಾಜ್ಯದಲ್ಲಿ ಪೊಲೀಸ್ ಪೇದೆ ಹುದ್ದೆ ನೇಮಕಾತಿ ವಯೋಮಿತಿ ಸಡಿಸಲು ಮನವಿ ಮಾಡಲಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ವಯೋಮಿತಿ ಸಡಿಲಿಕೆ ಬಗ್ಗೆ ಚರ್ಚೆ ಮಾಡಿದ್ದೇವೆ. ಬೇರೆಬೇರೆ ರಾಜ್ಯದಲ್ಲಿ ಏನಿದೆ ಎಂಬುದನ್ನು ಪರಿಶೀಲನೆ ಮಾಡುತ್ತಿದ್ದೇವೆ. ಬೇರೆ ರಾಜ್ಯದಲ್ಲಿ ವಯೋಮಿತಿ ಎಷ್ಟು ವರ್ಷ ಇದೆ ಎಂದು ಪರಿಶೀಲಿಸಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ಸೂಚನೆ ಕೊಟ್ಟಿದ್ದೇನೆ.
ಪ್ರಸ್ತಾವನೆ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಸುಮಾರು ವರ್ಷಗಳಿಂದ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ಎರಡು, ಮೂರು ವರ್ಷ ವಯೋಮಿತಿ ಹೆಚ್ಚಳ ಮಾಡಿಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಡಿಜಿಯವರಿಗೆ ಸೂಚನೆ ಕೊಟ್ಟಿದ್ದೇನೆ ಎಂದ ಅವರು, ಪೊಲೀಸ್ ದಂಪತಿ ಅಂತರ್ ಜಿಲ್ಲಾ ವರ್ಗಾವಣೆ ಸರ್ಕಾರದ ಆದೇಶದಂತೆ ನಡೆಯುತ್ತಿದೆ. ಯಾವುದೇ ನಿಯಮ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಲಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.