ನಾನೂ ರಾಮಭಕ್ತಳು, ಮಂದಿರಕ್ಕೆ ದೇಣಿಗೆ ನೀಡಿದ್ದೇನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

By Kannadaprabha NewsFirst Published Mar 25, 2024, 7:03 AM IST
Highlights

ನಾನು ರಾಮನ ಭಕ್ತಳು. ನಮ್ಮ ಸಂಸ್ಕೃತಿಯನ್ನು ಬಿಟ್ಟುಕೊಡದೆ ಅಭಿವೃದ್ಧಿ ಜತೆಗೆ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಮಾಡುತ್ತೇನೆ ಎಂದು ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. 

ಬೆಳಗಾವಿ (ಮಾ.25): ನಾನು ರಾಮನ ಭಕ್ತಳು. ನಮ್ಮ ಸಂಸ್ಕೃತಿಯನ್ನು ಬಿಟ್ಟುಕೊಡದೆ ಅಭಿವೃದ್ಧಿ ಜತೆಗೆ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಮಾಡುತ್ತೇನೆ ಎಂದು ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ರಾಮಮಂದಿರದ ಅಜೆಂಡಾ ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದಾರೆ. 

ನಾನೂ ರಾಮನ ಭಕ್ತಳು. ನಾನು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದೇನೆ ಎಂದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ನಾನು, ಬೆಳಗಾವಿಗೆ ಸತೀಶ ಜಾರಕಿಹೊಳಿ ಉಸ್ತುವಾರಿ ಇದ್ದಾರೆ. ಸಮನ್ವಯತೆಯಿಂದ ಎರಡೂ ಕಡೆ ಪ್ರಚಾರ ಮಾಡುತ್ತೇವೆ. ಭರವಸೆ ಇಟ್ಟು ಕಾಂಗ್ರೆಸ್ ಟಿಕೆಟ್ ಅನ್ನು ನನ್ನ ಮಗನಿಗೆ ಕೊಟ್ಟಿದ್ದಾರೆ. ನನ್ನ ಪುತ್ರನ ಗೆಲುವಿಗೆ ಶ್ರಮಿಸುತ್ತೇವೆ ಎಂದು ಹೇಳಿದರು. ನಿವೃತ್ತ ಐಎಎಸ್‌ ಅಧಿಕಾರಿ ಶಂಭು‌ ಕಲ್ಲೋಳ್ಕರ್‌ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದರು‌. 

ಸಿಎಂ ಸಿದ್ದರಾಮಯ್ಯರಿಂದ ಡ್ರಾಮಾ, ಅವರಿಗಿದು ಶೋಭೆಯಲ್ಲ: ಬಿ.ವೈ.ವಿಜಯೇಂದ್ರ

ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ಆಗಿದ್ದಾರೆ. ನಾನು ಅವರೊಂದಿಗೆ ಮಾತನಾಡುತ್ತೇನೆ. ಬರ ಪರಿಹಾರಕ್ಕಾಗಿ ಸುಪ್ರೀಂಕೋರ್ಟ್ ಮೋರೆ ಹೋಗಲು ಸರ್ಕಾರ ತೀರ್ಮಾನ ಮಾಡಿರುವುದಕ್ಕೆ ಪ್ರತಿಕ್ರಿಯಿಸಿ, ನಾಲ್ಕು ಸಾವಿರ ಕೋಟಿ ರು.ಪರಿಹಾರ ಕೇಳಿದ್ದೇವು. ಆದರೆ, ಕೇಂದ್ರ ಸರ್ಕಾರ ಒಂದು ರುಪಾಯಿ ಕೊಡಲಿಲ್ಲ. ಅನಿವಾರ್ಯವಾಗಿ ಸುಪ್ರೀಂಕೋರ್ಟ್ ಮೋರೆ ಹೋಗಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರ ಜತೆ ಸಭೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮ ಪುತ್ರ ಮೃಣಾಲ್‌ಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಖಚಿತವಾದ ಹಿನ್ನೆಲೆಯಲ್ಲಿ ತಮ್ಮ ನಿವಾಸದ ಕಚೇರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತರ ಜೊತೆಗೆ ಸಭೆ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬೆಳಗಾವಿಯ ಕುವೆಂಪು ನಗರದಲ್ಲಿರುವ ತಮ್ಮ ನಿವಾಸದ ಕಚೇರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸುಮಾರು 500 ಕಾರ್ಯಕರ್ತೆಯರು ಪಾಲ್ಗೊಂಡಿದ್ದರು ಎನ್ನಲಾಗಿದೆ.

ಪ್ರಧಾನಿ ಮೋದಿ ಹಿಟ್ಲರ್ ರೀತಿ ಸರ್ವಾಧಿಕಾರಿ: ಸಿಎಂ ಸಿದ್ದರಾಮಯ್ಯ

ವಿಷಯ ತಿಳಿದು ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿತು. ಸಭೆಯಲ್ಲಿ ಪಾಲ್ಗೊಂಡಿದ್ದವರ ಬಗ್ಗೆ ಮಾಹಿತಿ ಪಡೆದು ಅವರನ್ನು ಅಲ್ಲಿಂದ ಅಧಿಕಾರಿಗಳು ಕಳುಹಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಅಂಗನವಾಡಿ ಕಾರ್ಯಕರ್ತೆಯರಿಗೆ ಇತ್ತೀಚೆಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಅವರ ಕೆಲಸದ ಒತ್ತಡವನ್ನು ನಿವಾರಿಸಬೇಕೆಂದು ಮನವಿ ಪತ್ರ ನೀಡಲು ಬಂದಿದ್ದರು. ಚುನಾವಣೆಗೆ ಸಂಬಂಧಪಟ್ಟಂತೆ ನಾನು ಸಭೆ ನಡೆಸಿಲ್ಲ ಎಂದು ತಿಳಿಸಿದ್ದಾರೆ. ಈ ಸಂಬಂಧ ಬೆಳಗಾವಿ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಧನಂಜಯ ಜಾಧವ ಅವರು ಸಹಾಯಕ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

click me!