
ಹಾಸನ (ಜ.25) : ತೀವ್ರ ಕುತೂಹಲ ಮೂಡಿಸಿರುವ ಹಾಸನ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಯಾರೆನ್ನುವ ಗೊಂದಲ ಮುಂದುವರಿದಿರುವ ನಡುವೆಯೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಪತ್ನಿ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಭವಾನಿ ರೇವಣ್ಣ ಅವರು ‘ವರಿಷ್ಠರು ನನಗೇ ಟಿಕೆಟ್ ಕೊಡಲು ನಿರ್ಧರಿಸಿದ್ದಾರೆ’ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಹಿಂದಿನಿಂದಲೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಆಸಕ್ತಿ ತೋರಿಸುತ್ತಿದ್ದ ಭವಾನಿ ರೇವಣ್ಣ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭವಾನಿ ರೇವಣ್ಣ ಅವರ ಸ್ಪರ್ಧೆ ಅಧಿಕೃತವಾದರೆ ರಾಜ್ಯ ರಾಜಕೀಯದ ಅಖಾಡಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬದ ಮತ್ತೊಬ್ಬ ಸೊಸೆಯೂ ಇಳಿದಂತಾಗಲಿದೆ.
ಹಾಸನ ತಾಲೂಕಿನ ಸಾಲಗಾಮೆ ಹೋಬಳಿಯ ಕಕ್ಕೀಹಳ್ಳಿಯಲ್ಲಿ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಗಳವಾರ ಪಾಲ್ಗೊಂಡು ಮಾತನಾಡಿದ ಭವಾನಿ, ಕಳೆದ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಬಿಜೆಪಿ(ಪ್ರೀತಂ ಗೌಡ) ಗೆದ್ದಿದ್ದರಿಂದ ಈ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಹಾಗೇ ಬಾಕಿ ಉಳಿದಿವೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್‌ನಿಂದ ನನ್ನನ್ನು ಅಭ್ಯರ್ಥಿಯಾಗಿ ಮಾಡುವಂತೆ ಈಗಾಗಲೇ ನಿರ್ಣಯ ತೆಗೆದುಕೊಂಡಿದ್ದಾರೆ. ಕೆಲವೇ ದಿನಗಳಲ್ಲಿ ನನ್ನ ಹೆಸರು ಹೇಳುತ್ತಾರೆ. ಇದರಿಂದಾಗಿ ನಾನು ಊರುಗಳ ಹಾಗೂ ಜನರ ಪರಿಚಯ ಮಾಡಿಕೊಳ್ಳುತ್ತಿದ್ದೇನೆ ಎಂದ ಅವರು, ಮತ್ತೊಮ್ಮೆ ಇಲ್ಲಿಗೆ ಭೇಟಿ ನೀಡುತ್ತೇನೆ. ಗ್ರಾಮಸ್ಥರನ್ನೆಲ್ಲ ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಹೇಳಿದರು.
ಹಾಸನ ಕ್ಷೇತ್ರದಿಂದ ಭವಾನಿ ರೇವಣ್ಣ ಸ್ಪರ್ಧೆ: ಪ್ರೀತಂ ಗೌಡಗೆ ಟಕ್ಕರ್?
8 ಮಂದಿ:
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದಲ್ಲಿ ಎಂಟು ಮಂದಿ ಸಕ್ರಿಯ ರಾಜಕಾರಣದಲ್ಲಿದ್ದು, ಇವರಲ್ಲಿ ಭವಾನಿ ರೇವಣ್ಣ ಅವರಷ್ಟೇ ಜಿಲ್ಲಾ ಪಂಚಾಯತ್ ಮಟ್ಟಕ್ಕೆ ಸೀಮಿತವಾಗಿದ್ದರು. ದೇವೇಗೌಡರು ರಾಜ್ಯಸಭೆ ಸದಸ್ಯರಾಗಿದ್ದಾರೆ. ಅವರ ಪುತ್ರರಾದ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ಸೊಸೆ ಅನಿತಾ ಕುಮಾರಸ್ವಾಮಿ ಹಾಲಿ ಶಾಸಕರಾಗಿದ್ದರೆ, ಮೊಮ್ಮಕ್ಕಳಾದ ಪ್ರಜ್ವಲ್ ರೇವಣ್ಣ ಅವರು ಸಂಸದ ಹಾಗೂ ಮತ್ತೊಬ್ಬ ಮೊಮ್ಮಗ ಸೂರಜ್ ರೇವಣ್ಣ ಎಂಎಲ್ಸಿಯಾಗಿದ್ದಾರೆ. ಇನ್ನು ಮೂರನೇ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಕಳೆದ ಬಾರಿ ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದು, ಈ ಬಾರಿ ರಾಮನಗರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದು ಪಕ್ಕಾ ಆಗಿದೆ. ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಈ ಹಿಂದೆ ಜಿಪಂ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.