ಪಕ್ಷದ ರಾಷ್ಟ್ರೀಯ ನಾಯಕರು ನನ್ನ ಹೆಗಲ ಮೇಲೆ ದೊಡ್ಡ ಜವಾಬ್ದಾರಿಯನ್ನು ಇಟ್ಟಿದ್ದಾರೆ. ರಾಜ್ಯದ ಎಲ್ಲ ಹಿರಿಯ ನಾಯಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತೇನೆ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಶ್ವಾಸನೆ ನೀಡಿದ್ದಾರೆ.
ಬೆಂಗಳೂರು (ನ.11): ಪಕ್ಷದ ರಾಷ್ಟ್ರೀಯ ನಾಯಕರು ನನ್ನ ಹೆಗಲ ಮೇಲೆ ದೊಡ್ಡ ಜವಾಬ್ದಾರಿಯನ್ನು ಇಟ್ಟಿದ್ದಾರೆ. ರಾಜ್ಯದ ಎಲ್ಲ ಹಿರಿಯ ನಾಯಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತೇನೆ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಶ್ವಾಸನೆ ನೀಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರಾಗಿ ಘೋಷಣೆಯಾಗುತ್ತಿದ್ದಂತೆ ಶುಕ್ರವಾರ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಆಗಮಿಸಿ ಆಶೀರ್ವಾದ ಪಡೆದುಕೊಂಡು ಸಿಹಿ ಹಂಚಿಕೊಂಡರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಪುತ್ರ ಎನ್ನುವ ಕಾರಣಕ್ಕೆ ಮಾತ್ರ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿಲ್ಲ.
ಆದರೆ, ಯಡಿಯೂರಪ್ಪ ಅವರ ಮಗ ಎನ್ನುವುದಕ್ಕೆ ನನಗೆ ಹೆಮ್ಮೆ ಇದೆ ಎಂದರು. ಯಡಿಯೂರಪ್ಪ ಮಾತ್ರವಲ್ಲದೇ, ಹಿರಿಯರಾದ ಬಸವರಾಜ ಬೊಮ್ಮಾಯಿ, ನಳಿನ್‌ಕುಮಾರ್ ಕಟೀಲ್, ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್, ಸೋಮಣ್ಣ ಸೇರಿದಂತೆ ಎಲ್ಲ ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸಲಾಗುವುದು ಎಂದು ಹೇಳಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೆಲವರು ಪಕ್ಷ ಬಿಡುವ ವಿಚಾರದಲ್ಲಿದ್ದಾರೆ ಎಂಬ ಮಾಹಿತಿಯನ್ನು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಅವರನ್ನು ಸಹ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ.
ಕೆಇಎ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಸಚಿವ ಪ್ರಿಯಾಂಕ ಖರ್ಗೆಯವರ ಆಪ್ತ: ಆರಗ ಜ್ಞಾನೇಂದ್ರ
ಯಾರೂ ಪಕ್ಷ ಬಿಡುವುದಿಲ್ಲ. ಇದರಲ್ಲಿ ವೈಯಕ್ತಿಕ ಹಿತಾಸಕ್ತಿ ಏನಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗೂಡಿ ಪಕ್ಷವನ್ನು ಸಂಘಟಿಸುತ್ತೇವೆ ಎಂದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ಹಿರಿಯ ಮುಖಂಡ ಬಿ.ಎಲ್.ಸಂತೋಷ್ ಸೇರಿದಂತೆ ಹಲವು ಹಿರಿಯ ಚರ್ಚಿಸಿ ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಯಡಿಯೂರಪ್ಪ ಸೇರಿದಂತೆ ಹಲವು ಹಿರಿಯರ ಶ್ರಮ ಇದೆ. ಲಕ್ಷಾಂತರ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ಇಷ್ಟು ಎತ್ತರಕ್ಕೆ ಬೆಳೆದು ನಿಂತಿದೆ.
ರೈತರ ಹೊಸ ವಿದ್ಯುತ್ ಸಂಪರ್ಕಕ್ಕೆ ಸಬ್ಸಿಡಿ ಕಟ್: ಎಚ್‌ಡಿಕೆ ಆಕ್ರೋಶ
ಕೇಂದ್ರದ ವರಿಷ್ಠರು ಮತ್ತು ರಾಜ್ಯದ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆ, ವಿಶ್ವಾಸವನ್ನು ಉಳಿಸಿಕೊಂಡು ಪಕ್ಷವನ್ನು ಮತ್ತಷ್ಟು ಸಂಘಟನೆಗೊಳಿಸುತ್ತೇನೆ ಎಂದು ವಿಜಯೇಂದ್ರ ಹೇಳಿದರು. ನಮ್ಮ ಮುಂದಿನ ಗುರಿ ಮುಂದಿನ ಲೋಕಸಭಾ ಚುನಾವಣೆಯಾಗಿದೆ. ಇಡಿ ಜಗತ್ತು ಭಾರತದ ಕಡೆ ನೋಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಮೇಲೆ ಭರವಸೆ ಇಟ್ಟಿದೆ. ಇಂತಹ ಸಂದರ್ಭದಲ್ಲಿ ಪಕ್ಷ ಸಂಘಟನೆ ಮೂಲಕ ಮುಂದಿನ ಚುನಾವಣೆಯಲ್ಲಿ ರಾಜ್ಯದಿಂದ ಅತಿ ಹೆಚ್ಚು ಸಂಸದರನ್ನು ಗೆಲ್ಲಿಸಬೇಕಿದೆ. ಈ ಮೂಲಕ ಪ್ರಧಾನಿ ಮೋದಿ ಕೈ ಬಲಪಡಿಸಲಾಗುವುದು. ಲೋಕಸಭಾ ಚುನಾವಣೆ ಎನ್ನುವ ದೊಡ್ಡ ಸವಾಲು ನಮ್ಮ ಮುಂದಿದೆ. ಇದನ್ನು ಎಲ್ಲರ ಸಹಕಾರದಲ್ಲಿ ಯಶಸ್ವಿಯಾಗಿ ಮಾಡಲಾಗುವುದು ಎಂದು ತಿಳಿಸಿದರು.