ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ ಗೆದ್ದರೆ ರಾಜ್ಯದಲ್ಲಿ ಸರ್ಕಾರ: ಡಿ.ಕೆ.ಶಿವಕುಮಾರ್‌

By Kannadaprabha News  |  First Published Apr 23, 2023, 12:29 PM IST

ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಮೆರೆದರೆ ಕರ್ನಾಟಕದಲ್ಲಿ ಸರ್ಕಾರ ರಚಿಸಲು ಹೆಚ್ಚಿನ ಅವಕಾಶವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು. 


ಬೆಳ್ತಂಗಡಿ (ಏ.23): ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಮೆರೆದರೆ ಕರ್ನಾಟಕದಲ್ಲಿ ಸರ್ಕಾರ ರಚಿಸಲು ಹೆಚ್ಚಿನ ಅವಕಾಶವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು. ಅವರು ಶನಿವಾರ ಉಜಿರೆಯಲ್ಲಿ ನಡೆದ ಕಾಂಗ್ರೆಸ್‌ ಪಕ್ಷದ ಬೆಳ್ತಂಗಡಿಯ ಅಭ್ಯರ್ಥಿ ರಕ್ಷಿತ್‌ ಶಿವರಾಂ ಅವರ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ 141 ಸ್ಥಾನ ಲಭಿಸಲಿದ್ದು, ಕಾಂಗ್ರೆಸ್‌ ಸರ್ಕಾರ ರಚಿಸುವುದು ಖಚಿತ. ಈಗಾಗಲೇ ಬಿಜೆಪಿ ಪಕ್ಷದ ಹಲವಾರು ನಾಯಕರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಇನ್ನಷ್ಟುಮುಖಂಡರು ನಮ್ಮ ಪಕ್ಷಕ್ಕೆ ಸೇರಲು ಬಯಕೆ ವ್ಯಕ್ತಪಡಿಸುತ್ತಿರುವುದಾಗಿ ಹೇಳಿದರು.

ಸಾಮಾಜಿಕ ನ್ಯಾಯದಡಿಯಲ್ಲಿ ಸಮರ್ಥ ನಾಯಕರಿದ್ದರೂ ಪಕ್ಷದ ತೀರ್ಮಾನದಂತೆ ಯುವ ಸಮುದಾಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ದ.ಕ. ಜಿಲ್ಲೆಯಲ್ಲಿ ಈ ಬಾರಿ 4 ಹೊಸ ಮುಖಗಳಿಗೆ ಕಾಂಗ್ರೆಸ್‌ ಪಕ್ಷದಿಂದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ ಎಂದರು. ರಾಜ್ಯದಲ್ಲಿ ಮೇ 10, ಕಾಂಗ್ರೆಸ್‌ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಭವಿಷ್ಯದ ಬದಲಾವಣೆಯೊಂದಿಗೆ ಭ್ರಷ್ಟಾಚಾರವನ್ನು ಬಡಿದೋಡಿಸುವ ದಿನವಾಗಲಿ. ನಮ್ಮ ಸರ್ಕಾರ ಬಂದಲ್ಲಿ ಅರಣ್ಯ ಭೂಮಿ ಒತ್ತುವರಿ, ಕುಮ್ಕಿ ಮೊದಲಾದ ಜಮೀನುಗಳ ಸಕ್ರಮಕ್ಕೆ ಕೇಂದ್ರಕ್ಕೆ ಶಿಫಾರಸು ಸಲ್ಲಿಸಲಾಗುವುದು. 

Tap to resize

Latest Videos

ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಪಡೆದಿಲ್ಲ: ಡಿ.ಕೆ.ಶಿವಕುಮಾರ್‌

ಧರ್ಮ ಯಾವುದಾದರೂ ತತ್ವ ಒಂದೇ ಆಗಿದ್ದು, ಜಾತಿ ಧರ್ಮದ ವ್ಯವಸ್ಥೆಯಲ್ಲಿ ಮಾನವೀಯ ನೆಲೆಯಲ್ಲಿ ಬದುಕುವುದು ಮುಖ್ಯ ಎಂದು ಅಭಿಪ್ರಾಯಪಟ್ಟರು. ಬೆಳ್ತಂಗಡಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಿತ್‌ ಶಿವರಾಂ ಮಾತನಾಡಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಿ ಅಧಿಕೃತ ಭಾಷೆಯಾಗಿ ಘೋಷಿಸಲು ಮನವಿ ಸಲ್ಲಿಸಲಾಗುವುದು. ಕರಾವಳಿಗೆ ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಕುಚ್ಚಲಕ್ಕಿ ನೀಡಲು ಕ್ರಮಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು. ಅಡಕೆಗೆ ಬಾಧಿಸುತ್ತಿರುವ ಎಲೆಚುಕ್ಕಿ ರೋಗದ ಬಗ್ಗೆ ವಿಶೇಷ ಸಂಶೋಧನೆ ಕೈಗೊಳ್ಳಲು, ರಬ್ಬರ್‌ಗೆ ಬೆಂಬಲ ಬೆಲೆ ನಿಗದಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ವೇದಿಕೆಯಲ್ಲಿ ಕೆಪಿಸಿಸಿ ರಾಜ್ಯ ಉಸ್ತುವಾರಿ ರೋಸಿ ಜಾನ್‌, ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌, ಮಾಜಿ ಶಾಸಕ ವಸಂತ ಬಂಗೇರ, ವಿಧಾನ ಪರಿಷತ್‌ ಸದಸ್ಯರಾದ ಕೆ. ಹರೀಶ್‌ ಕುಮಾರ್‌, ಮಂಜುನಾಥ ಭಂಡಾರಿ, ಪುತ್ತೂರು ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ, ಮಾಜಿ ಸಚಿವ ಅಭಯಚಂದ್ರ ಜೈನ್‌, ತಾಲೂಕು ಬ್ಲಾಕ್‌ ಕಾಂಗ್ರೆಸ್‌ನ ಶೈಲೇಶ್‌ ಕುಮಾರ್‌ ಮತ್ತಿತರರು ಇದ್ದರು. ಕೇಶವ ಬೆಳಾಲು ಕಾರ್ಯಕ್ರಮ ನಿರೂಪಿಸಿದರು.

ಕರಾವಳಿಗೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ: ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪ್ರಣಾಳಿಕೆಯಲ್ಲಿರುವ ಯಾವುದೇ ಕೆಲಸಗಳು ಪ್ರಗತಿ ಸಾಧಿಸದೆ ನಿರುದ್ಯೋಗ ಸಮಸ್ಯೆ ಉಂಟಾಗಿ ಆದಾಯ ಪಾತಾಳಕ್ಕೆ ಕುಸಿದು ಬೆಲೆ ಏರಿ ಗಗನವನ್ನು ತಲುಪಿದೆ. ಕಾಂಗ್ರೆಸ್‌ ಸರ್ಕಾರ ಬಂದಲ್ಲಿ ಕರಾವಳಿ-ಮಲೆನಾಡು ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಉದ್ಯೋಗ ಸೃಷ್ಟಿಯ ವ್ಯವಸ್ಥೆ ಕೈಗೊಳ್ಳಲಾಗುವುದು. ರಾಜ್ಯದ ರೈತರಿಗೆ ಹಾಗೂ ಮಹಿಳೆಯರ ಅಭಿವೃದ್ಧಿಗಾಗಿ ಹೆಚ್ಚಿನ ಯೋಜನೆಗಳನ್ನು ರೂಪಿಸಲಾಗುವುದು ಎಂದು ಶಿವಕುಮಾರ್‌ ತಿಳಿಸಿದರು.

ರಾಜ್ಯದ ಎಲ್ಲ ಕಾಂಗ್ರೆಸಿಗರ ಫೋನ್‌ ಕದ್ದಾಲಿಕೆ: ಹರಿಪ್ರಸಾದ್‌ ಆರೋಪ

ಪಕ್ಷದೊಳಗೆ ಭಿನ್ನಾಭಿಪ್ರಾಯವಿಲ್ಲ: ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ ಕಾಂಗ್ರೆಸ್‌ ಪಕ್ಷದೊಳಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಎಲ್ಲರಿಗೂ ಸಮಾನವಾದ ಅಧಿಕಾರ ಕೊಡುತ್ತೇವೆ. ಬದಲಾವಣೆ ದೃಷ್ಟಿಯಲ್ಲಿ ಬಿಜೆಪಿಯ ಕೆಲವು ನಾಯಕರು ಪಕ್ಷ ತೊರೆದು ಕಾಂಗ್ರೆಸ್‌ಗೆ ಬಂದಿದ್ದಾರೆ. ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದವರ ಬಗ್ಗೆ ಯಾವುದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ ಎಂದು ಹೇಳಿದರು. ಇನ್ನು ಕರ್ನಾಟಕದಲ್ಲಿ ಚುನಾವಣೆ ಹಿನ್ನೆಲೆ ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ಪರಿಶೀಲನೆ ಕೂಡ ಮುಗಿದಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ.

click me!