‘ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಳೆದ ಒಂದು ವರ್ಷದಿಂದ ಒತ್ತಡ ಇದೆ. ಹೈಕಮಾಂಡ್ ಹೇಳಿದರೆ ಸ್ಪರ್ಧಿಸಬೇಕಾಗುತ್ತದೆ. ಆದರೆ ಅಂತಿಮ ನಿರ್ಧಾರ ಪಕ್ಷದ್ದೇ’ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರು (ನ.17): ‘ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಳೆದ ಒಂದು ವರ್ಷದಿಂದ ಒತ್ತಡ ಇದೆ. ಹೈಕಮಾಂಡ್ ಹೇಳಿದರೆ ಸ್ಪರ್ಧಿಸಬೇಕಾಗುತ್ತದೆ. ಆದರೆ ಅಂತಿಮ ನಿರ್ಧಾರ ಪಕ್ಷದ್ದೇ’ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂದಿನ ಚುನಾವಣೆಯಲ್ಲಿ ಪ್ರತಿಯೊಂದು ಸೀಟಿನ ಗೆಲುವೂ ಸಹ ಮುಖ್ಯವಾಗುತ್ತದೆ.
ಹೀಗಾಗಿ ಹೈಕಮಾಂಡ್ ತೀರ್ಮಾನದಂತೆ ನಾವು ನಡೆದುಕೊಳ್ಳಬೇಕು. ಇಲ್ಲಿಯವರೆಗೆ ಅವರು ಏನೂ ಹೇಳಿಲ್ಲ. ಆದರೆ ಒಂದು ವರ್ಷದಿಂದ ದೇವನಹಳ್ಳಿಯಿಂದ ಸ್ಪರ್ಧಿಸಲು ಒತ್ತಾಯವಿದೆ. ಹೈಕಮಾಂಡ್ ಹೇಳಿದರೆ ಸ್ಪರ್ಧಿಸಬೇಕಾಗುತ್ತದೆ’ ಎಂದು ಹೇಳಿದರು. ಪ್ರತಿಯೊಂದು ಕ್ಷೇತ್ರದ ಬಗ್ಗೆಯೂ ಹೈಕಮಾಂಡ್ ತೀರ್ಮಾನವೇ ಅಂತಿಮವಾಗುತ್ತದೆ. ಕ್ಷೇತ್ರಗಳ ಬಗ್ಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚರ್ಚಿಸಿ ಅಂತಿಮವಾಗಿ ಹೈಕಮಾಂಡ್ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ಮಾಡುತ್ತಾರೆ ಎಂದರು.
Punyakoti Dattu Yojana: ಗೋರಕ್ಷಣೆಗೆ ಸರ್ಕಾರಿ ನೌಕರರ ವಂತಿಗೆ
ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ: ಮುಂದಿನ ಮುಖ್ಯಮಂತ್ರಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಈಗ ಅಪ್ರಸ್ತುತ. ಚುನಾವಣೆಯಲ್ಲಿ ಗೆದ್ದ ಬಳಿಕ ಅದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಆದರೆ ಪಕ್ಷದ ಗೆಲುವಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ, ಮುಂದೆಯೂ ಮಾಡುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇವನಹಳ್ಳಿ ಕ್ಷೇತ್ರದಿಂದ ಮುನಿಯಪ್ಪ ಅಖಾಡಕ್ಕೆ?: ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಅವರು ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವ ಸಂಭವ ಇದೆ.
ಪರಿಶಿಷ್ಟಜಾತಿಗೆ ಮೀಸಲಾಗಿರುವ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಸ್ಥಳೀಯ ಕಾಂಗ್ರೆಸ್ಸಿಗರ ಒತ್ತಾಯವಿದೆ. ಹೀಗಾಗಿ ನೆರೆ ಜಿಲ್ಲೆಯವರಾದ ಹಾಗೂ ಸಮುದಾಯದ ಮತ, ವೈಯಕ್ತಿಕ ವರ್ಚಸ್ಸನ್ನೂ ಹೊಂದಿರುವ ಕೆ.ಎಚ್.ಮುನಿಯಪ್ಪ ಅವರಿಗೆ ದೇವನಹಳ್ಳಿಯಿಂದ ಸ್ಪರ್ಧಿಸುವಂತೆ ಒತ್ತಡ ಹೆಚ್ಚಾಗಿದೆ. ಇದಕ್ಕೆ ಹೈಕಮಾಂಡ್ ಸಹ ಪೂರಕವಾಗಿ ಸ್ಪಂದಿಸಿರುವ ಹಿನ್ನೆಲೆಯಲ್ಲಿ ದೇವನಹಳ್ಳಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಮುನಿಯಪ್ಪ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿದ್ಯುನ್ಮಾನ ವಲಯದಲ್ಲಿ 36000 ಕೋಟಿ ಹೂಡಿಕೆ: ಸಚಿವ ಅಶ್ವತ್ಥ್ ನಾರಾಯಣ
ಈ ಕ್ಷೇತ್ರದಲ್ಲಿ 2008ರ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿಲ್ಲ. 2008ರಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದ ವೆಂಕಟಸ್ವಾಮಿ ಅವರಿಗೆ 2013 ಹಾಗೂ 18ರಲ್ಲಿ ಅವಕಾಶ ನೀಡಿದ್ದರೂ ಗೆಲುವು ಸಾಧಿಸಿಲ್ಲ. ಹೀಗಾಗಿ ಎರಡೂ ಬಾರಿ ಜೆಡಿಎಸ್ ಗೆಲುವು ಸಾಧಿಸಿತ್ತು. 2018ಕ್ಕೆ ಹೋಲಿಸಿದರೆ ಕ್ಷೇತ್ರದ ಸನ್ನಿವೇಶ ಸಂಪೂರ್ಣವಾಗಿ ಬದಲಾಗಿದೆ. ಹೀಗಾಗಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಕೆ.ಎಚ್.ಮುನಿಯಪ್ಪ ಅವರ ಸಮುದಾಯದ ಮತಗಳು ದೇವನಹಳ್ಳಿಯಲ್ಲಿ ಹೆಚ್ಚಿವೆ. ಜತೆಗೆ ಹಿರಿಯ ನಾಯಕರಾಗಿದ್ದು ಹಲವು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿರುವ ಮುನಿಯಪ್ಪ ಅವರು ಸ್ಪರ್ಧಿಸಿದರೆ ಗೆಲುವು ಸುಲಭವಾಗಲಿದೆ. ಹೀಗಾಗಿ ಅವರೇ ಸ್ಪರ್ಧಿಸಬೇಕು ಎಂದು ಒತ್ತಾಯ ಕೇಳಿ ಬಂದಿದೆ.