
ಬೆಂಗಳೂರು (ಮೇ.27): ನೂತನ ಸಂಸತ್ ಭವನ ಉದ್ಘಾಟನೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಜರಿಗೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸರ್ವಾನುಮತದಿಂದ ಸಹಮತ ವ್ಯಕ್ತಪಡಿಸುವುದರ ಜತೆಗೆ ರೈತಪರ ಹೋರಾಟದ ನಿರ್ಣಯವನ್ನು ಅಂಗೀಕರಿಸಿದೆ. ಶುಕ್ರವಾರ ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತೆರಳುವುದಕ್ಕೆ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದ ಸಹಮತ ವ್ಯಕ್ತಪಡಿಸಲಾಯಿತು. ದೇಶದ ಹಲವು ರಾಜಕೀಯ ಪಕ್ಷಗಳು ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿರುವ ಹಿನ್ನೆಲೆಯಲ್ಲಿ ಈ ವಿಷಯ ಬಗ್ಗೆ ಕಾರ್ಯಕಾರಿಣಿಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಜರಾಗುವುದು ತಪ್ಪೇನಲ್ಲ. ಆದರೆ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಾನ ಅಂತರ ಕಾಯ್ದುಕೊಳ್ಳಲಾಗುವುದು ಮತ್ತು ಪಕ್ಷದ ಸೈದ್ಧಾಂತಿಕ ನಿಲುವಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂಬುದನ್ನು ಕಾರ್ಯಕಾರಿಣಿ ಸ್ಪಷ್ಟಪಡಿಸಿದೆ. ಮುಂದಿನ ಲೋಕಸಭಾ ಚುನಾವಣೆಗೂ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕಾರ್ಯಕಾರಿಣಿ ಸಮಾಲೋಚನೆ ನಡೆಸಿತು. ಹಾಗೆಯೇ ಪಕ್ಷದ ಸದಸ್ಯತ್ವ ನೋಂದಣಿ ವಿಚಾರದಲ್ಲಿ ಕೇರಳ ನಾಯಕರು ಹೆಚ್ಚು ಆದ್ಯತೆ ಕೊಡಬೇಕು. ಅದಕ್ಕೂ ಕಾರ್ಯಕಾರಿಣಿ ಒಪ್ಪಿಗೆಯ ಮುದ್ರೆ ಒತ್ತಿದೆ ಎಂದು ತಿಳಿಸಿದರು.
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಡಬಲ್ ಖುಷಿ: ಒಂದೆಡೆ ಮಂತ್ರಿ, ಮತ್ತೊಂದೆಡೆ ಅಜ್ಜಿ ಆದ ಸಂಭ್ರಮ!
ರೈತರ ಪರವಾಗಿ ಹೋರಾಟ: ದೇಶದ ಉದ್ದಗಲಕ್ಕೂ ರೈತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸೂಕ್ತ ಬೆಲೆ, ಸಬ್ಸಿಡಿ, ರಸಗೊಬ್ಬರ ಸಮಸ್ಯೆ ಇತ್ಯಾದಿ ಸೌಲಭ್ಯ ಸಿಗದೆ ಕಂಗಾಲಾಗಿದ್ದಾರೆ. ಹೀಗಾಗಿ ದೇಶಾದ್ಯಂತ ರೈತರ ಪರವಾಗಿ ಬೃಹತ್ ಹೋರಾಟವನ್ನು ದೇವೇಗೌಡರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ರೂಪಿಸಬೇಕು ಎಂದು ಕೇರಳದ ಸಚಿವ ಕೃಷ್ಣನ್ ಕುಟ್ಟಿನಿರ್ಣಯ ಮಂಡಿಸಿದರು. ಈ ನಿರ್ಣಯಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಸಭೆಯಲ್ಲಿ ಕೇರಳ, ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶದ ನಾಯಕರು, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿರುವುದರಿಂದ ಎದೆಗುಂದಬಾರದು ಎಂದು ಆತ್ಮಸ್ಥೈರ್ಯ ತುಂಬಿದ್ದಾರೆ. ಸದಾ ನನ್ನ ಜತೆ ನಿಲ್ಲುವುದಾಗಿ ಹೇಳಿದ್ದಾರೆ ಎಂದು ನುಡಿದರು.
ವಿಕಾಸಸೌಧ ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರಪತಿಗಳನ್ನು ಕರೆಸಿತ್ತಾ?: ಎಚ್‌ಡಿಕೆ
ಕಾರ್ಯಕಾರಿಣಿ ಸಭೆಯಲ್ಲಿ ಕೇರಳದ ಸಚಿವ ಕೃಷ್ಣನ್ ಕುಟ್ಟಿ, ಕೇರಳ ರಾಜ್ಯಾಧ್ಯಕ್ಷ ಮ್ಯಾಥ್ಯೂ ಥಾಮಸ್, ತಮಿಳುನಾಡು ರಾಜ್ಯಾಧ್ಯಕ್ಷ ಪೊನ್ನುಸ್ವಾಮಿ ಸೇರಿದಂತೆ ಆಂಧ್ರಪ್ರದೇಶ, ಒಡಿಶಾ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ಮಹಾರಾಷ್ಟ್ರ, ಹರಿಯಾಣ, ಪಂಜಾಬ್ ಇತರೆ ರಾಜ್ಯಗಳ ಪ್ರತಿನಿಧಿಗಳು ಕಾರ್ಯಕಾರಿಣಿಯಲ್ಲಿ ಭಾಗಿಯಾಗಿದ್ದರು ಎಂದರು. ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ, ವೆಂಕಟರಾವ್ ನಾಡಗೌಡ ಇತರರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.