
ಬೆಂಗಳೂರು, (ಅ.26): : ಉಪಚುನಾವಣೆ ಗೆಲ್ಲಲು ಒಂದು ಕಡೆ ಜಾತಿ, ಇನ್ನೊಂದು ಕಡೆ ಅಧಿಕಾರ ಬಳಸಲಾಗುತ್ತಿದೆ. ಕೊರೋನಾ ವೈರಸ್‌ಗಿಂತಲೂ ಇಂತಹ ನಾಯಕರು ಅಪಾಯಕಾರಿ. ಮತದಾರರಿಗೆ ಹಣ, ಹೆಂಡ ಹಂಚಿದ್ದಾಯಿತು, ಈಗ ಸೆಟ್‌ಟಾಪ್ ಬಾಕ್ಸ್ ನೀಡುತ್ತಿದ್ದಾರೆ ಎಂದು ಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ್ ಆರೋಪಿಸಿದರು.
ಬೆಂಗಳೂರಿನ ಜೆಪಿ ಭವನದಲ್ಲಿ ಇಂದು (ಸೋಮವಾರ) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಜಾತಿ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ. ಹುಟ್ಟಿದಾಗ ಜಾತಿ-ಜಾತಕ, ಮಧ್ಯದಲ್ಲಿ ನಾಟಕ, ಸತ್ತಾಗ ಸೂತಕ ಎಂದು ಎಲ್ಲರಿಗೂ ಗೊತ್ತಿದೆ. ಜಾತಿ ಬಿಟ್ಟು, ಅಭಿವೃದ್ಧಿ ಬಗ್ಗೆ ಮಾತನಾಡಬೇಕು. ಸರಕಾರ ಮ್ಯಾಚ್ ಫಿಕ್ಸಿಂಗ್ ರೀತಿ ವೋಟ್ ಫಿಕ್ಸಿಂಗ್ ಮಾಡಿರುವಂತೆ ಕಾಣುತ್ತಿದೆ ಎಂದರು.
ಎರಡು ರಾಷ್ಟ್ರೀಯ ಪಕ್ಷಗಳು ಚುನಾವಣಾ ಅಕ್ರಮ ಎಸಗುತ್ತಿದ್ದರೂ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಬಿಜೆಪಿಯಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ
ಬಿಜೆಪಿ ಅಭ್ಯರ್ಥಿ ಶಾಸಕ ಸ್ಥಾನ ಮಾರಾಟ ಮಾಡಿಕೊಂಡಿದ್ದಕ್ಕೆ ಉಪಚುನಾವಣೆ ಬಂದಿದೆ. ಆದರೆ, ಫೇಸ್‌ಬುಕ್‌ಗಳಲ್ಲಿ ನಮ್ಮ ಅಭ್ಯರ್ಥಿ ಮಾರಾಟವಾಗಿದ್ದಾರೆ ಎಂದು ಸುಳ್ಳುಸುದ್ದಿಯನ್ನು ಉದ್ದೇಶಪೂರ್ವಕವಾಗಿ ಹಬ್ಬಿಸಲಾಗುತ್ತಿದೆ. ಈ ಮೂಲಕ ನಮ್ಮ ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ. ಆದ್ದರಿಂದ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಮಾತನಾಡಿ, ಮಾರಾಟ ಆಗಿರುವುದು ನಾವಲ್ಲ, ಬಿಜೆಪಿ ಮತ್ತು ಕಾಂಗ್ರೆಸ್‌ನವರು ಮಾರಾಟವಾಗಿದ್ದಾರೆ. ನನ್ನ ಮೇಲೆ ಭಯ ಹುಟ್ಟಿರುವುದರಿಂದಲೇ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸುಖಾ ಸುಮ್ಮನೇ ವ್ಯಕ್ತಿಯ ತೇಜೋವಧೆ ಮಾಡುವುದು ಸರಿಯಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ನಮ್ಮ ನಾಯಕರು ಟಿಕೆಟ್ ಕೊಟ್ಟಿದ್ದೇ ತಪ್ಪಾ..? ಯುವಕರು ಬೆಳೆಯಬಾರದಾ..? ಎಂದು ಪ್ರಶ್ನಿಸಿದರು.
ಚುನಾವಣೆ ವೇಳೆ ಹನುಮಂತರಾಯಪ್ಪ ಅವರಿಗೆ ಒಕ್ಕಲಿಗರ ಮೇಲೆ ಪ್ರೀತಿ ಬಂದಿದೆ. ಜಾತಿ ಹೆಸರು ಹೇಳುವುದಕ್ಕಿಂತ ಮುಂಚೆ ಸಮಾಜಕ್ಕೆ ನೀವು ಏನು ಮಾಡಿದ್ದೀರಿ ಎಂಬುದನ್ನು ಹೇಳಬೇಕು. ಐಎಎಸ್ ಅಧಿಕಾರಿ ಡಿ.ಕೆ.ರವಿ ಕುಟುಂಬ ಕೂಡ ಒಕ್ಕಲಿಗರೇ ಅವರಿಗೇಕೆ ಸಹಾಯ ಮಾಡಲಿಲ್ಲ. ಕುಮಾರಣ್ಣ, ದೇವೇಗೌಡರು ಒಕ್ಕಲಿಗರೇ. ಚುನಾವಣೆಯಲ್ಲಿ ಜಾತಿ ರಾಜಕಾರಣ ಏಕೆ ಮಾಡುತ್ತಿದ್ದೀರಿ ಎಂದು ಅವರು ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.