
ಬೆಂಗಳೂರು (ನ.26): ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವಂತೆ ಏಳು ಕಡೆ ಹೊಸದಾಗಿ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ನಿರ್ಮಾಣಕ್ಕೆ ಕೂಡಲೇ ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದಲ್ಲಿ ಮಧುಗಿರಿ, ಇಂಡಿಯಲ್ಲಿ ನಬಾರ್ಡ್ ಸಹಯೋಗದಲ್ಲಿ ಮತ್ತು ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರಿನಲ್ಲಿ ಕೆಕೆಆರ್‌ಡಿಬಿ ಮ್ಯಾಕ್ರೋ ಅನುದಾನದಲ್ಲಿ ನೂತನ ಜಿಟಿಟಿಸಿ ಸ್ಥಾಪನೆ ಕುರಿತು ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡುವ ಜಿಟಿಟಿಸಿ ಮೂಲಕ ಗ್ರಾಮೀಣ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ. ರಾಜ್ಯದಲ್ಲಿ ಒಟ್ಟು 32 ಜಿಟಿಟಿಸಿ ಕೇಂದ್ರಗಳಿವೆ. ಅದರ ಜತೆಗೆ ಈ ಬಾರಿಯ ಬಜೆಟ್‌ನಲ್ಲಿ ಹೊಸದಾಗಿ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದೆ. ಆ ಕೇಂದ್ರಗಳ ಕಾಮಗಾರಿ ಶೀಘ್ರದಲ್ಲಿ ಆರಂಭಿಸಬೇಕು. ಇಂಡಿ, ಮಧುಗಿರಿ, ಕಂಪ್ಲಿ, ರಾಯಚೂರು ಗ್ರಾಮೀಣ, ಸಿಂಧನೂರಿನಲ್ಲಿ ಜಿಟಿಟಿಸಿ ಪ್ರಾರಂಭಿಸಲು ಈಗಾಗಲೇ ಸ್ಥಳ ಗುರುತಿಸಲಾಗಿದೆ. ಆ ಸ್ಥಳಗಳನ್ನು ಕಾಮಗಾರಿ ಆರಂಭಿಸಲು ಶೀಘ್ರ ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು.
ಉಳಿದಂತೆ ಸಂಡೂರು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಜಿಟಿಟಿಸಿ ಆರಂಭಕ್ಕೆ ಬೇಕಾಗುವ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪ್ರಾರಂಭಿಸಬೇಕು ಎಂದು ಸೂಚನೆ ನೀಡಿದರು. ಜಿಟಿಟಿಸಿ ಪ್ರವೇಶಾತಿಯನ್ನು 6 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇಲ್ಲಿಂದ ತರಬೇತಿ ಪಡೆದು ಹೊರಬರುವ ವಿದ್ಯಾರ್ಥಿಗಳಿಗೆ ವಿದೇಶಿ ಸಂಸ್ಥೆಗಳೂ ಸೇರಿ ಇನ್ನಿತರ ಸಂಸ್ಥೆಗಳಲ್ಲಿ ಶೇ.100ರಷ್ಟು ನೇಮಕಾತಿ ಆಗುತ್ತಿದೆ. ಯಾವ ಕೋರ್ಸ್‌ಗಳಿಗೆ ಬೇಡಿಕೆ ಇದೆಯೋ ಅಂತಹ ಕೋರ್ಸ್‌ಗಳನ್ನು ಪ್ರಾರಂಭಿಸಬೇಕು. ಕೈಗಾರಿಕೆಗಳ ಬೇಡಿಕೆಗಳಿಗೆ ಅನುಗುಣವಾಗಿ ಕೌಶಲ್ಯ ತರಬೇತಿ ನೀಡಬೇಕು ಹಾಗೂ ಕಾರ್ಮಿಕ ಇಲಾಖೆಯ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.
ಈ ವೇಳೆ ಅಧಿಕಾರಿಗಳು, ಜಿಟಿಟಿಸಿ ಉತ್ಪಾದನಾ ಕೇಂದ್ರಗಳಲ್ಲಿ ಇಸ್ರೋದ ಚಂದ್ರಯಾನ ನೌಕೆ ಲೂನಾರ್ ರೋವರ್ ಚಕ್ರದ ಉತ್ಪಾದನೆ ಸೇರಿ ಹಲವು ವೈಮಾನಿಕ ಉಪಕರಣಗಳ ಉತ್ಪಾದನೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಪಾನ್, ಜರ್ಮನಿ, ಆಸ್ಟ್ರೇಲಿಯಾ ಸೇರಿ ವಿವಿಧ ರಾಷ್ಟ್ರಗಳೊಂದಿಗೆ ಜಿಟಿಟಿಸಿ ಒಡಂಬಡಿಕೆ ಮಾಡಿಕೊಳ್ಳಲಿದೆ ಎಂದು ಮಾಹಿತಿ ನೀಡಿದರು. ಸಚಿವ ಡಾ। ಶರಣಪ್ರಕಾಶ್ ಪಾಟೀಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.