ಕರ್ನಾಟಕದಲ್ಲಿ ಕಳಂಕರಹಿತ ಬಿಜೆಪಿಗನ ತೋರಿಸಿದರೆ ಪ್ರಧಾನಿಗೆ ಸನ್ಮಾನ: ಮೋದಿ ವಿರುದ್ಧ ಸಿದ್ದು ತಿರುಗೇಟು..!

By Kannadaprabha News  |  First Published Sep 26, 2024, 5:00 AM IST

ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರು. ಹಗರಣದ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವ ಮೋದಿ ಅವರಿಗೆ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ?: ಮುಖ್ಯಮಂತ್ರಿ ಸಿದ್ದರಾಮಯ್ಯ 
 


ಬೆಂಗಳೂರು(ಸೆ.26): ಮುಡಾ ಹಗರಣ ಪ್ರಸ್ತಾಪಿಸಿ ತಮ್ಮನ್ನು ಟೀಕಿಸಿದ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ತೋರಿಸಿದರೆ, ಮೋದಿ ಅವರನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಏರ್ಪಡಿಸುವುದಾಗಿ ಸವಾಲು ಹಾಕಿದ್ದಾರೆ. ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆ ಮಾಡಲು ನೀವು ಸಿದ್ದ ಇದ್ದರೆ ನಾನು ಸದಾ ಸಿದ್ದ ಎಂದು ಪಂಥಾಹ್ವಾನ ನೀಡಿದ್ದಾರೆ. 

ಮೋದಿ ಟೀಕೆ ಹಿನ್ನೆಲೆಯಲ್ಲಿ ಬುಧವಾರ ತಡರಾತ್ರಿ ಸುದೀರ್ಘ ಟ್ವಿಟ್ ಮಾಡಿರುವ ಸಿಎಂ, ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರು. ಹಗರಣದ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವ ಮೋದಿ ಅವರಿಗೆ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ರಾಜ್ಯಪಾಲರು ಕಣ್ಣುಮುಚ್ಚಿಕೊಂಡಿರುವುದೇಕೇ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು? ಎಂದು ಕೇಳಿದ್ದಾರೆ.

Latest Videos

undefined

ಕಾಂಗ್ರೆಸ್ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಬೇರೂರಿದೆ: ಸಿದ್ದುಗೆ ಮೋದಿ ಗುದ್ದು

ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ದವೂ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರಿಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ್ಳಬಹುದೇ? ಎಂದು ಲೇವಡಿ ಮಾಡಿದ್ದಾರೆ.

click me!