
ಬೆಂಗಳೂರು(ಏ.23): ತೆರಿಗೆ ಹಂಚಿಕೆಯಲ್ಲಿ ಕನ್ನಡಿಗರಿಗೆ ಚೊಂಬು ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಾರಿ ಕನ್ನಡಿಗರು ಕೊಡುವುದು ದೊಡ್ಡ ಚೊಂಬನ್ನೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹರಿಹಾಯ್ದಿದ್ದಾರೆ.
ಇಂದು(ಮಂಗಳವಾರ) ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿಡುವ ಸಿಎಂ ಸಿದ್ದರಾಮಯ್ಯ ಅವರು ಮೋದಿ ಹತ್ತತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರೂಢಿಯಾಗಿದೆ ಎಂದು ಕಿಡಿ ಕಾರಿದ್ದಾರೆ.
ಕರ್ನಾಟಕದಲ್ಲಿ ಮೋದಿ ಅಲೆಯಿಲ್ಲ, ಕಾಂಗ್ರೆಸ್ ಗ್ಯಾರಂಟಿ ಅಲೆಯಿದೆ: ಸಿಎಂ ಸಿದ್ದರಾಮಯ್ಯ
ವರ್ಷಕ್ಕೆ 2 ಕೋಟಿಯಂತೆ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಮಾಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಸೃಷ್ಟಿಸದ ಮೋದಿ ಕೆಲಸ ಕೇಳಿದ ವಿದ್ಯಾವಂತರಿಗೆ ಹೋಗಿ ಪಕೋಡ ಮಾರಾಟ ಮಾಡಿ ಎಂದರು ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಮೋದಿ ಮಂಗಳಸೂತ್ರ ಹೇಳಿಕೆ: ಪ್ರಧಾನಿಯಾಗಿ ಇಷ್ಟೊಂದು ಕೀಳುಹೇಳಿಕೆ ನೀಡಬಾರದಿತ್ತು: ಸಿದ್ದರಾಮಯ್ಯ
ಮೋದಿ ಅವರು ನನ್ನ ಕೈಗೆ ಅಧಿಕಾರ ಕೊಡಿ 6 ತಿಂಗಳಲ್ಲಿ ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀನಿ ಎಂದು ಹೇಳಿ ಹತ್ತು ವರ್ಷ ಆಯಿತು. ಹದಿನೈದು ಪೈಸೆಯನ್ನೂ ಹಾಕಲಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದೋರು ರೈತ ಖರ್ಚು ಮೂರು ಪಟ್ಟು ಮಾಡಿಟ್ಟಿದ್ದಾರೆ. ಮೋದಿ ಬಂದ ಮೇಲೆ ಜನ ಸಾಮಾನ್ಯರ, ಮಧ್ಯಮ ವರ್ಗದವರ ಮೇಲೆ ತೆರಿಗೆ ಭಾರ ಹೆಚ್ಚಾಯಿತು. ಉದ್ಯಮಿಗಳ ತೆರಿಗೆ ಭಾರ ಕಡಿಮೆ ಆಯಿತು. ಆದ್ದರಿಂದ ಮೋದಿ ಜನದ್ರೋಹಿ ಹೌದಾ? ಅಲ್ಲವಾ? ಎಂದು ನೀವೇ ತೀರ್ಮಾನ ಮಾಡಬೇಕು ಎಂದು ಮತದಾರರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಕಾಡುಗೊಲ್ಲ ಸಮುದಾಯವನ್ನು ಎಸ್.ಟಿ ಪಟ್ಟಿಗೆ ಸೇರಿಸಬೇಕು ಎನ್ನುವ ಬೇಡಿಕೆಗೆ ನಾವು ಸಂಪೂರ್ಣವಾಗಿ ಸ್ಪಂದಿಸಿದ್ದೇವೆ. ಈ ಬಗ್ಗೆ ಕೇಂದ್ರಕ್ಕೂ ಹಲವು ಬಾರಿ ಶಿಫಾರಸ್ಸು ಮಾಡಿದ್ದಾಗಿದೆ. ಆದರೆ ಈ ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಮನವಿಗೆ ಸ್ಪಂದಿಸಿಲ್ಲ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುತ್ತೇವೆ. ಕಾಡುಗೊಲ್ಲ ಸಮುದಾಯವನ್ನು ಎಸ್.ಟಿ ಮೀಸಲಾತಿ ಪಟ್ಟಿಗೆ ಸೇರಿಸುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.