ನನಗೆ ಮೈಸೂರಲ್ಲಿಸ್ವಂತ ಮನೆ ಇಲ್ಲ, ಇದ್ದ ಮನೆ ಸಾಲ ತೀರಿಸಲಾಗದೆ ಮಾರಿಬಿಟ್ಟೆ: ಸಿಎಂ ಸಿದ್ದರಾಮಯ್ಯ

By Kannadaprabha News  |  First Published Aug 10, 2024, 10:40 AM IST

ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಸ್ವಂತ ಮನೆ ಇಲ್ಲ. ಈಗಷ್ಟೇ ಕಟ್ಟಿಸುತ್ತಿದ್ದೇನೆ. ಹಿಂದೆ ಇದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆಯನ್ನು ಮಾರಿಬಿಟ್ಟೆ. ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ಬೆಂಗಳೂರು (ಆ.10): ನಾನು ಎರಡು ಬಾರಿ ಮುಖ್ಯಮಂತ್ರಿ, ಎರಡು ಬಾರಿ ಉಪಮುಖ್ಯಮಂತ್ರಿ, ಹಲವು ಬಾರಿ ಸಚಿವನಾಗಿದ್ದೇನೆ. ಕಳೆದ ನಾಲ್ಕು ದಶಕಗಳಿಂದ ಮುಂಚೂಣಿ ರಾಜಕಾರಣದಲ್ಲಿದ್ದೇನೆ. ಹೀಗಿದ್ದರೂ ನನಗೆ ಈಗ ಕಟ್ಟುತ್ತಿರುವ ಮನೆ ಬಿಟ್ಟು ಮೈಸೂರಿನಲ್ಲಿ ಒಂದು ನಿವೇಶನವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದಪಡಿಸಿದರು.

ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಸ್ವಂತ ಮನೆ ಇಲ್ಲ. ಈಗಷ್ಟೇ ಕಟ್ಟಿಸುತ್ತಿದ್ದೇನೆ. ಹಿಂದೆ ಇದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆಯನ್ನು ಮಾರಿಬಿಟ್ಟೆ.

Tap to resize

Latest Videos

ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

ಅನೇಕ ಸಚಿವರೇ ಸಿಎಂ ಸಿದ್ದರಾಮಯ್ಯ ಪತ್ನಿಯನ್ನ ನೋಡಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ 

‘ಮನುವಾದಿ ಹಾಗೂ ಜಾತಿವಾದಿಗಳು ಎಂದಿಗೂ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ಹೀಗಾಗಿಯೇ ದುರುದ್ದೇಶದಿಂದ ನನ್ನ ಸರ್ಕಾರವನ್ನು ಅಸ್ಥಿರಗೊಳಿಸಲು ಕಪಟ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜಭವನ ಮತ್ತು ಕೇಂದ್ರ ಸರ್ಕಾರವು ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ನಾನು ಈವರೆಗೆ ಎಂದೂ ಸೇಡಿನ ರಾಜಕಾರಣ ಮಾಡಿಲ್ಲ. ನಾನು ಇವರಂತೆ ದ್ವೇಷದ ರಾಜಕಾರಣ ಮಾಡಿದ್ದರೆ ಬಿ.ಎಸ್. ಯಡಿಯೂರಪ್ಪ,(BS Yadiyurappa) ಬಿ.ವೈ. ವಿಜಯೇಂದ್ರ(BY Vijayendra), ಆರ್. ಅಶೋಕ್‌(R Ashok) ಎಲ್ಲರೂ ಜೈಲಿನಲ್ಲಿರಬೇಕಾಗಿತ್ತು. ನಾನು ಅವರಂತಹ ರಾಜಕೀಯ ಮಾಡಿದ್ದರೆ ನನಗೆ ಈ ಪರಿಸ್ಥಿತಿಯೇ ಉದ್ಭವಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ- ಜೆಡಿಎಸ್‌ ಪಾದಯಾತ್ರೆ(BJP JDS padyatra) ವಿರುದ್ಧ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬೃಹತ್ ಜನಾಂದೋಲನ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ದೇವರಾಜ ಅರಸು, ಬಂಗಾರಪ್ಪ, ಧರಂ ಸಿಂಗ್ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ. ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ:

ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ರಾಜಭವನ ಬಳಸಿಕೊಂಡು ಷಡ್ಯಂತ್ರ:

ರಾಜಭವನವನ್ನು ದುರುಪಯೋಗ ಮಾಡಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ. ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.

ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ. 1983ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250 ರು. ಡೆಪಾಸಿಟ್‌ ಕಟ್ಟಿದ್ದರು. ಈವರೆಗೆ ಜನರೇ ನನ್ನನ್ನು ಗೆಲ್ಲಿಸಿದ್ದಾರೆ ಎಂದು ತಮ್ಮ ಸಚ್ಚಾರಿತ್ರ್ಯದ ಬಗ್ಗೆ ಹೇಳಿಕೊಂಡರು.

ಸಿದ್ದು ವರ್ಷನ್‌-2 ಅಂದ್ರೆ ಬನಾನಾ ರಿಪಬ್ಲಿಕ್‌! - ಅರವಿಂದ್ ಬೆಲ್ಲದ್ ವಿಶೇಷ ಅಂಕಣ 

ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ಹೀಗಾಗಿ ಹಗರಣವೇ ಅಲ್ಲದ ಮುಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು. ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ ಎಂದು ಕರೆ ನೀಡಿದರು.

click me!