
ಬೆಂಗಳೂರು (ಫೆ.21): ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯನ್ನು ಗೆದ್ದು 135 ಸ್ಥಾನಗಳೊಂದಿಗೆ ಬಹುಮತ ಪಡೆದು ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ದಿಢೀರನೆ ಎಲ್ಲ ಶಾಸಕರನ್ನು ಎರಡು ದಿನಗಳ ಕಾಲ ರೆಸಾರ್ಟ್‌ಗೆ ಶಿಫ್ಟ್ ಮಾಡಲು ನಿರ್ಧಾರ ಕೈಗೊಂಡಿದೆ.
ಹೌದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಿಂದ ತನ್ನೆಲ್ಲಾ ಶಾಸಕರನ್ನು ಎರಡು ದಿನಗಳ ಕಾಲ ರೆಸಾರ್ಟ್‌ಗೆ ಶಿಫ್ಟ್ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಫೆ.25ರ ಭಾನುವಾರ ಕಾಂಗ್ರೆಸ್‌ನ ಎಲ್ಲಾ ಶಾಸಕರು ರೇಸಾರ್ಟ್ ಗೆ ಶಿಫ್ಟ್ ಮಾಡಲಾಗುತ್ತದೆ. ಫೆ.26 ರಂದು ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಖಾಸಗಿ ರೆಸಾರ್ಟ್‌ನಲ್ಲಿ ನಡೆಸಲಾಗುತ್ತದೆ. ನಂತರ ಫೆ.27ರಂದು ಕಾಂಗ್ರೆಸ್‌ನ ಎಲ್ಲ ಶಾಸಕರು ನೇರವಾಗಿ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ಈ ಬಗ್ಗೆ ವಿಧಾನಸಭಾ ಮೊಗಸಾಲೆಯಲ್ಲಿ ಕಾಂಗ್ರೆಸ್ ಮುಖ್ಯ ಸಚೇತಕ ಅಶೋಕ ಪಟ್ಟಣ್ ಅವರು ತಮ್ಮ ಪಕ್ಷದ ಎಲ್ಲ ಶಾಸಕರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.
ಅಮ್ಮಾ ತಾಯಿ ನಿರ್ಮಲ ಸೀತಾರಾಮನ್ ಘೋಷಿಸಿದ ಹಣ ಕೊಡಿ, 100 ಕೋಟಿ ನಮಸ್ಕಾರ ಮಾಡ್ತೀನಿ: ಸಿಎಂ ಸಿದ್ದರಾಮಯ್ಯ ಮನವಿ
ಕಾಂಗ್ರೆಸ್ ಶಾಸಕರನ್ನು ದಿಢೀರನೆ ರೆಸಾರ್ಟ್‌ಗೆ ಶಿಫ್ಟ್ ಮಾಡಲು ಕೂಡ ಒಂದು ಪ್ರಮುಖ ಕಾರಣವಿದೆ. ಇಲ್ಲಿ ರಾಜ್ಯಸಭಾ ಚುನಾವಣಾ ರಣಕಣದ ಬಗ್ಗೆ ಚರ್ಚೆ ಮಾಡಲಾಗುತ್ತದೆ. ವಿಧಾನಸಭಾ ಮೊಗಸಾಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಾಕನ್ ಅವರನ್ನು ಗೆಲ್ಲಿಸಲು ಸೂಚನೆ ನೀಡಲಾಗುತ್ತದೆ. ಹೀಗಾಗಿ ಶಾಸಕರು, ಸಚಿವರ ಮತಯಾಚನೆಯನ್ನು ಮಾಡಲಾಗುತ್ತದೆ. ಈ ವೇಳೆ ಕಾಂಗ್ರೆಸ್ ಹಿರಿಯ ನಾಯಕರು ಕೂಡ ಭಾಗಿಯಾಗಲಿದ್ದಾರೆ. ಎಲ್ಲ ಶಾಸಕರಿಗೂ ರಾಜ್ಯಸಭೆ ಜೊತೆಗೆ ಲೋಕಸಭಾ ಚುನಾವಣಾ ಜವಾಬ್ದಾರಿಗಳನ್ನು ನೀಡಲಾಗುತ್ತದೆ ಎಂಬ ಸುಳಿವು ಸಿಕ್ಕಿದೆ.
ಇಂದು ರಾತ್ರಿ ದಿಢೀರ್ ಮೀಟಿಂಗ್ ಆಯೋಜನೆ:
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಪರ್ಧೆಗೆ ಇಳಿಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಇಂದು ರಾತ್ರಿಯೇ ಮಹತ್ವದ ಸಭೆಯೊಂದನ್ನು ನಡೆಸಲಾಗುತ್ತದೆ. ಇಂದು ರಾತ್ರಿ ಕೂಡ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಲಾಗುತ್ತದೆ. ಹಳೆ ಮೈಸೂರು ಭಾಗದ ಕಾಂಗ್ರೆಸ್ ಶಾಸಕರು, ಸಚಿವರು ಹಾಗೂ ಸಂಸದರಿಗೆ ಆಹ್ವಾನ ನೀಡಲಾಗುತ್ತದೆ.
ಖಾಸಗಿ ಶಾಲೆಗಳಲ್ಲಿ ಕುವೆಂಪು ನಾಡಗೀತೆ ಕಡ್ಡಾಯವಲ್ಲ: ಸರ್ಕಾರದ ಆದೇಶ!
ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ ಸಭೆ ಆಯೋಜನೆ: ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಲೋಕಸಭೆ ಸ್ಥಾನಗಳನ್ನು ಗೆಲ್ಲಲು ರಣತಂತ್ರ ಹೂಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಕ್ಕಲಿಗ ನಾಯಕರಾದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಈ ಸಭೆಯನ್ನು ಆಯೋಜನೆ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಯಾರನ್ನು ಅಭ್ಯರ್ಥಿ ಮಾಡಬೇಕು ಎಂಬ ನಿಟ್ಟಿನಲ್ಲಿ ಚರ್ಚೆ ಮಾಡಲಾಗುತ್ತಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಕಟ್ಟಿ ಹಾಕುವ ನಿಟ್ಟಿನಲ್ಲಿಯೂ ಚರ್ಚಿಸಲಾಗುತ್ತದೆ. ಇನ್ನು ಎಲ್ಲ ಶಾಸಕರಿಗೂ ಭರ್ಜರಿ ಭೋಜನದ ವ್ಯವಸ್ಥೆಯೂ ಇರುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.