
ವರದಿ: ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್
ಕೊಡಗು (ಮೇ.16): ಕೊಡಗು ಜಿಲ್ಲೆಯಲ್ಲಿ ಎರಡುವರೆ ದಶಕಗಳ ಬಳಿಕ ಕಾಂಗ್ರೆಸ್ ಪಕ್ಷ ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ ವಿಜಯ ಸಾಧಿಸಿದೆ. ಮತ್ತೊಂದೆಡೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುತ್ತಿದ್ದಂತೆ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ಆಗ್ರಹ ಕೇಳಿ ಬರತೊಡಗಿದೆ. ಮಡಿಕೇರಿಯಲ್ಲಿ ಮಾತನಾಡಿರುವ ಮಾಜಿ ಎಂಎಲ್ಸಿ ವೀಣಾ ಅಚ್ಚಯ್ಯ, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಮಂತರ್ಗೌಡ ಗೆಲುವು ಪಡೆದಿದ್ದರೆ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎ.ಎಸ್. ಪೊನ್ನಣ್ಣ ವಿಜಯ ಸಾಧಿಸಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರು ಜಬಾಬ್ದಾರಿ ನೀಡಿದ್ದರು. ಈಗ ಎರಡು ಸ್ಥಾನಗಳಲ್ಲೂ ಕಾಂಗ್ರೆಸ್ ಗೆಲುವು ಪಡೆದಿದೆ. ಹೀಗಾಗಿ ಕೇಂದ್ರದ ನಾಯಕರು ಸಿಎಂ ಆಯ್ಕೆ ಮಾಡುತ್ತಿದ್ದಂತೆ, ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಕೊಡಗಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸುತ್ತೇವೆ ಎಂದು ಮಾಜಿ ಎಂಎಲ್ಸಿ ವೀಣಾ ಅಚ್ಚಯ್ಯ ಹೇಳಿದ್ದಾರೆ.
ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದ್ದು, ಜಿಲ್ಲೆಗೆ ಸಚಿವ ಸ್ಥಾನ ನೀಡಿದರೆ ಅಭಿವೃದ್ಧಿ ಕೆಲಸಗಳು ಆಗಲಿವೆ. ಆದ್ದರಿಂದ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಸಚಿವಸ್ಥಾನ ನೀಡುವಂತೆ ಆಗ್ರಹಿಸುತ್ತೇವೆ ಎಂದಿದ್ದಾರೆ. ಮತ್ತೊಂದೆಡೆ ಕೆಪಿಸಿಸಿ ವಕ್ತಾರರಾಗಿರುವ ಸಂಕೇತ್ ಪೂವಯ್ಯ ಅವರು ಕೂಡ ವಿರಾಜಪೇಟೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಎ.ಎಸ್. ಪೊನ್ನಣ್ಣ ಅವರಿಗೆ ಸಚಿವಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.
ಕೆಪಿಸಿಸಿಯ ಯಾವುದೇ ಪ್ರಕರಣಗಳಿದ್ದರೂ ಅವುಗಳನ್ನು ಸಮರ್ಥವಾಗಿ ಗೆದ್ದಿದ್ದಾರೆ. ಅಲ್ಲದೆ ಎರಡು ಬಾರಿ ಅಡ್ವೋಕೇಟ್ ಜನರಲ್ ಆಗಿ ಕೆಲಸ ಮಾಡಿರುವ ಅನುಭವ ಎ.ಎಸ್. ಪೊನ್ನಣ್ಣ ಅವರಿಗೆ ಇದೆ. ಹೀಗಾಗಿ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಬೇಕು. ಜಿಲ್ಲೆಯಲ್ಲಿ ಕಾಡು ಪ್ರಾಣಿ ಮತ್ತು ಮಾನವ ಸಂಘರ್ಷ ಮಿತಿ ಮೀರಿದೆ. ಜೊತೆಗೆ ಜಿಲ್ಲೆಯಲ್ಲಿ ಅಘಾದವಾದ ಸಮಸ್ಯೆಗಳಿವೆ. ಅವುಗಳನ್ನು ವಿಧಾನಸಭೆಯಲ್ಲಿ ಸಮರ್ಥವಾಗಿ ಮಂಡಿಸುವ ಮೂಲಕ ಅವುಗಳು ಅಲ್ಲಿ ಚರ್ಚೆಯಾಗುವಂತೆ ಮಾಡಬೇಕಾಗಿದೆ. ಅವುಗಳಿಗೆ ಪರಿಹಾರವನ್ನು ಹುಡುಕಬೇಕಾಗಿದೆ. ಅದಕ್ಕಾಗಿ ಅಗತ್ಯವಿರುವ ಅನುದಾನವನ್ನು ತರಬೇಕಾದ ಅಗತ್ಯವಿದೆ.
Karnataka Govt Formation: ಮೇ.18 ಕ್ಕೆ ಸಿಎಂ ಪ್ರಮಾಣ ವಚನ ಕಾರ್ಯಕ್ರಮ
ಹೀಗಾಗಿ ಶಾಸಕರಾಗಿರುವ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎನ್ನುವ ನಂಬಿಕೆ ಇದೆ. ಸಿಎಂ ಆಯ್ಕೆಯಾಗುತ್ತಿದ್ದಂತೆ ನಾವು ಬೆಂಗಳೂರಿಗೆ ನಿಯೋಗ ಹೋಗಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತೇವೆ ಎಂದಿದ್ದಾರೆ. ಒಟ್ಟಿನಲ್ಲಿ ಕೊಡಗಿಗೆ ಒಂದು ಸಚಿವ ಸ್ಥಾನ ನೀಡಲೇಬೇಕು ಎನ್ನುವುದು ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರ ಆಗ್ರಹ.
Karnataka cabinet list 2023 : ದೆಹಲಿ ತಲುಪಿದ ಸಂಭಾವ್ಯ ಸಚಿವರ ಪಟ್ಟಿ,
2014 ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಜಿಲ್ಲೆಗೆ ಪ್ರಾತಿನಿಧ್ಯ ನೀಡಿ, ದಿನೇಶ್ ಗುಂಡೂರಾವ್, ಟಿ.ಜಾನ್ ಅವರಿಗೆ ಸಚಿವಸ್ಥಾನ ನೀಡಲಾಗಿತ್ತು. 2008 ಕ್ಕಿಂತಲೂ ಮೊದಲು ಕಾಂಗ್ರೆಸ್ ಅಧಿಕಾರ ನಡೆಸಿದಾಗಲೂ ಜಿಲ್ಲೆಗೆ ಆದ್ಯತೆ ನೀಡಿ, ಸುಮಾ ವಸಂತ್ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಹೀಗಾಗಿ ಈಗಲೂ ಜಿಲ್ಲೆಗೆ ಸಚಿವಸ್ಥಾನ ನೀಡಬೇಕು ಎನ್ನುವುದು ಕಾಂಗ್ರೆಸ್ನ ಆಗ್ರಹ. ಸಚಿವ ಸ್ಥಾನ ನೀಡದಿದ್ದರೆ, ಕೊಡಗು ಜಿಲ್ಲೆಯನ್ನು ಕಡೆಗಣಿಸಿದಂತೆ ಆಗುತ್ತದೆ. ಇದರಿಂದ ಅಭಿವೃದ್ಧಿ ಕುಂಠಿತವಾದಂತೆ ಆಗುತ್ತದೆ. ಆದ್ದರಿಂದ ಜಿಲ್ಲೆಗೆ ಸಚಿವ ಸ್ಥಾನ ನೀಡುವ ಮೂಲಕ ಅಭಿವೃದ್ಧಿಗೆ ಅನುಕೂಲ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.