ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪೋಕ್ಸೊ ಕೇಸ್‌ ದಾಖಲು: ಇರಲಾರದೆ ಇರುವೆ ಬಿಟ್ಕೊಳೋದು ಅಂದ್ರೆ ಇದೆನಾ?

Published : Jan 19, 2026, 12:08 PM IST
B Sriramulu Pocso Case

ಸಾರಾಂಶ

ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಬಳ್ಳಾರಿಯಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದಾರೆ. ಶ್ರೀರಾಮುಲು ಮೇಲೆ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಬಳ್ಳಾರಿ (ಜ.19): ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಬಿ. ಶ್ರೀರಾಮುಲು ಅವರ ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೋಕ್ಸೊ ಸಂತ್ರಸ್ತೆಯ ಹೆಸರನ್ನು ಬಹಿರಂಗವಾಗಿ ಪ್ರಸ್ತಾಪಿಸಿ, ಆಕೆಯ ಗುರುತನ್ನು ಜಗಜ್ಜಾಹೀರು ಮಾಡಿದ ಗಂಭೀರ ಆರೋಪ ಅವರ ಮೇಲಿದೆ.

ಸಮಾವೇಶದಲ್ಲಿ ನಡೆದಿದ್ದೇನು?

ಇತ್ತೀಚೆಗೆ ಬಳ್ಳಾರಿಯ ಎಪಿಎಂಸಿ ಆವರಣದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಭಾಷಣ ಮಾಡುತ್ತಿದ್ದ ಶ್ರೀರಾಮುಲು ಅವರು, ಬಳ್ಳಾರಿ ಶಾಸಕ ಭರತ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ. ಬಳ್ಳಾರಿಯಲ್ಲಿ ಡ್ರಗ್ಸ್ ಮಾಫಿಯಾ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಮಾತನಾಡುವಾಗ, ಇತ್ತೀಚೆಗೆ ದೌರ್ಜನ್ಯಕ್ಕೊಳಗಾಗಿದ್ದ ಅಪ್ರಾಪ್ತ ಬಾಲಕಿಯ ಹೆಸರು, ಆಕೆಯ ಸಮುದಾಯ ಹಾಗೂ ಆಕೆ ಓದುತ್ತಿರುವ ಶಿಕ್ಷಣ ಸಂಸ್ಥೆಯ ಹೆಸರನ್ನು ಬಹಿರಂಗಪಡಿಸಿದ್ದರು.

ಪೋಕ್ಸೊ ಕಾಯ್ದೆಯ ಪ್ರಕಾರ, ಯಾವುದೇ ಕಾರಣಕ್ಕೂ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸುವಂತಿಲ್ಲ. ಆದರೆ, ಶ್ರೀರಾಮುಲು ಅವರು ಭಾಷಣದ ಭರದಲ್ಲಿ ಈ ಸಂವೇದನಾಶೀಲ ವಿವರಗಳನ್ನು ಉಲ್ಲೇಖಿಸಿ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪೊಲೀಸರಿಂದ ಸ್ವಯಂಪ್ರೇರಿತ ದೂರು

ಎಪಿಎಂಸಿ ಠಾಣೆಯ ಸಿಪಿಐ ಮೊಹಮ್ಮದ್ ರಫಿಕ್ ಅವರು ನೀಡಿದ ದೂರಿನ ಮೇರೆಗೆ, ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆ-2012ರ ಕಲಂ 23(1)(2) ಹಾಗೂ ಜೆ.ಜೆ ಆಕ್ಟ್‌ನ ಸೆಕ್ಷನ್ 74ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಬ್ಯಾನರ್ ಗಲಾಟೆ ಮತ್ತು ರಾಜಕೀಯ ಸಂಘರ್ಷ

ಬಳ್ಳಾರಿಯಲ್ಲಿ ಕಳೆದ ಕೆಲವು ದಿನಗಳಿಂದ ರಾಜಕೀಯ ವಾತಾವರಣ ಬಿಸಿಯಾಗಿದೆ. ಜನವರಿ 1 ರಂದು ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಕಟ್ಟುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ದೊಡ್ಡ ಮಟ್ಟದ ಸಂಘರ್ಷ ನಡೆದಿತ್ತು. ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ರಾಜಶೇಖರ್ ಎಂಬ ಯುವಕ ಮೃತಪಟ್ಟಿದ್ದ. ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರ ಮೇಲೆ ಈಗಾಗಲೇ ಕೊಲೆ ಯತ್ನ ಸೇರಿದಂತೆ ಹಲವು ಸೆಕ್ಷನ್‌ಗಳಡಿ ಕೇಸ್ ದಾಖಲಾಗಿದ್ದು, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಘಟನೆಯ ಬೆನ್ನಲ್ಲೇ ಈಗ ಶ್ರೀರಾಮುಲು ಅವರಿಗೆ ಪೋಕ್ಸೊ ಸಂಕಷ್ಟ ಎದುರಾಗಿರುವುದು ಹಿನ್ನಡೆಯಾಗಿ ಪರಿಣಮಿಸಿದೆ.

ಶ್ರೀರಾಮುಲು ಅವರು ಈ ಹಿಂದೆಯೂ ಅನೇಕ ಬಾರಿ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗಿದ್ದರು. ಆದರೆ ಈ ಬಾರಿ ಕಾನೂನುಬದ್ಧವಾಗಿ ರಕ್ಷಿಸಲ್ಪಟ್ಟಿರುವ ಸಂತ್ರಸ್ತೆಯ ವಿವರಗಳನ್ನು ಬಹಿರಂಗಪಡಿಸಿರುವುದು ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯಾವಾಗ ಕಾಂಗ್ರೆಸ್‌ ಸೇರಿದ್ರೋ ಆವಾಗ ಕೆಟ್ಟು ಹೋದ್ರು : ಸಿಎಂ ಬಗ್ಗೆ ನಕ್ಕೊಂತ ಹೇಳಿದ ಹಳೇ ದೋಸ್ತು
ದಿಢೀರ್‌ ಸುರ್ಜೇವಾಲಾ ಭೇಟಿಯಾದ ಜಮೀರ್‌